ಎಲ್ಲ ರೀತಿಯ ಅಂಗಡಿ, ಕಂಪೆನಿ, ಕಚೇರಿಗಳು, ಹೊಟೇಲ್ ಸೇರಿದಂತೆ ವಾಣಿಜ್ಯ ಸಂಸ್ಥೆಗಳ ಹೆಸರನ್ನು ನಾಮಫಲಕಗಳಲ್ಲಿ ಕನ್ನಡದಲ್ಲಿ ಕಡ್ಡಾಯವಾಗಿ ನಮೂದಿಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಸೂಚಿಸಿದ್ದಾರೆ.ಜಿಲ್ಲಾಧಿಕಾರಿ ಕಚೇರಿ ಪ್ರಜೌಸೌಧದಲ್ಲಿ ಸೋಮವಾರ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ
ಮಂಗಳೂರು: ಎಲ್ಲ ರೀತಿಯ ಅಂಗಡಿ, ಕಂಪೆನಿ, ಕಚೇರಿಗಳು, ಹೊಟೇಲ್ ಸೇರಿದಂತೆ ವಾಣಿಜ್ಯ ಸಂಸ್ಥೆಗಳ ಹೆಸರನ್ನು ನಾಮಫಲಕಗಳಲ್ಲಿ ಕನ್ನಡದಲ್ಲಿ ಕಡ್ಡಾಯವಾಗಿ ನಮೂದಿಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಸೂಚಿಸಿದ್ದಾರೆ.ಜಿಲ್ಲಾಧಿಕಾರಿ ಕಚೇರಿ ಪ್ರಜೌಸೌಧದಲ್ಲಿ ಸೋಮವಾರ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯ್ತಿಗಳು ವಾಣಿಜ್ಯ ಸಂಸ್ಥೆಗಳಿಗೆ ಟ್ರೇಡ್ ಲೈಸೆನ್ಸ್ ಮಂಜೂರು ಮಾಡುವಾಗಲೇ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಎಂಬ ಷರತ್ತು ವಿಧಿಸಿ ಮಂಜೂರು ಮಾಡಬೇಕು. ಈ ಬಗ್ಗೆ ಆಗ್ಗಿಂದಾಗ್ಗೆ ಪರಿಶೀಲನೆ ನಡೆಸಬೇಕು ಎಂದು ಸೂಚಿಸಿದರು.ರಾಷ್ಟ್ರೀಯ ಹೆದ್ದಾರಿಗಳ ಸೂಚನಾ ಫಲಕಗಳಲ್ಲಿ ಕನ್ನಡದಲ್ಲಿ ಮಾಹಿತಿ ನಮೂದಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸೂಚಿಸಲಾಗುವುದು. ಬ್ಯಾಂಕುಗಳಲ್ಲಿ ಅರ್ಜಿ ನಮೂನೆಗಳನ್ನು ಕನ್ನಡದಲ್ಲಿಯೂ ಒದಗಿಸಲು ಬ್ಯಾಂಕುಗಳ ಸಮಿತಿ ಸಭೆಯಲ್ಲಿ ನಿರ್ದೇಶಿಸಲಾಗುವುದು ಎಂದು ಅವರು ತಿಳಿಸಿದರು.
ಇಂಗ್ಲಿಷ್ ಮಾಧ್ಯಮ ಶಾಲೆ, ಕಾಲೇಜುಗಳಲ್ಲಿ ಇಂಗ್ಲಿಷ್ ಮಾಧ್ಯಮದಲ್ಲಿ ಬೋಧಿಸುತ್ತಿದ್ದರೂ, ಶಾಲೆಯ ನಾಮ ಫಲಕಗಳಲ್ಲಿ ಕನ್ನಡದಲ್ಲಿಯೂ ಹೆಸರು ಬರೆಯಬೇಕು. ಖಾಸಗಿ ಬಸ್‌ಗಳ ಬೋರ್ಡ್‌ಗಳಲ್ಲಿ ಕನ್ನಡದಲ್ಲಿ ಊರಿನ ಹೆಸರು ಬರೆಯುವ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.ನಗರದ ಮಾಲ್‍ಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಂಗಡಿಗಳ ನಾಮಫಲಕದಲ್ಲಿ ಹೆಸರನ್ನು ಕನ್ನಡದಲ್ಲಿ ನಮೂದಿಸುವ ಬಗ್ಗೆ ಕ್ರಮ ಕೈಗೊಳ್ಳಲು ಮಹಾನಗರ ಪಾಲಿಕೆಗೆ ಸೂಚಿಸಲಾಗುವುದು ಎಂದರು.
