ಸಾರಾಂಶ
ಕನ್ನಡಪ್ರಭ ವಾರ್ತೆ ಹಾಸನ
ಕರ್ನಾಟಕದ ಶಾಲೆಗಳಲ್ಲಿ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳನ್ನು ಕಡ್ಡಾಯಗೊಳಿಸುವ ದ್ವಿಭಾಷಾ ನೀತಿಯನ್ನು ಜಾರಿಗೆ ತರಬೇಕು ಹಾಗೂ ತೃತೀಯ ಭಾಷೆಯಾದ ಹಿಂದಿಯನ್ನು ಪಠ್ಯಕ್ರಮದಿಂದ ಹೊರಗಿಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದಿಂದ ಶನಿವಾರ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.ನಗರದ ಪ್ರವಾಸಿ ಮಂದಿರದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಯಿತು. ಈ ವೇಳೆ ಕರವೇ ಜಿಲ್ಲಾಧ್ಯಕ್ಷ ಸಿ.ಡಿ. ಮನುಕುಮಾರ್ ಮಾಧ್ಯಮದೊಂದಿಗೆ ಮಾತನಾಡಿ, ತಮಗೆ ತಿಳಿದಿರುವಂತೆ ಕರ್ನಾಟಕ ರಾಜ್ಯದ ಪಠ್ಯಕ್ರಮದಲ್ಲಿ ಸಾಧಾರಣವಾಗಿ ಕನ್ನಡವನ್ನು ಪ್ರಥಮ ಭಾಷೆಯಾಗಿ, ದ್ವಿತೀಯ ಭಾಷೆಯಾಗಿ ಇಂಗ್ಲಿಷನ್ನು ಮತ್ತು ತೃತೀಯ ಭಾಷೆಯಾಗಿ ಹಿಂದಿಯನ್ನು ಕಲಿಸಲಾಗುತ್ತಿದೆ. ರಾಜ್ಯ ಪಠ್ಯಕ್ರಮದಲ್ಲಿ ಓದುವ ಮಕ್ಕಳು ಮೂರನೇ ಭಾಷೆಯಾಗಿ ಹಿಂದಿ ಕಲಿಯುವುದು ಕಡ್ಡಾಯವಾಗಿದೆ. ಮಾತ್ರವಲ್ಲ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನೂರು ಅಂಕಗಳಿಗೆ ಹಿಂದಿ ಪರೀಕ್ಷೆಯನ್ನು ಕಡ್ಡಾಯವಾಗಿ ಬರೆಯಬೇಕಿದೆ. ತೃತೀಯ ಭಾಷೆಯಾದ ಹಿಂದಿಯು ಕರ್ನಾಟಕದ ವಿದ್ಯಾರ್ಥಿಗಳಿಗೆ ಅನಗತ್ಯವಾದ ಒತ್ತಡವನ್ನು ಒಡ್ಡುತ್ತಿದೆ. ೨೦೨೪ರ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ೯೦,೭೯೪ ವಿದ್ಯಾರ್ಥಿಗಳು ತೃತೀಯ ಭಾಷೆಯಾದ ಹಿಂದಿಯಲ್ಲಿ ಅನುತ್ತೀರ್ಣರಾಗಿದ್ದಾರೆ ಎಂದರು. ಇದು ಒಟ್ಟು ವಿದ್ಯಾರ್ಥಿಗಳಲ್ಲಿ ಸುಮಾರು ೨೧% ರಷ್ಟಿದೆ. ೨೦೨೫ರಲ್ಲಿ ಈ ಸಂಖ್ಯೆ ೧.೨ ಲಕ್ಷಕ್ಕಿಂತ ಹೆಚ್ಚಾಗಿದೆ ಎಂದು ಇತ್ತೀಚಿನ ವರದಿಗಳು ತಿಳಿಸಿವೆ. ಇದು ಅತ್ಯಂತ ಆಘಾತಕಾರಿ ಬೆಳವಣಿಗೆಯಾಗಿದೆ. ಇದು ಹಿಂದಿಯ ಕಡ್ಡಾಯ ಶಿಕ್ಷಣದಿಂದ ವಿದ್ಯಾರ್ಥಿಗಳಿಗೆ ಉಂಟಾಗುತ್ತಿರುವ ಶೈಕ್ಷಣಿಕ ಹೊರೆಯನ್ನು ಸ್ಪಷ್ಟವಾಗಿ ತೋರಿಸುತ್ತದೆ. ಹಿಂದಿ ಹೇರಿಕೆಗೆ ಕನ್ನಡದ ಮಕ್ಕಳ ಭವಿಷ್ಯ ಬಲಿಯಾಗುತ್ತಿದೆ ಎಂದು ಎಚ್ಚರಿಸಿದರು. ತ್ರಿಭಾಷಾ ನೀತಿಯಿಂದ ಲಾಭವಿಲ್ಲ:
ತ್ರಿಭಾಷಾ ಸೂತ್ರದ ಕುರಿತು ರಾಷ್ಟ್ರಕವಿ ಕುವೆಂಪು ಅವರು ಹಿಂದೆಯೇ ತೀಕ್ಷ್ಣವಾದ ವಿರೋಧವನ್ನು ಸಾರಿದ್ದರು. ಕರ್ನಾಟಕದ ಸಾಂಸ್ಕೃತಿಕ ಮತ್ತು ಭಾಷಿಕ ಅಸ್ಮಿತೆಯಲ್ಲಿ ಈ ನೆಲದ ನುಡಿಯಾದ ಕನ್ನಡವು ಕೇಂದ್ರ ಸ್ಥಾನವನ್ನು ಹೊಂದಿದೆ. ಬದಲಾದ ಕಾಲಘಟ್ಟದಲ್ಲಿ ಇಂಗ್ಲಿಷ್ ಭಾಷೆಯು ಜಾಗತಿಕ ವ್ಯವಹಾರಗಳಿಗೆ, ಉನ್ನತ ಶಿಕ್ಷಣ ಮತ್ತು ವೃತ್ತಿ ನಿರ್ವಹಣೆಗೆ ಅಗತ್ಯವಾಗಿದ್ದು, ಇದನ್ನು ಕಲಿಯುವುದು ವಿದ್ಯಾರ್ಥಿಗಳ ಭವಿಷ್ಯಕ್ಕೆ ಪೂರಕವಾಗಿದೆ. ಆದರೆ, ಹಿಂದಿಯನ್ನು ಕಡ್ಡಾಯವಾಗಿ ಓದಿಸುವುದರಿಂದ ಕರ್ನಾಟಕದ ವಿದ್ಯಾರ್ಥಿಗಳಿಗೆ ಯಾವುದೇ ಗಮನಾರ್ಹ ಲಾಭವಿಲ್ಲ. ತ್ರಿಭಾಷಾ ನೀತಿಯಿಂದ ಕರ್ನಾಟಕಕ್ಕೆ ಯಾವ ಲಾಭವೂ ಇಲ್ಲ. ಇದರಿಂದ ಒಬ್ಬನೇ ಒಬ್ಬ ಕನ್ನಡಿನಿಗೂ ಉದ್ಯೋಗ ದೊರೆತಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು. ತಮಿಳುನಾಡು ೧೯೬೮ರಿಂದಲೇ ತ್ರಿಭಾಷಾ ನೀತಿಯನ್ನು ತಿರಸ್ಕರಿಸಿ, ತಮಿಳು ಮತ್ತು ಇಂಗ್ಲಿಷ್ ಭಾಷೆಗಳನ್ನು ಒಳಗೊಂಡ ದ್ವಿಭಾಷಾ ನೀತಿಯನ್ನು ಯಶಸ್ವಿಯಾಗಿ ಜಾರಿಗೆ ತಂದಿದೆ. ಇತ್ತೀಚೆಗೆ, ಮಹಾರಾಷ್ಟ್ರ ಸರ್ಕಾರವು ಸಹ ತ್ರಿಭಾಷಾ ನೀತಿಯನ್ನು ರದ್ದುಗೊಳಿಸಿ, ಮರಾಠಿ ಮತ್ತು ಇಂಗ್ಲಿಷ್ ಭಾಷೆಗಳನ್ನು ಕಡ್ಡಾಯಗೊಳಿಸುವ ನಿರ್ಧಾರವನ್ನು ಕೈಗೊಂಡಿದೆ. ಈ ರಾಜ್ಯಗಳು ತಮ್ಮ ಭಾಷಿಕ ಗುರುತನ್ನು ರಕ್ಷಿಸುವುದರ ಜೊತೆಗೆ ಶೈಕ್ಷಣಿಕ ಗುಣಮಟ್ಟವನ್ನು ಕಾಪಾಡಿಕೊಂಡಿವೆ. ಕರ್ನಾಟಕವು ಈ ಉದಾಹರಣೆಗಳಿಂದ ಸ್ಫೂರ್ತಿಯನ್ನು ಪಡೆದು, ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಿಗೆ ಆದ್ಯತೆ ನೀಡುವ ದ್ವಿಭಾಷಾ ನೀತಿಯನ್ನು ಜಾರಿಗೆ ತರಬೇಕಾಗಿದೆ ಎಂದು ಒತ್ತಾಯಿಸಿದರು. ಗಂಭೀರವಾಗಿ ಗಮನಿಸಬೇಕಿದೆ:ಕರ್ನಾಟಕದ ರಾಜ್ಯ ಪಠ್ಯಕ್ರಮದಲ್ಲಿ ವಿದ್ಯಾರ್ಥಿಗಳು ಐದು ವಿಷಯಗಳನ್ನು (ಮೂರು ವಿಷಯಗಳು ಮತ್ತು ಎರಡು ಭಾಷೆಗಳು) ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ ಬರೆಯುತ್ತಾರೆ. ಆದರೆ, ತೃತೀಯ ಭಾಷೆಯಾದ ಹಿಂದಿಯನ್ನು ಕಡ್ಡಾಯವಾಗಿ ಓದಬೇಕಾದ ಒತ್ತಡವು ವಿದ್ಯಾರ್ಥಿಗಳಿಗೆ ಅನಗತ್ಯ ಹೊರೆಯಾಗಿದೆ. ಇದಕ್ಕೆ ವ್ಯತಿರಿಕ್ತವಾಗಿ, ಕೇಂದ್ರೀಯ ಶಿಕ್ಷಣ ವ್ಯವಸ್ಥೆಯಾದ ಸಿಬಿಎಸ್‌ಇ ಮತ್ತು ಐಸಿಎಸ್‌ಇ ಶಾಲೆಗಳಲ್ಲಿ ಕೇವಲ ಎರಡು ಭಾಷೆಗಳನ್ನು ಕಡ್ಡಾಯವಾಗಿ ಓದಿಸಲಾಗುತ್ತದೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಎರಡು ಭಾಷೆಗಳಿಗೆ ಮಾತ್ರ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಈ ತಾರತಮ್ಯವು ರಾಜ್ಯ ಪಠ್ಯಕ್ರಮದ ವಿದ್ಯಾರ್ಥಿಗಳಿಗೆ ಅನ್ಯಾಯವನ್ನುಂಟುಮಾಡುತ್ತಿದೆ. ಇದರಿಂದಾಗಿ, ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು ಗಣಿತ, ವಿಜ್ಞಾನ ಮುಂತಾದ ವಿಷಯಗಳಿಗೆ ಹೆಚ್ಚಿನ ಸಮಯವನ್ನು ನೀಡಲು ವಿಫಲರಾಗುತ್ತಿದ್ದಾರೆ. ಈ ಅಸಮಾನತೆಯನ್ನೂ ಸಹ ರಾಜ್ಯ ಸರ್ಕಾರ ಗಂಭೀರವಾಗಿ ಗಮನಿಸಬೇಕಿದೆ ಎಂದರು. ತೃತೀಯ ಭಾಷೆಯನ್ನು ತೆಗೆದುಹಾಕುವುದರಿಂದ ವಿದ್ಯಾರ್ಥಿಗಳು ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳ ಜೊತೆಗೆ ಇತರ ವಿಷಯಗಳ ಮೇಲೆ ಹೆಚ್ಚಿನ ಗಮನವನ್ನು ಕೇಂದ್ರೀಕರಿಸಬಹುದು. ಕನ್ನಡ ಭಾಷೆಗೆ ಆದ್ಯತೆ ನೀಡುವುದರಿಂದ ಕರ್ನಾಟಕದ ಭಾಷಿಕ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ನಾವು ಮುಂದಿನ ಪೀಳಿಗೆಗೆ ಉಳಿಸಿದಂತಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಪ್ರಮುಖ ಹಕ್ಕೊತ್ತಾಯಗಳು:
ಕರ್ನಾಟಕದ ಶಾಲೆಗಳಲ್ಲಿ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳನ್ನು ಕಡ್ಡಾಯಗೊಳಿಸುವ ದ್ವಿಭಾಷಾ ನೀತಿಯನ್ನು ಜಾರಿಗೆ ತರಬೇಕು. ತೃತೀಯ ಭಾಷೆಯಾದ ಹಿಂದಿಯನ್ನು ಪಠ್ಯಕ್ರಮದಿಂದ ಹೊರಗಿಡಬೇಕು. ರಾಜ್ಯ ಮತ್ತು ಕೇಂದ್ರೀಯ ಶಿಕ್ಷಣ ವ್ಯವಸ್ಥೆಗಳಾದ ಸಿಬಿಎಸ್‌ಇ ಮತ್ತು ಐ.