ವಿವಾದಿತ 13352 ಮಂದಿ ಶಿಕ್ಷಕರ ನೇಮಕಾತಿಗೆ ಹೈಕೋರ್ಟ್‌ ಅಸ್ತು

| Published : Oct 13 2023, 12:16 AM IST

ವಿವಾದಿತ 13352 ಮಂದಿ ಶಿಕ್ಷಕರ ನೇಮಕಾತಿಗೆ ಹೈಕೋರ್ಟ್‌ ಅಸ್ತು
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ 13,352 ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಮುಂದುವರೆಸಲು ಸರ್ಕಾರಕ್ಕೆ ಹೈಕೋರ್ಟ್‌ ಗುರುವಾರ ಹಸಿರು ನಿಶಾನೆ ತೋರಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ 13,352 ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಮುಂದುವರೆಸಲು ಸರ್ಕಾರಕ್ಕೆ ಹೈಕೋರ್ಟ್‌ ಗುರುವಾರ ಹಸಿರು ನಿಶಾನೆ ತೋರಿದೆ.ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆಯು ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳ ನೇಮಕಾತಿ ಸಂಬಂಧ 2022ರ ನ.18ರಂದು ಪ್ರಕಟಿಸಿದ್ದ 1:1 ಅನುಪಾತದ ತಾತ್ಕಾಲಿಕ ಆಯ್ಕೆಪಟ್ಟಿ ರದ್ದುಪಡಿಸಿ ಹೈಕೋರ್ಟ್‌ನ ಏಕ ಸದಸ್ಯ ನ್ಯಾಯಪೀಠ ನೀಡಿದ್ದ ತೀರ್ಪನ್ನು ರದ್ದುಪಡಿಸಿರುವ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಮತ್ತು ನ್ಯಾಯಮೂರ್ತಿ ಎಂಜಿಎಸ್‌ ಕಮಲ್‌ ಅವರಿದ್ದ ವಿಭಾಗೀಯ ಪೀಠ, ಸರ್ಕಾರವು 2023ರ ಜೂ.8ರಂದು ಸಿದ್ಧಪಡಿಸಿರುವ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಹೆಸರಿದ್ದ 13,352 ಮಂದಿ ಆಯ್ಕೆ ಅಭ್ಯರ್ಥಿಗಳನ್ನು ಒಳಗೊಂಡು ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಮುಂದುವರಿಸಲು ಅನುಮತಿ ನೀಡಿದೆ.ರಾಜ್ಯದಾದ್ಯಂತ ದೊಡ್ಡ ಪ್ರಮಾಣದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳು ಭರ್ತಿಯಾಗದೆ ಖಾಲಿ ಉಳಿದಿವೆ. ಇದರಿಂದ ಶಿಕ್ಷಕರ ಕೊರತೆ ಉಂಟಾಗಿ, 6ರಿಂದ 8ನೇ ತರಗತಿಗಳ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಹುದ್ದೆಗಳ ಭರ್ತಿಗೆ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಅಗತ್ಯತೆ ಕಂಡುಬಂದಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ 2023ರ ಜೂ.8ರಂದು ಸಿದ್ಧಪಡಿಸಿರುವ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಾರ 13,352 ಮಂದಿ ಆಯ್ಕೆಯಾದ ಅಭ್ಯರ್ಥಿಗಳಿಂದ ಶಿಕ್ಷಕರ ನೇಮಕಾತಿಯನ್ನು ರಾಜ್ಯ ಸರ್ಕಾರ ಮಾಡಬಹುದು ಹೈಕೋರ್ಟ್‌ ಆದೇಶದಲ್ಲಿ ತಿಳಿಸಿದೆ.ಅಲ್ಲದೆ, ಪತಿ ಅಥವಾ ಪೋಷಕರ ಜಾತಿ- ಆದಾಯ ಪ್ರಮಾಣಪತ್ರವನ್ನು ಮತ್ತು ಮೆರಿಟ್‌/ರೋಸ್ಟರ್ ಪರಿಗಣಿಸಿ ತಾತ್ಕಾಲಿಕ ಆಯ್ಕೆಪಟ್ಟಿ ಸಿದ್ಧಪಡಿಸಿ 2023ರ ಜೂ.6ರಂದು ಪ್ರಕಟಿಸಲಾಗಿದೆ ಎಂದು ಸರ್ಕಾರ ನ್ಯಾಯಾಲಯಕ್ಕೆ ಸ್ಪಷ್ಟಪಡಿಸಿದೆ. ಅದರಂತೆ ನೇಮಕಾತಿಗೆ ಸರ್ಕಾರ ಹೊರಡಿಸಿದ್ದ ಅಧಿಸೂಚನೆಯಂತೆ ಆದಾಯ ಪ್ರಮಾಣಪತ್ರ ಸಲ್ಲಿಸಿದವರ ಆಯ್ಕೆ ಅಂತಿಮಗೊಳಿಸಬಹುದಾಗಿದೆ. ಆದರೆ, ಸರ್ಕಾರದ ಅಧಿಸೂಚನೆಯಲ್ಲಿ ಹೇಳಿದಂತೆ ನಿಗದಿತ ನಮೂನೆಯಲ್ಲಿ ಆದಾಯ ಪ್ರಮಾಣ ಪತ್ರ ಸಲ್ಲಿಸದ ಅಭ್ಯರ್ಥಿಗಳ ಆಯ್ಕೆ ಮುಂದೂಡಲಾಗಿದೆ. ನೊಂದ ಅಭ್ಯರ್ಥಿಗಳು ಕರ್ನಾಟಕ ಆಡಳಿತಾತ್ಮಕ ನ್ಯಾಯಾಧಿಕರಣಕ್ಕೆ (ಕೆಎಟಿ) ಅರ್ಜಿ ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದು. ಆ ಅರ್ಜಿ ದಾವೆ ಇತ್ಯರ್ಥವಾಗುವವರೆಗೆ ವಿವಾದಿತ ಅಭ್ಯರ್ಥಿಗಳ ಆಯ್ಕೆ ಮುಂದೂಡಲಾಗಿದೆ ಎಂದು ಹೇಳಲಾಗಿದೆ.ಹಾಗೆಯೇ, 2023ರ ಜೂ.8ರಂದು ಪ್ರಕಟಿಸಿದ ತಾತ್ಕಾಲಿಕ ಆಯ್ಕೆಪಟ್ಟಿಯಲ್ಲಿ 451 ಅಭ್ಯರ್ಥಿಗಳನ್ನು ಹೊರಗಿಡಲಾಗಿದೆ. ಕೇವಲ ಅರ್ಹತೆಯ ಆಧಾರದ ಮೇಲೆ 451 ಅಭ್ಯರ್ಥಿಗಳ ಹೆಸರನ್ನು ಹೊರಗಿಡಲಾಗಿದೆ ಎಂದು ಹೇಳಲಾಗಿದೆ. ಅದರಂತೆ ನಿಗದಿತ ನಮೂನೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಒದಗಿಸದ ಅಭ್ಯರ್ಥಿಗಳ ಅರ್ಹತೆ ಅಮಾನ್ಯವಾಗಲಿದೆ. ಅಂತಹ ಹುದ್ದೆಗಳನ್ನು ಅರ್ಹತೆಯ ಮೇಲೆ ಹೊರಗಿಡಲಾದ ಅಭ್ಯರ್ಥಿಗಳು ಮತ್ತು ನಿಗದಿತ ನಮೂನೆಯಲ್ಲಿ ಜಾತಿ-ಆದಾಯ ಪ್ರಮಾಣಪತ್ರಗಳನ್ನು ಸಲ್ಲಿಸಿದ ಅಭ್ಯರ್ಥಿಗಳಿಂದ ಭರ್ತಿ ಮಾಡಬಹುದು. ಪ್ರಸ್ತುತ ವ್ಯಾಜ್ಯದಿಂದ ರಾಜ್ಯದಾದ್ಯಂತ 6 ರಿಂದ 8ನೇ ತರಗತಿಯ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಂಡಿದೆ. ಇಂತಹ ವಿಚಿತ್ರವಾದ ಪರಿಸ್ಥಿತಿಯನ್ನು ಪರಿಗಣಿಸಿ ಈ ನಿಬಂಧನೆಯೊಂದಿಗೆ ನೇಮಕ ಪ್ರಕ್ರಿಯೆ ಮುಂದುವರಿಸಲು ರಾಜ್ಯ ಸರ್ಕಾರಕ್ಕೆ ಅನುವು ಮಾಡಿಕೊಡಲಾಗುತ್ತಿದೆ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.ಪ್ರಕರಣವೇನು?:

