ಸಾರಾಂಶ
ರಾಜ್ಯದಲ್ಲಿ ಇಂತಹ ಹೇಯ ಕೃತ್ಯಗಳು ಪದೇ ಪದೇ ಮರುಕಳಿಸುತ್ತಿರುವುದು ಕಾಂಗ್ರೆಸ್ ನೇತೃತ್ವದ ಸಿದ್ದರಾಮಯ್ಯ ಸರ್ಕಾರದ ವೈಫಲ್ಯವನ್ನು ಎತ್ತಿ ತೋರಿಸುತ್ತದೆ ಎಂದು ಸಂಸದ ಬ್ರಿಜೇಶ್ ಚೌಟ ಆರೋಪಿಸಿದರು.
ಕನ್ನಡಪ್ರಭ ವಾರ್ತೆ ಮಂಗಳೂರು
ಕಾರ್ಕಳದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದು ಅತ್ಯಂತ ಹೇಯ ಕೃತ್ಯವಾಗಿದ್ದು, ಕರ್ನಾಟಕದ ಕಾನೂನು ಸುವ್ಯವಸ್ಥೆ ದಿನದಿಂದ ದಿನಕ್ಕೆ ಹದಗೆಡುತ್ತಿದೆ ಎಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಆತಂಕ ವ್ಯಕ್ತಪಡಿಸಿದ್ದಾರೆ.ಕಾರ್ಕಳದಲ್ಲಿ ಹಿಂದೂ ಯುವತಿಯನ್ನು ಅಲ್ತಾಫ್, ಸವೇರಾ ರಿಚರ್ಡ್ ಕಾರ್ಡೋಜಾ ಹಾಗೂ ಅವರ ಸಹಚರ ಆರೋಪಿಗಳು ಅಪಹರಿಸಿ ಮಾದಕ ದ್ರವ್ಯ ನೀಡಿ ಗ್ಯಾಂಗ್ ರೇಪ್ ನಡೆಸಿ ಅಟ್ಟಹಾಸ ಮೆರೆದಿದ್ದು, ಇಂತಹ ವಿಕೃತ ಕೃತ್ಯ ಖಂಡನೀಯ. ಈ ದುರುಳರ ಕೃತ್ಯದಿಂದ ರಾಜ್ಯವೇ ತಲೆತಗ್ಗಿಸುವಂತಾಗಿದ್ದು, ಕರಾವಳಿಯಲ್ಲಿ ಡ್ರಗ್ಸ್ ದಂಧೆ ಮಿತಿ ಮೀರಿದೆ ಎನ್ನುವುದಕ್ಕೆ ಈ ಪ್ರಕರಣವೇ ಜ್ವಲಂತ ಸಾಕ್ಷಿಯಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಇಂತಹ ಹೇಯ ಕೃತ್ಯಗಳು ಪದೇ ಪದೇ ಮರುಕಳಿಸುತ್ತಿರುವುದು ಕಾಂಗ್ರೆಸ್ ನೇತೃತ್ವದ ಸಿದ್ದರಾಮಯ್ಯ ಸರ್ಕಾರದ ವೈಫಲ್ಯವನ್ನು ಎತ್ತಿ ತೋರಿಸುತ್ತದೆ. ಹಿಂದೂ ಸಮಾಜದ ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲದಂದಾಗಿದೆ. ಗೃಹ ಇಲಾಖೆ ಈ ಕೂಡಲೇ ಎಚ್ಚೆತ್ತುಕೊಂಡು ಕಾರ್ಕಳದ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಆರೋಪಿಗಳಿಗೆ ಕಠಿಣ ಶಿಕ್ಷೆ ಗುರಿಪಡಿಸುವುದಕ್ಕೆ ಅಗತ್ಯ ಕಾನೂನು ಕ್ರಮ ಜರುಗಿಸಬೇಕು ಎಂದು ಕ್ಯಾ.ಬ್ರಿಜೇಶ್ ಚೌಟ ಪತ್ರಿಕಾ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.