ತುಮಕೂರಿನ ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ಶುಕ್ರವಾರ ಸಂಜೆ 6 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ. ಈ ವೇಳೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ಗೌರವ ಉಪಸ್ಥಿತಿ ಇರಲಿದ್ದಾರೆ.

ಕನ್ನಡಪ್ರಭ ವಾರ್ತೆ ತುಮಕೂರು

ಪ್ರತಿಭಾನ್ವೇಷಣೆಗೆ ವೇದಿಕೆಯಾಗಿರುವ ಕರ್ನಾಟಕ ಕ್ರೀಡಾಕೂಟ 2025- 26 ಅನ್ನು ಜನವರಿ 16ರಿಂದ ಜನವರಿ 22ರವರೆಗೆ ತುಮಕೂರು ಮತ್ತು ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಿಂಪಿಕ್‌ ಸಂಸ್ಥೆ ಮತ್ತು ಜಿಲ್ಲಾಡಳಿತದ ಸಹಯೋಗದಲ್ಲಿ ಕೂಟವನ್ನು ಆಯೋಜಿಸಲಾಗಿದೆ. ಹಿಂದಿನ 5 ಆವೃತ್ತಿಗಳು ರಾಜ್ಯದ ವಿವಿಧ ನಗರಗಳಲ್ಲಿ ನಡೆದಿದ್ದು ಇದೇ ಮೊದಲ ಬಾರಿ ದೊಡ್ಡ ಕ್ರೀಡಾಕೂಟಕ್ಕೆ ತುಮಕೂರು ನಗರ ವೇದಿಕೆಯಾಗಿದೆ.

ತುಮಕೂರಿನ ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ಶುಕ್ರವಾರ ಸಂಜೆ 6 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ. ಈ ವೇಳೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ಗೌರವ ಉಪಸ್ಥಿತಿ ಇರಲಿದ್ದಾರೆ. ಗೃಹ ಸಚಿವ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ್‌ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ರಾಜ್ಯ ಒಲಿಂಪಿಕ್‌ ಸಂಸ್ಥೆಯ ಅಧ್ಯಕ್ಷ ಕೆ.ಗೋವಿಂದರಾಜ್‌, ಮಾಜಿ ಸಚಿವರು, ಹಾಲಿ ಹಾಗೂ ಮಾಜಿ ಶಾಸಕರು ಸೇರಿ ಹಲವು ಗಣ್ಯರು ಈ ವೇಳೆ ಉಪಸ್ಥಿತರಿರಲಿದ್ದಾರೆ.

ರಾಜ್ಯಾದ್ಯಂತ ಸುಮಾರು 4500ಕ್ಕೂ ಅಧಿಕ ಕ್ರೀಡಾಪಟುಗಳು (ಬಾಲಕರು ಮತ್ತು ಬಾಲಕಿಯರು) ಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಬಾರಿಯ ಕೂಟದಲ್ಲಿ ಅಥ್ಲೆಟಿಕ್ಸ್‌, ಬ್ಯಾಡ್ಮಿಂಟನ್‌ , ಬಾಸ್ಕೆಟ್‌ಬಾಲ್‌, ಬಾಕ್ಸಿಂಗ್‌, ಫೆನ್ಸಿಂಗ್‌, ಫುಟ್ಬಾಲ್‌, ಜಿಮ್ನಾಸ್ಟಿಕ್ಸ್‌, ಹ್ಯಾಂಡ್‌ಬಾಲ್‌, ಹಾಕಿ ,ಜೂಡೋ ,ಖೋ-ಖೋ, ಕಬಡ್ಡಿ, ಲಾನ್‌ ಟೆನಿಸ್‌, ನೆಟ್‌ಬಾಲ್‌, ಈಜು ,ಟೇಬಲ್‌ ಟೆನ್ನಿಸ್‌, ಟೇಕ್ವಾಂಡೊ, ವಾಲಿಬಾಲ್‌, ವುಶು, ಕುಸ್ತಿ, ವೇಟ್‌ ಲಿಫ್ಟಿಂಗ್‌, ರೈಫಲ್‌ ಶೂಟಿಂಗ್‌, ಬ್ಯಾಡ್ಮಿಂಟನ್‌, ಸೈಕ್ಲಿಂಗ್‌, ಕೆನೊಯಿಂಗ್‌ ಮತ್ತು ಕಯಾಕಿಂಗ್‌ ಸ್ಪರ್ಧೆಗಳು ನಡೆಯಲಿವೆ.

ಕೂಟದ ಉದ್ಘಾಟನಾ ಕಾರ್ಯಕ್ರಮಕ್ಕೆ ವೇದಿಕೆಯಾಗುವ ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲೇ ಕೂಟದ ಸಮಾರೋಪ ಸಮಾರಂಭ ಜನವರಿ 22ರಂದು ನಡೆಯಲಿದೆ. ಕರ್ನಾಟಕ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೊಟ್‌ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.