ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿಗೆ ಆಗ್ರಹಿಸಿ ಕರವೇ ಪ್ರತಿಭಟನೆ

| Published : Jul 02 2024, 01:49 AM IST / Updated: Jul 02 2024, 11:19 AM IST

ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿಗೆ ಆಗ್ರಹಿಸಿ ಕರವೇ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಚಿಕ್ಕಮಗಳೂರು, ನಿರುದ್ಯೋಗ ಸಮಸ್ಯೆಯಿಂದ ಬಳಲುತ್ತಿರುವ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ನೇತೃತ್ವದಲ್ಲಿ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಯಿತು.

ಚಿಕ್ಕಮಗಳೂರು : ನಿರುದ್ಯೋಗ ಸಮಸ್ಯೆಯಿಂದ ಬಳಲುತ್ತಿರುವ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ನೇತೃತ್ವದಲ್ಲಿ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಯಿತು.

ಪ್ರತಿಭಟನೆ ನೇತೃತ್ವವಹಿಸಿದ್ದ ಕರವೇ ಜಿಲ್ಲಾಧ್ಯಕ್ಷ ಅಶೋಕ್‌ ಕೆಂಪನಹಳ್ಳಿ ಮಾತನಾಡಿ, ಡಾ.ಸರೋಜಿನಿ ಮಹಿಷಿ ವರದಿ ಪ್ರಕಾರ ಕನ್ನಡ ನಾಡಿನಲ್ಲಿ ಪ್ರತಿಯೊಂದು ಉದ್ಯೋಗದಲ್ಲಿ ನಾಡಿನ ಯುವಕ ಯುವತಿಯರಿಗೆ ಮೀಸಲಾತಿ ಒದಗಿಸಿ ಕೊಡುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರತಿಭಟನೆಗೆ ರಾಜ್ಯ ಘಟಕ ಕರೆ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದರು.

ಡಾ. ಸರೋಜಿನಿ ವರದಿ ಜಾರಿಯಾಗದ ಕಾರಣ ನಾಡಿನ ಯುವ ಪೀಳಿಗೆ ಉದ್ಯೋಗದಿಂದ ವಂಚಿತವಾಗುತ್ತಿದೆ. ಅಲ್ಲದೇ ವಿವಿಧ ರಾಜ್ಯಗಳಿಂದ ಆಗಮಿಸುವ ವಲಸಿಗರಿಗೆ ಹೆಚ್ಚು ಮಣೆ ಹಾಕಲಾಗುತ್ತಿದೆ. ಇದರಿಂದ ರಾಜ್ಯದಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶಗಳು ಮರು ಭೂಮಿಯಲ್ಲಿ ನೀರು ಹುಡುಕಿದಂತಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಕೈಗಾರಿಕಾ ಉದ್ಯೋಗ ಸ್ಥಾಯಿ ಆದೇಶ ಕಾಯ್ದೆಯಡಿ ರಾಜ್ಯ ಸರ್ಕಾರ ಬಲಿಷ್ಠವಾದ ಕಾನೂನು ರೂಪಿಸಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಒದಗಿಸಬೇಕು. ಅಲ್ಲದೇ ಖಾಸಗಿ ಸಂಸ್ಥೆಗಳಲ್ಲಿ ಸಿ ಮತ್ತು ಡಿ ದರ್ಜೆಯ ಶೇ.100 ರಷ್ಟು ಹುದ್ದೆಗಳು ಕನ್ನಡಿಗರಿಗೆ ಒದಗಿಸುವಂತೆ ಆಗ್ರಹಿಸಿದರು.