ರಾಜ್ಯದಲ್ಲಿ ಖಾಲಿಯಿದ್ದ ಸುಮಾರು 15 ಸಾವಿರ ಪದವೀಧರರ ಪ್ರಾಥಮಿಕ ಶಾಲಾ ಶಿಕ್ಷಕರ (6-8 ತರಗತಿ) ನೇಮಕಾತಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ 2022ರ ಫೆ.22ರಂದು ಅಧಿಸೂಚನೆ ಪ್ರಕಟಿಸಿತ್ತು. ಉಡುಪಿಯ ಯಡತಾಡಿ ಗ್ರಾಮದ ಅನಿತಾ ಸೇರಿ 40ಕ್ಕೂ ಅಧಿಕ ಮಹಿಳಾ ಆಕಾಂಕ್ಷಿಗಳು ನೇಮಕಾತಿ ಕೋರಿ ಅರ್ಜಿ ಸಲ್ಲಿಸಿದ್ದರು. ನಂತರ ಲಿಖಿತ ಪರೀಕ್ಷೆಗೆ ಹಾಜರಾಗಿ ಉತ್ತಮ ರ್‍ಯಾಂಕ್‌ ಗಳಿಸಿದ್ದರು. ಅಲ್ಲದೆ, 1:3 ಅನುಪಾತದ ತಾತ್ಕಾಲಿಕ ಪಟ್ಟಿಯಲ್ಲಿ ದಾಖಲೆಗಳ ಪರಿಶೀಲನೆಗೆ ಅವರು ಅರ್ಹರಾಗಿದ್ದರು. 2022ರ ನ.18ರಂದು ಪ್ರಕಟವಾದ 1:1 ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಅವರು ಸ್ಥಾನ ಪಡೆದಿರಲಿಲ್ಲ. ಇದರಿಂದ ಆ ಪಟ್ಟಿಯನ್ನು ಪ್ರಶ್ನಿಸಿ ಅನಿತಾ ಸೇರಿ 40 ಮಂದಿ ಅಧಿಕ ಮಹಿಳಾ ಆಕಾಂಕ್ಷಿಗಳು ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿ, ಮದುವೆಯಾಗಿರುವ ಅರ್ಜಿದಾರ ಮಹಿಳಾ ಅಭ್ಯರ್ಥಿಗಳು ಪತಿಯ ಆದಾಯ/ಜಾತಿ ಪ್ರಮಾಣಪತ್ರದ ಬದಲಾಗಿ ತಂದೆಯ ಆದಾಯ/ಜಾತಿ ಪ್ರಮಾಣಪತ್ರವನ್ನು ಸಲ್ಲಿಸಿರುವುದರಿಂದ ಅವರ ಹೆಸರುಗಳನ್ನು ಕೈಬಿಡಲಾಗಿದೆ ಎಂದು ತಿಳಿಸಿದ್ದರು.

