ಸಾರಾಂಶ
ಕನ್ನಡ ನಾಡಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಹಾಗೂ ಖಾಸಗಿ ವಲಯದಲ್ಲಿ ಎಲ್ಲಾ ಹಂತದ ಉದ್ಯೋಗಗಳನ್ನು ಕನ್ನಡಿಗರಿಗೆ ನೀಡುವಂತೆ ಸೂಕ್ತ ಕಾಯ್ದೆಯನ್ನು ರೂಪಿಸಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಬೆಂಗಳೂರು : ಕನ್ನಡ ನಾಡಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಹಾಗೂ ಖಾಸಗಿ ವಲಯದಲ್ಲಿ ಎಲ್ಲಾ ಹಂತದ ಉದ್ಯೋಗಗಳನ್ನು ಕನ್ನಡಿಗರಿಗೆ ನೀಡುವಂತೆ ಸೂಕ್ತ ಕಾಯ್ದೆಯನ್ನು ರೂಪಿಸಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಸೋಮವಾರ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದ್ದು, ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಕರವೇ ವತಿಯಿಂದ ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಲಾಗುತ್ತದೆ.
ಈ ಕುರಿತು ಮಾಹಿತಿ ನೀಡಿರುವ ನಾರಾಯಣಗೌಡ, ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಕೊಡಿ ಎಂದು ಚಳವಳಿ ಮಾಡುವಂಥ ಸ್ಥಿತಿಗೆ ಬಂದಿರುವುದೇ ನಾಚಿಕೆಗೇಡು. ಕನ್ನಡಿಗರು ಶಾಂತಿಪ್ರಿಯರಾಗಿರುವ ಕಾರಣ ಅನ್ಯರು ಸವಾರಿ ಮಾಡುತ್ತಿದ್ದಾರೆ. ಕನ್ನಡಿಗರು ಈಗ ಒಂದಾಗಿ ನಿಲ್ಲಬೇಕಾದ ಅನಿವಾರ್ಯತೆ ಇದೆ. ಕನ್ನಡಿಗರ ಹಕ್ಕುಗಳನ್ನು ಹೊರ ರಾಜ್ಯಗಳಿಂದ ಬಂದವರು ಅನುಭವಿಸುತ್ತಿದ್ದು, ಕನ್ನಡಿಗರು ನಿರುದ್ಯೋಗಿಗಳಾಗಿ ಅಲೆಯುತ್ತಿದ್ದಾರೆ. ಈಗ ನಾವು ಸಿಡಿದು ನಿಲ್ಲದೇ ಹೋದಲ್ಲಿ ಖಂಡಿತ ಅಪಾಯವಿದೆ ಎಂದು ಎಚ್ಚರಿಸಿದ್ದಾರೆ.
ಕಸಾಪ, ಕಲಾವಿದರ ಬೆಂಬಲ:
ಕನ್ನಡಿಗರಿಗೆ ಉದ್ಯೋಗಕ್ಕಾಗಿ ನಡೆಯುವ ಪ್ರತಿಭಟನೆಗೆ ಕನ್ನಡ ಸಾಹಿತ್ಯ ಪರಿಷತ್ತು ತನ್ನ ಬೆಂಬಲ ಘೋಷಿಸಿದೆ. ಅದೇ ರೀತಿ ನಟಿ ಪೂಜಾ ಗಾಂಧಿ, ನೆನಪಿರಲಿ ಪ್ರೇಮ್ ಸೇರಿದಂತೆ ಅನೇಕ ಕಲಾವಿದರು ಬೆಂಬಲ ಸೂಚಿಸಿದ್ದಾರೆ. ಕರ್ನಾಟಕದಲ್ಲಿನ ಉದ್ಯೋಗಗಳ ಮೇಲೆ ಮೊದಲ ಹಕ್ಕು ಮತ್ತು ಆದ್ಯತೆ ಕನ್ನಡಿಗರಿಗೆ ಸಿಗಬೇಕು. ಈ ಹೋರಾಟದಲ್ಲಿ ನಾನು ಭಾಗವಹಿಸುತ್ತೇನೆ ಎಂದು ಪೂಜಾ ಗಾಂಧಿ ಹೇಳಿದ್ದಾರೆ. ಸರೋಜಿನಿ ಮಹಿಷಿ ವರದಿ ಅನುಷ್ಠಾನಕ್ಕೆ ಆಗ್ರಹಿಸಿ ನಡೆಯುತ್ತಿರುವ ಹೋರಾಟಕ್ಕೆ ನನ್ನ ಪೂರ್ಣ ಬೆಂಬಲ ಇದೆ ಎಂದು ಪ್ರೇಮ್ ಹೇಳಿದ್ದಾರೆ. ಸಾಹಿತ್ಯ, ಸಂಗೀತ, ಜಾನಪದ ಸೇರಿದಂತೆ ಸಾಂಸ್ಕೃತಿಕ ವಲಯದ ಅನೇಕರು ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ.