ಸಾರಾಂಶ
ಕನ್ನಡಪ್ರಭ ವಾರ್ತೆ ಹೊಸಪೇಟೆ
ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣ ಮಾಡಿ 50 ವರ್ಷ ಸಂದಿದೆ. ಕನ್ನಡಿಗರ ಕನ್ನಡಾಭಿಮಾನ ದೇಶದಲ್ಲೇ ಮಾದರಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದರು.ವಿಜಯನಗರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ನಗರಸಭೆಯ ಸಹಯೋಗದಲ್ಲಿ ಬುಧವಾರ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ 68ನೇ ಕರ್ನಾಟಕ ರಾಜೋತ್ಸವ ಕಾರ್ಯಕ್ರಮದಲ್ಲಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಹಾಗೂ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಪಥಸಂಚಲನ ವೀಕ್ಷಿಸಿ ಗೌರವವಂದನೆ ಸ್ವೀಕರಿಸಿ, ಕನ್ನಡ ಜ್ಯೋತಿ ಬೆಳಗಿಸಿ ಮಾತನಾಡಿದರು.
ಇಂದಿನ ಕರ್ನಾಟಕ ರಾಜ್ಯೋತ್ಸವವು ನಮಗೆಲ್ಲರಿಗೂ ವಿಶೇಷವಾದ ದಿನವಾಗಿದೆ. ಕನ್ನಡಾಂಬೆಯನ್ನು ತಾಯಿ ಸ್ಥಾನದಲ್ಲಿ ಕಾಣುತ್ತೇವೆ. ಈ ನೆಲದಲ್ಲಿ ಜನಿಸಿದ ನಾವೆಲ್ಲರೂ ಪುಣ್ಯವಂತರು. ಮೈಸೂರು ಎಂದು ಹೆಸರಿದ್ದ ರಾಜ್ಯವನ್ನು 1973ರ ನ. 1ರಂದು `ಕರ್ನಾಟಕ'''' ಎಂದು ಮರುನಾಮಕರಣ ಮಾಡಲಾಯಿತು. ಇದಕ್ಕೆ ಮುಖ್ಯ ಕಾರಣಕರ್ತರಾದ ಅಂದಿನ ಮುಖ್ಯಮಂತ್ರಿಗಳಾದ ಡಿ. ದೇವರಾಜ ಅರಸು ಅವರು. ಇಂದು ಈ ಹೆಸರು ಕನ್ನಡಿಗರಿಗೆ ಹೆಮ್ಮೆಯಾಗಿದ್ದು, ರಾಜ್ಯವು ಕರ್ನಾಟಕ ಎಂದು ನಾಮಕರಣಗೊಂಡು ಇಂದಿಗೆ 50 ವರ್ಷಗಳನ್ನು ಪೂರೈಸುತ್ತಿರುವ ಈ ಸಂದರ್ಭದಲ್ಲಿ ರಾಜ್ಯೋತ್ಸವವನ್ನು ವಿಭಿನ್ನವಾಗಿ ಆಚರಿಸಲು ರಾಜ್ಯ ಸರ್ಕಾರವು ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸಂಭ್ರಮ- 50ರ ಜ್ಯೋತಿರಥಯಾತ್ರೆ ಕಾರ್ಯಕ್ರಮವನ್ನು ನ. 2ರಂದು ವಿಜಯನಗರ ಜಿಲ್ಲೆಯ ಹಂಪಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಸಾರ್ವಜನಿಕರೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದರು.ಶಾಸಕ ಎಚ್.ಆರ್. ಗವಿಯಪ್ಪ ಅವರು ಅಧ್ಯಕ್ಷತೆ ವಹಿಸಿದ್ದರು. ನಗರದ ಸ್ಫೂರ್ತಿ ವೇದಿಕೆ ಸದಸ್ಯರು ಹಂಪಿಯಿಂದ ತಂದ ಜ್ಯೋತಿಯನ್ನು ಸಚಿವರು ಹಾಗೂ ಶಾಸಕರು ಬೆಳಗಿದರು. ನಗರಸಭೆ ಅಧ್ಯಕ್ಷೆ ಎ. ಲತಾ, ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು, ಅಪರ ಜಿಲ್ಲಾಧಿಕಾರಿ ಅನುರಾಧ, ಹೊಸಪೇಟೆ ಉಪವಿಭಾಗಾಧಿಕಾರಿ ಮಹದ್‌ಅಲಿ ಅಕ್ರಮ ಶಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಆಕರ್ಷಕ ಪಥಸಂಚಲನ:ಪರೇಡ್ ಕಮಾಂಡರ್ ಶಶಿಕುಮಾರ್ ನೇತೃತ್ವದಲ್ಲಿ ಪೊಲೀಸ್, ಗೃಹರಕ್ಷದಳ, ಎನ್‌ಸಿಸಿ, ಗೈಡ್ಸ್, ಸೇವಾದಳ ಒಳಗೊಂಡಂತೆ ಒಟ್ಟು ಏಳು ತಂಡಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಮಕ್ರಮಗಳು ನಡೆದವು.
ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಂಗೀತ ವಿಭಾಗದ ವಿದ್ಯಾರ್ಥಿಗಳು ಕನ್ನಡ ಗೀತೆಗಳನ್ನು ಪ್ರಸ್ತುತಪಡಿಸಿದರು. ಕಾರ್ಯಕ್ರಮದಲ್ಲಿ ಹಲವು ಗಣ್ಯರು, ಕನ್ನಡಪರ ಹೋರಾಟಗಾರರು, ಸಂಘಟನೆಗಳ ಪದಾಧಿಕಾರಿಗಳು, ಶಿಕ್ಷಕರು, ಅಂಗನವಾಡಿ- ಆಶಾ ಕಾರ್ಯಕರ್ತೆಯರು, ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.