ರಾಮನಗರ: ಮಕ್ಕಳಲ್ಲಿ ಅಡಗಿದ ಸುಪ್ತ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸಲು ಸರ್ಕಾರ ಗ್ರಾಮ, ಹೋಬಳಿ, ತಾಲ್ಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿಯಂತಹ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ.

ರಾಮನಗರ: ಮಕ್ಕಳಲ್ಲಿ ಅಡಗಿದ ಸುಪ್ತ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸಲು ಸರ್ಕಾರ ಗ್ರಾಮ, ಹೋಬಳಿ, ತಾಲ್ಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿಯಂತಹ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಇಂತಹ ಕಾರ್ಯಕ್ರಮಗಳಲ್ಲಿ ಮಕ್ಕಳು ಭಾಗವಹಿಸಿ ತಮ್ಮ ಪ್ರತಿಭೆಯನ್ನು ತೋರ್ಪಡಿಸಬೇಕೆಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷರಾದ ಕೆ. ರಾಜು ಹೇಳಿದರು.

ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಿಂಭಾಗದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಆವರಣದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸಮಾರಂಭದಲ್ಲಿ ಸಾವಿತ್ರಿಬಾಯಿ ಪುಲೆ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.

ಹಿಂದಿನ ಕಾಲದಲ್ಲಿ ಅನಿಷ್ಠ ಪದ್ಧತಿಗಳು ವಿಜೃಂಭಿಸುತ್ತಿದ್ದವು, ಆ ಸಂದರ್ಭದಲ್ಲಿ ಸಾವಿತ್ರಿಬಾಯಿ ಪುಲೆ ಅವರು ಹೆಣ್ಣು ಮಕ್ಕಳನ್ನು ಮುಖ್ಯ ವಾಹಿನಿಗೆ ತರಲು, ಸಮಾಜ ಮುಖಿ ಕೆಲಸಗಳನ್ನು ಮಾಡಲು ಹೆಣ್ಣು ಮಕ್ಕಳಿಗೂ ಶಿಕ್ಷಣ ದೊರಕಬೇಕು ಎಂದು ಹೋರಾಟ ಮಾಡಿದರು. ಮಹಾತ್ಮಾ ಗಾಂಧೀಜಿ, ಕುವೆಂಪುರಂತಹ ಮಹನೀಯರು ಹಾಕಿಕೊಟ್ಟಿರುವ ಮಾರ್ಗವನ್ನು ಎಲ್ಲರೂ ಅಳವಡಿಸಿಕೊಂಡರೆ ಇಂದಿನ ಮಕ್ಕಳು ಉತ್ತಮ ಪ್ರಜೆಗಳಾಗಿ ಹೊರಹೊಮ್ಮುತ್ತಾರೆ ಎಂದರು.

ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗಾಣಕಲ್ ನಟರಾಜು ಮಾತನಾಡಿ, ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮುಗಿದ ನಂತರ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಗಳಿಸಿಕೊಳ್ಳಲು ಶ್ರಮಪಡಬೇಕು ಹಾಗೂ ಪರೀಕ್ಷೆ ಫಲಿತಾಂಶದಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯಲು ಎಲ್ಲಾ ಶಿಕ್ಷಕರು ಶ್ರಮವಹಿಸುವಂತೆ ತಿಳಿಸಿದರು.

ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಚೇತನ್ ಕುಮಾರ್ ಮಾತನಾಡಿ, ಉಪ ಮುಖ್ಯಮಂತ್ರಿಗಳ ನಿರ್ದೇಶನದಂತೆ ಜಿಲ್ಲೆಯ ರಾಮನಗರ ತಾಲೂಕಿನಲ್ಲಿ ರಾಮೋತ್ಸವ, ಮಾಗಡಿ ತಾಲ್ಲೂಕಿನಲ್ಲಿ ಕೆಂಪೇಗೌಡ ಉತ್ಸವ, ಚನ್ನಪಟ್ಟಣದಲ್ಲಿ ಬೊಂಬೆನಾಡು ಗಂಗೋತ್ಸವ ಹಾಗೂ ಕನಕಪುರದಲ್ಲಿ ಕನಕೋತ್ಸವ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮಕ್ಕಳಲ್ಲಿರುವ ಪ್ರತಿಭೆಗಳನ್ನು ಗುರುತಿಸಿಕೊಳ್ಳಲು ಉತ್ತಮ ವೇದಿಕೆಯನ್ನು ಹಾಕಿಕೊಡಲಾಗಿದೆ. ವಿದ್ಯಾರ್ಥಿಗಳು ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಗಳನ್ನು ಅನಾವರಣಗೊಳಿಸಬೇಕು ಎಂದು ಹೇಳಿದರು.

ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಸ್ವಾಮಿ ಅವರು ವೇದಿಕೆ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪ್ರಶ್ನೆಗಳನ್ನು ಕೇಳಿ, ಉತ್ತರ ನೀಡಿದ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ಬಹುಮಾನವಾಗಿ ನೀಡಿದರು.

ತಾಲೂಕು ಅಭಿವೃದ್ಧಿ ಅಧ್ಯಕ್ಷರಾದ ಭೈರೇಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಲಿಂಗಯ್ಯ, ಶಾಲಾ ಶಿಕ್ಷಣ ಇಲಾಖೆಯ ಭಾಗ್ಯಲಕ್ಷ್ಮೀ, ನೋಡಲ್ ಅಧಿಕಾರಿಗಳು ಹಾಗೂ ವಿಷಯ ಪರಿವೀಕ್ಷಕರಾದ ಭಾರತಿ, ಪ್ರಾಂಶುಪಾಲರಾದ ಓಂಕಾರ ಮೂರ್ತಿ, ದೈಹಿಕ ಶಿಕ್ಷಣಾಧಿಕಾರಿ ನೀಲಕಂಠಯ್ಯ, ದೈಹಿಕ ಶಿಕ್ಷಣ ಸಂಘದ ರವಿಕುಮಾರ್, ಅಕ್ಷರ ದಾಸೋಹದ ಸಂತೋಷ್, ಆಶಾ, ಮಂಜುಳಾ, ಕೃಷ್ಣಪ್ಪ ಮತ್ತಿತರರು ಉಪಸ್ಥಿತರಿದ್ದರು.

---------------------------

3ಕೆಆರ್ ಎಂಎನ್ 3.ಜೆಪಿಜಿ

ರಾಮನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಿಂಭಾಗದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಆವರಣದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸಮಾರಂಭವನ್ನು ಅತಿಥಿಗಳು ಪಾಲ್ಗೊಂಡಿರುವುದು.

----------------------------