ಸಭೆಯಲ್ಲಿ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರು ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಶಿಕ್ಷಕರ ಕೊರತೆಯಿಂದಾಗಿ ಕನ್ನಡ ಮಾಧ್ಯಮ ಶಾಲೆಗಳು ಮುಚ್ಚುತ್ತಿದ್ದು, ಈ ಸಮಸ್ಯೆಯನ್ನು ಪರಿಹರಿಸಬೇಕು. ಕೆಲ ಉದ್ಯಮಗಳಲ್ಲಿ ಹೊರ ರಾಜ್ಯದ ಕಾರ್ಮಿಕರನ್ನು ನೇಮಿಸಲಾಗುತ್ತಿದ್ದು, ಸ್ಥಳೀಯರನ್ನು ನಿರ್ಲಕ್ಷಿಸಲಾಗುತ್ತಿದೆ. ರಾಷ್ಟ್ರೀಕೃತ ಬ್ಯಾಂಕುಗಳು ಠೇವಣಿ ಹಾಗೂ ಹಣ ಹಿಂತೆಗೆಯುವಿಕೆ ಸ್ಲಿಪ್‍ಗಳನ್ನು ಕನ್ನಡದಲ್ಲಿಯೂ ಒದಗಿಸಬೇಕು. ಗ್ರಾಮೀಣ ಪ್ರದೇಶದ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಕನ್ನಡ ಜ್ಞಾನವಿಲ್ಲದ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದು, ಇದರಿಂದ ಸ್ಥಳೀಯರ ಬ್ಯಾಂಕ್ ವ್ಯವಹಾರಗಳಿಗೆ ತೊಂದರೆಯಾಗುತ್ತಿದೆ ಎಂದು ಜಿಲ್ಲಾಧಿಕಾರಿ ಗಮನಕ್ಕೆ ತಂದರು.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಎಂ.ಪಿ. ಶ್ರೀನಾಥ್ ಮಾತನಾಡಿ, ಮಂಗಳೂರು ನಗರದಲ್ಲಿ ಜಿಲ್ಲಾ ಮಟ್ಟದ ಕನ್ನಡ ಭವನ ನಿರ್ಮಿಸಲು ನಿವೇಶನ ಮಂಜೂರು ಮಾಡಲು ಸಭೆಯಲ್ಲಿ ಮನವಿ ಮಾಡಿದರು.ಅಪರ ಜಿಲ್ಲಾಧಿಕಾರಿ ರಾಜು ಕೆ., ನಗರಾಭಿವೃದ್ಧಿ ಯೋಜನಾ ನಿರ್ದೇಶಕ ಡಾ.ಸಂತೋಷ್ ಕುಮಾರ್ ಜಿ, ಕೈಗಾರಿಕಾ ಜಂಟಿ ನಿರ್ದೇಶಕ ಗೋಕುಲ್‍ದಾಸ್ ನಾಯಕ್, ಜಿಲ್ಲಾ ವಾರ್ತಾಧಿಕಾರಿ ಬಿ.ಎ. ಖಾದರ್ ಶಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಜಿ, ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ದೇವಿಪ್ರಸಾದ್, ರಾಜಶೇಖರ್ ಅಜ್ರಿ, ರಾಜೇಶ್ ಡಿಸೋಜ, ದಿವಾಕರ್ ದಾಸ್, ಹಸೈನಾರ್ ತಾಳಿತ್ತನೂಜಿ ಮತ್ತಿತರರು ಇದ್ದರು.