ಸಾರಾಂಶ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು
ಕೇಂದ್ರದ ಬಜೆಟ್‌ನಲ್ಲಿ ಕರ್ನಾಟಕ ರಾಜ್ಯಕ್ಕೆ ಮಲತಾಯಿ ಧೋರಣೆ ಅನುಸರಿಸಲಾಗಿದೆ ಎಂದು ಕೆಪಿಸಿಸಿ ವಕ್ತಾರ ಎಚ್.ಎಚ್. ದೇವರಾಜ್ ಆರೋಪಿಸಿದ್ದಾರೆ.ರಾಜ್ಯದಿಂದ 15 ಮಂದಿ ಬಿಜೆಪಿ ಸಂಸದರನ್ನು ಆಯ್ಕೆ ಮಾಡಿ ಕಳುಹಿಸಲಾಗಿದೆ. ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಸ್ತಿತ್ವದಲ್ಲಿದೆ. ಆದರೆ, ಕರ್ನಾಟಕವನ್ನು ಕಡೆಗಣಿಸಲಾಗಿದೆ. ಬಿಹಾರ ರಾಜ್ಯಕ್ಕೆ ಬಜೆಟ್‌ನಲ್ಲಿ ಸಿಂಹಪಾಲು ಅನುದಾನ ಒದಗಿಸಲಾಗಿದೆ ಎಂದು ಬುಧವಾರ ಸುದ್ಧಿಗೋಷ್ಠಿಯಲ್ಲಿ ಹೇಳಿದರು.
ರಾಜ್ಯದ ಭದ್ರಾ ಮೇಲ್ದಂಡೆ ಯೋಜನೆಗೆ ನೀಡಬೇಕಿದ್ದ 5 ಸಾವಿರ ಕೋಟಿ ರು. ಬಗ್ಗೆ ಬಜೆಟ್‌ನಲ್ಲಿ ಪ್ರಸ್ತಾಪವಿಲ್ಲ. ಭದ್ರಾವತಿ ವಿಎಸ್‌ಐಎಲ್ ಪುನರ್ ಚೇತನ, ಮೇಕೆದಾಟು, ನೀರಾವರಿ ಯೋಜನೆಗಳಿಗೆ ಹಣ ನೀಡದೆ ರಾಜ್ಯದ ಜನತೆಗೆ ಮೋಸ ಮಾಡಿರುವ ಬಜೆಟ್ ಆಗಿದೆ ಎಂದು ಆರೋಪಿಸಿದರು.ಕರ್ನಾಟಕದಿಂದ ಆಯ್ಕೆಯಾಗಿ ರಾಜ್ಯ ಸಭೆಗೆ ಹೋಗಿರುವ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಅವರು ಕೂಡಲೇ ರಾಜೀನಾಮೆ ಸಲ್ಲಿಸಬೇಕು. ಇಲ್ಲದಿದ್ದರೆ ಅವರು ಆಂಧ್ರಪ್ರದೇಶ ಅಥವಾ ಬಿಹಾರದಿಂದಲೇ ಆರಿಸಿ ಹೋಗಲಿ ಎಂದು ಹೇಳಿದ ಅವರು, ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಸರಿಪಡಿಸಬೇಕು. ಇಲ್ಲವಾದಲ್ಲಿ ಕಾಂಗ್ರೆಸ್ ಪಕ್ಷ ಹೋರಾಟ ನಡೆಸಲಿದೆ ಎಂದರು.
ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ ಬಹಳಷ್ಟು ಹಾನಿ ಸಂಭವಿಸಿದೆ. ಈ ಬಗ್ಗೆ ಜಿಲ್ಲಾಡಳಿತ ಬೆಳೆ ನಷ್ಟದ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು. ಜಿಲ್ಲೆಗೆ ಆಗಿರುವ ನಷ್ಟದ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪಕ್ಷದ ಮುಖಂಡರು, ಜಿಲ್ಲೆಯ ಎಲ್ಲಾ ಶಾಸಕರ ನಿಯೋಗ ಮುಖ್ಯಮಂತ್ರಿ ಬಳಿಗೆ ತೆರಳಿ ನಷ್ಟ ಪರಿಹಾರ ಭರ್ತಿ ಮಾಡಿಕೊಡಲು ಮನವಿ ಮಾಡಲಾಗುವುದು ಎಂದು ಹೇಳಿದರು.ಕಾಂಗ್ರೆಸ್ ಪಕ್ಷದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಜಯಪ್ರಕಾಶ್ ಹೆಗ್ಡೆ ಅವರು ಗೆದ್ದಲ್ಲಿ ಸರ್ಫೆಸಿ ಕಾಯಿದೆಯನ್ನು ಕೃಷಿ ವಲಯದಿಂದ ಹೊರಗಿಡುವ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದ್ದರು. ಆದರೆ, ಈಗಿನ ಸಂಸದರು ಈ ಬಗ್ಗೆ ಧ್ವನಿ ಎತ್ತುತ್ತಿಲ್ಲ. ಈಗಾಗಲೇ 6 ಸಾವಿರ ರೈತರ ಜಮೀನು ಸರ್ಫೆಸಿ ಕಾಯಿದೆ ಅಡಿ ಹರಾಜಿಗೆ ಬಂದಿವೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಹಿರೇಮಗಳೂರು ರಾಮಚಂದ್ರ, ಇಂದಾವರ ಲೋಕೇಶ್ ಇದ್ದರು.ಪೋಟೋ ಫೈಲ್ ನೇಮ್ 24 ಕೆಸಿಕೆಎಂ 4