ಸಾರಾಂಶ
ಕನ್ನಡಪ್ರಭ ವಾರ್ತೆ ಬೆಂಗಳೂರು
ಜಗಜ್ಯೋತಿ ಬಸವೇಶ್ವರರ ಭಾವಚಿತ್ರವನ್ನು ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಹಾಕಬೇಕು ಎಂಬ ನಿರ್ಧಾರದ ನಂತರ ಇದೀಗ ಜಗಜ್ಯೋತಿ ಬಸವಣ್ಣ ಅವರನ್ನು ‘ಕರ್ನಾಟಕದ ಸಾಂಸ್ಕೃತಿಕ ನಾಯಕ’ ಎಂದು ಘೋಷಿಸುವ ಕುರಿತು ರಾಜ್ಯ ಸರ್ಕಾರ ನಿರ್ಧರಿಸಿದೆ.
ಈ ಕುರಿತು ಗುರುವಾರ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯಿಸಲಾಗಿದ್ದು, ಶೀಘ್ರದಲ್ಲಿ ಅಧಿಕೃತ ಘೋಷಣೆ ಮಾಡಲಾಗುತ್ತದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಸ್ತಾವನೆಗೆ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.
ಆ ಮೂಲಕ 12ನೇ ಶತಮಾನದಲ್ಲಿ ಜಾತಿ ರಹಿತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ ಬಸವಣ್ಣ ಅವರಿಗೆ ಸರ್ಕಾರ ಗೌರವ ಸೂಚಿಸುವ ಕೆಲಸ ಮಾಡುತ್ತಿದೆ.
ಮಹಾರಾಷ್ಟ್ರದಲ್ಲಿ ಛತ್ರಪತಿ ಶಿವಾಜಿ ಅವರನ್ನು ಆ ರಾಜ್ಯದ ಸಾಂಸ್ಕೃತಿಕ ರಾಯಭಾರಿಯನ್ನಾಗಿಸಲಾಗಿದೆ. ಇದೀಗ ಕರ್ನಾಟಕದಲ್ಲಿ ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಲಾಗುತ್ತಿದೆ ಎಂದರು.
ಸಚಿವ ಸಂಪುಟದ ನಿರ್ಧಾರದಿಂದಾಗಿ ಸಮಾಜದಲ್ಲಿನ ಜಾತಿ, ಧರ್ಮಗಳ ನಡುವಿನ ದ್ವೇಷಕ್ಕೆ ಕಡಿವಾಣ ಹಾಕಬಹುದಾಗಿದೆ.
ಬಸವಣ್ಣ ಅವರ ಆದರ್ಶಗಳು ಈಗಿನ ಕಾಲಘಟ್ಟದಲ್ಲಿ ಅವಶ್ಯಕವಾಗಿದ್ದು, ಅದರ ಮಹತ್ವವನ್ನು ಜನರಿಗೆ ತಿಳಿಸಲು ಸಹಕಾರಿಯಾಗಲಿದೆ ಎಂದು ತಿಳಿಸಿದರು.
ಬಸವಣ್ಣ ಅವರಿಗೆ ಗೌರವ ಸೂಚಿಸುವ ಸಲುವಾಗಿ 2017ರಲ್ಲಿ ಅಂದಿನ ಕಾಂಗ್ರೆಸ್ ಸರ್ಕಾರ ಸರ್ಕಾರಿ ಕಚೇರಿಗಳಲ್ಲಿ ಬಸವೇಶ್ವರರ ಭಾವಚಿತ್ರ ಹಾಕುವುದನ್ನು ಕಡ್ಡಾಯಗೊಳಿಸಿ ಆದೇಶಿಸಿತ್ತು.
ಅದರಂತೆ ರಾಜ್ಯ ಸರ್ಕಾರದ ಎಲ್ಲ ಕಚೇರಿಗಳಲ್ಲೂ ಬಸವೇಶ್ವರರ ಭಾವಚಿತ್ರ ಹಾಕಲಾಗಿದೆ. ಇದೀಗ ಬಸವೇಶ್ವರರನ್ನು ರಾಜ್ಯದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಲಾಗುತ್ತಿದೆ.