ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ ಖಂಡಿಸಿ ಪ್ರತಿಭಟನೆ

| Published : Aug 28 2024, 12:58 AM IST

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಮತ್ತು ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದಿಂದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಮಂಗಳವಾರ ಬೃಹತ್‌ ಪ್ರತಿಭಟನೆ ನಡೆಸಿ ರಾಜ್ಯಪಾಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.

ಕನ್ನಡಪ್ರಭ ವಾರ್ತೆ ಬೆಂಗಳೂರು

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಮತ್ತು ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದಿಂದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಮಂಗಳವಾರ ಬೃಹತ್‌ ಪ್ರತಿಭಟನೆ ನಡೆಸಿ ರಾಜ್ಯಪಾಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.

ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ, ಬಿಜೆಪಿಯ ಮಾಜಿ ಸಚಿವರಾದ ಜನಾರ್ದನ ರೆಡ್ಡಿ, ಮುರುಗೇಶ್‌ ನಿರಾಣಿ, ಶಶಿಕಲಾ ಜೊಲ್ಲೆ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲು ರಾಜ್ಯಪಾಲರು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ. ಆದರೆ ಸಿದ್ದರಾಮಯ್ಯ ಅವರು ಯಾವುದೇ ತಪ್ಪು ಮಾಡದಿದ್ದರೂ ಆತುರಾತುರವಾಗಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ ಎಂದು ಪ್ರತಿಭಟನಾಕಾರರು ಟೀಕಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ದಲಿತ ಮುಖಂಡ ಮಾವಳ್ಳಿ ಶಂಕರ್‌, ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಮತ್ತು ಜೆಡಿಎಸ್‌ನವರು ವಾಮಮಾರ್ಗ ಅನುಸರಿಸುತ್ತಿದ್ದಾರೆ. ರಾಜಭವನದನ್ನು ದುರುಪಯೋಗ ಮಾಡಿಕೊಂಡು ರಾಜ್ಯಪಾಲರ ಮೂಲಕ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡಿಸಿದ್ದಾರೆ ಎಂದು ಆರೋಪಿಸಿದರು.

ಯಾವುದೇ ತಪ್ಪು ಮಾಡಿಲ್ಲ:

ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ರಾಜ್ಯ ಪ್ರಧಾನ ಸಂಚಾಲಕ ರಾಮಚಂದ್ರಪ್ಪ ಮಾತನಾಡಿ, ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಅವರು ಯಾವುದೇ ತಪ್ಪು ಮಾಡದಿದ್ದರೂ ವಿನಾಕಾರಣ ಅವರನ್ನು ಸಿಲುಕಿಸಲು ಜೆಡಿಎಸ್‌ ಯತ್ನಿಸುತ್ತಿದೆ. ಸಿದ್ದರಾಮಯ್ಯ ಅವರ ಮೇಲೆ ಗೂಬೆ ಕೂರಿಸಲು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಮುಂದಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ವಿಧಾನ ಪರಿಷತ್‌ ಸದಸ್ಯರಾದ ಅಬ್ದುಲ್‌ ಜಬ್ಬಾರ್‌, ನಾಗರಾಜ ಯಾದವ್‌, ಮಾಜಿ ಅಡ್ವೋಕೇಟ್‌ ಜನರಲ್‌ ಪ್ರೊ.ರವಿವರ್ಮಕುಮಾರ್‌, ಮುಖಂಡ ಜಿ.ಎ.ಬಾವಾ, ಚಿಂತಕ ಅನಂತ್‌ ನಾಯ್ಕ್‌ ಪಾಲ್ಗೊಂಡಿದ್ದರು.

ರಾಜಭವನ ಚಲೋಗೆ ಯತ್ನ

ರಾಜ್ಯಪಾಲರ ನಡೆ ಖಂಡಿಸಿ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆಗೆ ಕರೆ ನೀಡಿದ್ದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿತ್ತು. ಹೆಚ್ಚಿನ ಸಂಖ್ಯೆಯಲ್ಲಿ ಜನತೆ ಆಗಮಿಸಬಹುದು ಎಂದು ಈ ಭಾಗದ ಸಂಚಾರ ಮಾರ್ಗಗಳಲ್ಲಿ ಬದಲಾವಣೆ ಮಾಡಲಾಗಿತ್ತು. ಆದರೂ ಕೆಲ ಕಾಲ ಸ್ವಾತಂತ್ರ್ಯ ಉದ್ಯಾನವನದ ಸುತ್ತಮುತ್ತಲ ರಸ್ತೆಗಳಲ್ಲಿ ವಾಹನ ದಟ್ಟಣೆ ಉಂಟಾಗಿ ವಾಹನ ಸವಾರರು ಪರದಾಡುವಂತಾಯಿತು. ಮಧ್ಯಾಹ್ನದ ಹೊತ್ತಿಗೆ ಪ್ರತಿಭಟನಾಕಾರರು ರಾಜಭವನ ಚಲೋಗೆ ಮುಂದಾದಾಗ ಇದಕ್ಕೆ ಅವಕಾಶ ನೀಡದ ಪೊಲೀಸರು ವಶಕ್ಕೆ ಪಡೆದು ಬಳಿಕ ಬಿಡುಗಡೆಗೊಳಿಸಿದರು.