ಸಿ.ಎಸ್.ಇ. ಶಾಲೆಗಳಿಗೆ ಏಕರೂಪದ ದ್ವಿಭಾಷಾ ನೀತಿಯನ್ನು ಜಾರಿಗೊಳಿಸಬೇಕು. ಸಿಬಿಎಸ್‌ಇ, ಐಸಿಎಸ್ ಇ ಶಾಲೆಗಳಲ್ಲೂ ಪ್ರಥಮ ಭಾಷೆಯಾಗಿ ಕನ್ನಡವನ್ನೇ ಕಡ್ಡಾಯಗೊಳಿಸಬೇಕು ಹಾಗೂ ಕನ್ನಡ ಮಾಧ್ಯಮ ಶಾಲೆಗಳನ್ನು ಬಲಪಡಿಸಿ, ಉತ್ತಮ ಗುಣಮಟ್ಟದ ಇಂಗ್ಲಿಷ್ ಶಿಕ್ಷಣವನ್ನು ನೀಡಬೇಕು ಹಾಗೂ ಕರ್ನಾಟಕದ ಶಿಕ್ಷಣ ವ್ಯವಸ್ಥೆಯು ರಾಜ್ಯದ ಭಾಷಿಕ ಅಸ್ಮಿತೆಯನ್ನು ಗೌರವಿಸುವ, ವಿದ್ಯಾರ್ಥಿಗಳ ಶೈಕ್ಷಣಿಕ ಯಶಸ್ಸನ್ನು ಖಾತ್ರಿಪಡಿಸುವ ಮತ್ತು ಜಾಗತಿಕ ಸ್ಪರ್ಧೆಗೆ ಸಿದ್ಧವಾಗಿರುವಂತಹ ಒಂದು ವ್ಯವಸ್ಥೆಯಾಗಿರಬೇಕು. ತ್ರಿಭಾಷಾ ನೀತಿಯಿಂದ ಕರ್ನಾಟಕದ ವಿದ್ಯಾರ್ಥಿಗಳಿಗೆ ಉಂಟಾಗುತ್ತಿರುವ ಅನಗತ್ಯ ಒತ್ತಡವನ್ನು ತೆಗೆದುಹಾಕಿ, ತಮಿಳುನಾಡು ಮತ್ತು ಮಹಾರಾಷ್ಟ್ರದಂತಹ ರಾಜ್ಯಗಳ ದ್ವಿಭಾಷಾ ನೀತಿಯನ್ನು ಅನುಸರಿಸುವ ಮೂಲಕ ಕರ್ನಾಟಕವು ತನ್ನ ಭಾಷಿಕ ಗುರುತನ್ನು ರಕ್ಷಿಸಬೇಕು. ಈ ನಿಟ್ಟಿನಲ್ಲಿ ತಕ್ಷಣದ ಕ್ರಮವನ್ನು ಕೈಗೊಳ್ಳಲು ನಾವು ನಿಮ್ಮನ್ನು ಆಗ್ರಹಿಸುತ್ತಿದ್ದೇವೆ ಎಂದು ಹೇಳಿದರು. ಪ್ರತಿಭಟನೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸಕಲೇಶಪುರ ತಾಲೂಕು ಅಧ್ಯಕ್ಷ ಗಗನ್ ಗೌಡ, ಬೇಲೂರು ತಾಲೂಕು ಅಧ್ಯಕ್ಷ ಬಿ. ಚಂದ್ರಶೇಖರ್, ಚನ್ನರಾಯಪಟ್ಟಣ ತಾಲೂಕು ಅಧ್ಯಕ್ಷ ಮಧು ಕರಡೆವು, ಅರಸೀಕೆರೆ ತಾಲೂಕು ಅಧ್ಯಕ್ಷ ಕಿರಣ್ ಕುಮಾರ್, ಹೊಳೆನರಸೀಪುರ ತಾಲೂಕು ಅಧ್ಯಕ್ಷ ಓಯ್ಲೇಶ್, ಅರಕಲಗೂಡು ತಾಲೂಕು ಅಧ್ಯಕ್ಷ ಸೋಮಶೇಖರ್, ಆಲೂರು ತಾಲೂಕು ಅಧ್ಯಕ್ಷ ನಟರಾಜ್, ಸಾಮಾಜಿಕ ಚಾಲತಾಣ ಸಂಚಾಲಕ ಎಸ್.ಎ. ಅಬ್ದುಲ್ ಖಾದರ್, ಕರವೇ ಜಿಲ್ಲಾ ಉಪಾಧ್ಯಕ್ಷ ಹೇಮಂತ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ತನುಗೌಡ, ಸೀತರಾಮು, ತೌಫಿಕ್, ಜಿಲ್ಲಾ ಕಾರ್ಯದರ್ಶಿ ಪಾಳ್ಯ ರಘು, ಜಿಲ್ಲಾ ವಿದ್ಯಾರ್ಥಿ ಘಟಕದ ಅಧ್ಯಕ್ಷ ಅಭಿಗೌಡ, ನವೀನ್, ಪ್ರೀತಂ, ಸಚಿನ್, ಮೋಹನ್ ಗೌಡ, ಚಂದ್ರೇಗೌಡ ಇತರರು ಉಪಸ್ಥಿತರಿದ್ದರು.