ಸಾರಾಂಶ
ಕನ್ನಡಪ್ರಭ ವಾರ್ತೆ ಬೆಂಗಳೂರು
ಸರೋಜಿನಿ ಮಹಿಷಿ ವರದಿ ಜಾರಿಗೊಳಿಸುವ ಜೊತೆಗೆ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಲು ವಿಶೇಷ ಕಾನೂನು ರೂಪಿಸಲು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ನಡೆಸಿದ ಹೋರಾಟಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ವಿಶೇಷ ಕಾನೂನು ರೂಪಿಸಲು ಸಂವಿಧಾನಾತ್ಮಕ ಅವಕಾಶ ಪರಿಶೀಲಿಸುವುದಾಗಿ ಭರವಸೆ ನೀಡಿದ್ದಾರೆ.ಸೋಮವಾರ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡಲು ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಬೆಂಗಳೂರು ಸೇರಿದಂತೆ ನಾಡಿನ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಿತು. ಈ ನಡುವೆ ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ನೇತೃತ್ವದ ನಿಯೋಗವು ‘ಕಾವೇರಿ ನಿವಾಸ’ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಿತು.
ಮನವಿ ಸ್ವೀಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸರೋಜಿನಿ ಮಹಿಷಿ ವರದಿ ಜಾರಿಯೂ ಸೇರಿದಂತೆ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಲು ಸಂವಿಧಾನದಲ್ಲಿ ಅವಕಾಶವಿದೆಯೇ ಎಂದು ಪರಿಶೀಲಿಸಲಾಗುವುದು. ಈ ಕುರಿತು ಅಡ್ವೊಕೇಟ್ ಜನರಲ್ ಮತ್ತು ಇತರೆ ಕಾನೂನು ತಜ್ಞರೊಂದಿಗೆ ಚರ್ಚಿಸುವುದಾಗಿ ಭರವಸೆ ನೀಡಿದರು.ಅದಕ್ಕೂ ಮುನ್ನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ನಾರಾಯಣಗೌಡ, ಕನ್ನಡಿಗರಿಗೆ ಖಾಸಗಿ ವಲಯದ ಶೇ.100ರಷ್ಟು ಉದ್ಯೋಗಗಳು ದಕ್ಕಬೇಕು. ಕನ್ನಡ ಕಾವಲು ಸಮಿತಿ ಅಧ್ಯಕ್ಷರಾಗಿದ್ದ ಸಿದ್ದರಾಮಯ್ಯ ಅವರಿಗೆ ಕನ್ನಡದ ಬಗ್ಗೆ ಪ್ರೀತಿ, ಕಳಕಳಿ ಇದೆ. ಅವರು ಈ ಕೆಲಸವನ್ನೂ ಮಾಡುತ್ತಾರೆ ಎಂಬ ನಂಬಿಕೆ ಇದೆ. ಮಾಡಲಿಲ್ಲ ಎಂದರೆ ಇಲ್ಲಿ ಬಂದು ಭಜನೆ ಮಾಡಿ ಹೋಗುವುದಿಲ್ಲ. ಕೇಸು ಹಾಕಲಿ. ಯಾವುದಕ್ಕೂ ಹೆದರದೆ ನಿರಂತರವಾಗಿ ಹೋರಾಟ ಮುಂದುವರೆಸುತ್ತೇವೆ ಎಂದು ಹೇಳಿದರು.
ಪ್ರತಿಭಟನೆಯಲ್ಲಿ ರೈತ ಮುಖಂಡ ವೀರಸಂಗಯ್ಯ, ಸಮೀರ್ ಉಲ್ಲಾಖಾನ್, ಅಶ್ವಿನಿಗೌಡ, ವೈ.ಡಿ.ರವಿಶಂಕರ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.ಒಂದು ತಿಂಗಳ ಗಡುವುರಾಜ್ಯ ಸರ್ಕಾರ ಒಂದು ತಿಂಗಳೊಳಗೆ ಬೇಡಿಕೆಗಳನ್ನು ಈಡೇರಿಸಲು ಕ್ರಮಕೈಗೊಳ್ಳದಿದ್ದರೆ ಮುಂದಿನ ಹಂತದಲ್ಲಿ ರಾಜ್ಯಾದ್ಯಂತ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಉಗ್ರ ಪ್ರತಿಭಟನೆ ನಡೆಸಲಿದ್ದಾರೆ. ಕನ್ನಡ ನೆಲದಲ್ಲಿ ಕನ್ನಡಿಗರಿಗೆ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರೆಯಲಿದೆ.
-ಟಿ.ಎ.ನಾರಾಯಣಗೌಡ, ರಾಜ್ಯಾಧ್ಯಕ್ಷ, ಕರವೇಚಿತ್ರನಟ ಪ್ರೇಮ್, ಪೂಜಾ ಬೆಂಬಲನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ನೇತೃತ್ವದಲ್ಲಿ ನಡೆದ ಪ್ರತಿಭಟನೆಗೆ ಚಿತ್ರನಟ ನೆನಪಿರಲಿ ಪ್ರೇಮ್, ಮುಂಗಾರು ಮಳೆ ಖ್ಯಾತಿಯ ಪೂಜಾಗಾಂಧಿ ಬೆಂಬಲ ವ್ಯಕ್ತಪಡಿಸಿ ಪಾಲ್ಗೊಂಡಿದ್ದರು. ಕರ್ನಾಟಕದಲ್ಲಿ ಕನ್ನಡಿಗರಿಗೆ ಸಾರ್ವಜನಿಕ ಮತ್ತು ಖಾಸಗಿ ವಲಯದಲ್ಲಿ ಉದ್ಯೋಗ ಸಿಗಬೇಕು. ಸರೋಜಿನಿ ಮಹಿಷಿ ವರದಿ ಜಾರಿಗೆ ತರಬೇಕು, ಇದಕ್ಕೆ ನಮ್ಮ ಬೆಂಬಲವಿದೆ ನಟ ಪ್ರೇಮ್ ಹೇಳಿದರು.ಹಕ್ಕೊತ್ತಾಯಗಳು* ಸರ್ಕಾರ ಬಲಿಷ್ಠ ಕಾನೂನು ರೂಪಿಸಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಒದಗಿಸಬೇಕು.
* ಎಲ್ಲ ಖಾಸಗಿ ಸಂಸ್ಥೆಗಳಲ್ಲಿ ‘ಸಿ’ ಮತ್ತು ‘ಡಿ’ ದರ್ಜೆಯ ಶೇ.100ರಷ್ಟು ಮತ್ತು ಇತರೆ ಶೇ. 80ರಷ್ಟು ಹುದ್ದೆಗಳನ್ನುಮೀಸಲಿಡಬೇಕು.* ಕಾನೂನು ಪಾಲಿಸದ ಸಂಸ್ಥೆಗಳಿಗೆ ನೀಡಿರುವ ಮಾನ್ಯತೆ ರದ್ದುಗೊಳಿಸಬೇಕು.
* ಸರ್ಕಾರ ನೀಡಿರುವ ಭೂಮಿ ಮತ್ತು ಇತರೆ ಸವಲತ್ತುಗಳನ್ನು ಹಿಂಪಡೆಯಬೇಕು.* ದಂಡ ವಿಧಿಸಿ, ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು .
* ರಾಜ್ಯದಲ್ಲಿ 15 ವರ್ಷದಿಂದ ನೆಲೆಸಿದ ಕನ್ನಡ ಬರೆಯಲು, ಓದಲು ಬರುವವರನ್ನು ಕನ್ನಡಿಗರೆಂದು ಪರಿಗಣಿಸಬೇಕು.ಕರವೇ ಸಲ್ಲಿಸಿದ ಮನವಿಯಲ್ಲಿ ರಾಜ್ಯ ಸರ್ಕಾರ 1983ರಲ್ಲಿ ಡಾ.ಸರೋಜಿನಿ ಮಹಿಷಿ ಅವರ ನೇತೃತ್ವದಲ್ಲಿ ಸಮಿತಿ ರಚಿಸಿ ರಾಜ್ಯದಲ್ಲಿ ಉದ್ಯೋಗ ಮೀಸಲಾತಿಗೆ ಸಂಬಂಧಿಸಿದಂತೆ ಮಾನದಂಡಗಳನ್ನು ಶಿಫಾರಸು ಮಾಡಲು ಸೂಚಿಸಿತ್ತು. ಆ ನಂತರ 1984 ಜೂನ್ 13ರಂದು ಮಧ್ಯಂತರ ವರದಿಯನ್ನು ಮತ್ತು 1986 ಡಿಸೆಂಬರ್ 30ರಂದು ಅಂತಿಮ ವರದಿಯನ್ನು ಸಲ್ಲಿಸಿತ್ತು. ಈ ಸಮಿತಿಯು ಒಟ್ಟು 58 ಶಿಫಾರಸು ಮಾಡಿದ್ದು, ಆ ಶಿಫಾರಸುಗಳಲ್ಲಿ ರಾಜ್ಯ ಸರ್ಕಾರ 45 ಶಿಫಾರಸನ್ನು ಅಂಗೀಕರಿಸಿತ್ತು. ಈ ಪೈಕಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುವುದು ಸೇರಿದೆ. ಕರವೇ 2014ರಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ಆಗ್ರಹಿಸಿ ನ್ಯಾಷನಲ್ ಕಾಲೇಜು ಮೈದಾನದಿಂದ ವಿಧಾನಸೌಧದವರೆಗೂ ಬೃಹತ್ ಹೋರಾಟ ಕೈಗೊಂಡಿತ್ತು. ಆದರೂ ಇಂದಿನವರೆಗೂ ಕನ್ನಡಿಗರಿಗೆ ಅನ್ಯಾಯವಾಗುತ್ತಲೇ ಇದ್ದು, ರಾಜ್ಯ ಸರ್ಕಾರ ಕೂಡಲೇ ವಿಶೇಷ ಕಾನೂನು ಜಾರಿಗೊಳಿಸಬೇಕು ಎಂದು ಆಗ್ರಹಿಸಲಾಗಿತ್ತು.
ಈ ಬಗ್ಗೆ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಸರೋಜಿನಿ ಮಹಿಷಿ ವರದಿ ಜಾರಿಗೊಳಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯವರು ಹೋರಾಟ ಮಾಡುತ್ತಿದ್ದಾರೆ. ಮಹಿಷಿ ವರದಿ ಜಾರಿ ವಿಚಾರ ಅವರ ಹೋರಾಟದ ಒಂದು ಭಾಗ. ಮತ್ತೊಂದು ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ಒಂದು ವಿಶೇಷ ಕಾನೂನು ತರುವಂತೆಯೂ ಅವರು ಬೇಡಿಕೆ ಇಟ್ಟಿದ್ದಾರೆ. ನಾನು ಸಂವಿಧಾನದಲ್ಲಿ ಇದಕ್ಕೆ ಅವಕಾಶವಿದೆಯಾ ಎಂದು ಪರಿಶೀಲಿಸುವ ಮತ್ತು ಈ ಬಗ್ಗೆ ಅಡ್ವೊಕೇಟ್ ಜನರಲ್ ಜೊತೆಗೂ ಚರ್ಚಿಸುವುದಾಗಿ ಭರವಸೆ ನೀಡಿದ್ದೇನೆ ಎಂದು ಹೇಳಿದರು.