ಈಗಾಗಲೇ ಖಾಸಗಿ ಸಂಸ್ಥೆಗಳ ಇತರೆ ಹುದ್ದೆಗಳಲ್ಲಿ ಶೇ.80 ರಷ್ಟು ಕೆಲಸವನ್ನು ಕನ್ನಡಿಗರಿಗೆ ಮೀಸಲಿಡಬೇಕು, 15 ವರ್ಷ ಗಳ ಕಾಲ ರಾಜ್ಯದಲ್ಲಿ ನೆಲೆಸಿದವರನ್ನು ಕನ್ನಡಿಗರೆಂದು ಪರಿಗಣಿಸುವ ನಿಯಮವಿದೆ. ಇವರಿಗೆ ಕಡ್ಡಾಯವಾಗಿ ಕನ್ನಡ ಬರವಣಿಗೆ ಪರೀಕ್ಷಿಸಿ ತೇರ್ಗಡೆ ಹೊಂದಿದವರನ್ನು ಮಾತ್ರ ಕನ್ನಡಿಗರೆಂದು ಪರಿಗಣಿಸಬೇಕೆಂದು ಒತ್ತಾಯಿಸಿದರು.ಉದ್ಯೋಗ ಸಂಬಂಧ ರಾಜ್ಯಸರ್ಕಾರ ರೂಪಿಸುವ ಕಾನೂನನ್ನು ಸಮರ್ಪಕವಾಗಿ ಜಾರಿಗೆ ತರಲು ಕನ್ನಡ ಅಭಿವೃದ್ಧಿ ಪಾಧಿಕಾರಕ್ಕೆ ಹೆಚ್ಚಿನ ಅಧಿಕಾರ ನೀಡಬೇಕು. ಮುಂದೆ ಕಾನೂನು ಸಮಸ್ಯೆಗಳು ಎದುರಾದರೆ ಅದನ್ನು ಸಮರ್ಥವಾಗಿ ಎದುರಿಸಲು ವಕೀಲರ ತಂಡ ಸಿದ್ಧಪಡಿಸಬೇಕೆಂದು ತಿಳಿಸಿದರು.ಸರ್ಕಾರದ ನಿಯಮಾವಳಿ ಪಾಲಿಸದ ಸಂಸ್ಥೆಗಳಿಗೆ ಮಾನ್ಯತೆ ರದ್ದುಗೊಳಿಸಬೇಕು. 

ಭೂಮಿ ಅಥವಾ ಸವಲತ್ತು ಒದಗಿಸಿ ದರೆ ಹಿಂಪಡೆದುಕೊಳ್ಳುವ ಕಾನೂನು ರೂಪಿಸಬೇಕು. ಜೊತೆಗೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ದಂಡ ವಸೂಲಿ ಮಾಡು ವಂತೆ ಒತ್ತಾಯಿಸಿದರು.ಕೇಂದ್ರ ಸರ್ಕಾರದ ಇಲಾಖೆಗಳು ಮತ್ತು ಸಾರ್ವಜನಿಕ ವಲಯದ ಘಟಕಗಳಲ್ಲಿ ಗ್ರೂಪ್ ಸಿ ಮತ್ತು ಗ್ರೂಪ್ ಡಿ ಹುದ್ದೆಗಳಲ್ಲಿ ಕನ್ನಡಿಗರಿಗೆ ಶೇ. 100 ರಷ್ಟು ಉದ್ಯೋಗ ಮೀಸಲಿರಿಸಬೇಕು. ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸಲು ವಿಫಲ ರಾಗುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.ಪ್ರತಿಭಟನೆ ಬಳಿಕ ಮುಖಂಡರು ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೀಸಲಾತಿಗೆ ಒತ್ತಾಯಿಸಿ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ವೇದಿಕೆ ಜಿಲ್ಲಾ ಉಪಾಧ್ಯಕ್ಷರಾದ ಕೋಟೆ ಮಲ್ಲೇಶ್, ದಶರಥ ರಾಜ್ ಅರಸ್, ಪ್ರಧಾನ ಕಾರ್ಯದರ್ಶಿ ಕೋಟೆ ಸೋಮಣ್ಣ, ವಿವಿಧ ತಾಲೂಕು ಅಧ್ಯಕ್ಷರಾದ ಸಿದ್ದಪ್ಪ, ವಿನೋದ್, ಮಧು, ಮನೋಜ್‌ಶಟ್ಟಿ, ಯುವ ಘಟಕದ ಅಧ್ಯಕ್ಷ ಕುಮಾರಶೆಟ್ಟಿ, ಸಂಘಟನಾ ಕಾರ್ಯದರ್ಶಿ ರುದ್ರೇಶ್, ಮಹಿಳಾ ಘಟಕದ ಅಧ್ಯಕ್ಷೆ ನಾಗಲತಾ, ಉಪಾಧ್ಯಕ್ಷೆ ಶೈಲಾ ಸಿದ್ದಪ್ಪ, ಮುಖಂಡರಾದ ಅಶೋಕ್‌, ಇರ್ಷಾದ್ ಅಹ್ಮದ್ ಹಾಗೂ ಕಾರ್ಯಕರ್ತರು ಇದ್ದರು.ಪೋಟೋ ಫೈಲ್‌ ನೇಮ್‌ 1 ಕೆಸಿಕೆಎಂ 4ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕರವೇ ಕಾರ್ಯಕರ್ತರು ಚಿಕ್ಕಮಗಳೂರಿನ ಆಜಾದ್‌ ಪಾರ್ಕ್‌ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.