ಅವರ ಅರ್ಜಿಗಳನ್ನು ಪುರಸ್ಕರಿಸಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ನ್ಯಾಯಪೀಠ, ತಾತ್ಕಾಲಿಕ ಪಟ್ಟಿಯನ್ನು ರದ್ದುಪಡಿಸಿತ್ತು. ಅರ್ಜಿದಾರ ಅಭ್ಯರ್ಥಿಗಳು ತಮ್ಮ ಪತಿಯ ಬದಲಾಗಿ ತಂದೆಯ ಆದಾಯ ಮತ್ತು ಜಾತಿ ಪ್ರಮಾಣಪತ್ರ ಸಲ್ಲಿಸಿದ್ದರೆ, ಅದನ್ನೂ ಪರಿಗಣಿಸಿ ಹೊಸದಾಗಿ ತಾತ್ಕಾಲಿಕ ಪಟ್ಟಿಯನ್ನು ಸಿದ್ಧಪಡಿಸುವಂತೆ ನಿರ್ದೇಶಿಸಿತ್ತು. ಈ ಆದೇಶದಿಂದ ನೇಮಕಾತಿಯ ಪರಿಗಣನೆಗೆ ಒಳಪಡದ ಅರ್ಥಾತ್ ಪತಿಯ ಜಾತಿ ಹಾಗೂ ಆದಾಯ ಪ್ರಮಾಣ ಪತ್ರ ಮಾತ್ರ ಸಲ್ಲಿಸಿದ್ದ ಮೇಲ್ಮನವಿದಾರರು ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು.

ಹಿಂದುಳಿದ ವರ್ಗಕ್ಕೆ ಪರಿಗಣಿಸುವಾಗ ಪತಿಯ ಆದಾಯ ಆಧಾರವಾಗಿತ್ತು. ಮಹಿಳೆಯ ಆದಾಯ ಪ್ರಮಾಣಪತ್ರಕ್ಕೆ ಪತಿಯ ಆದಾಯ ಪರಿಗಣಿಸಲಾಗುತ್ತಿತ್ತು. ರಾಜ್ಯ ಸರ್ಕಾರದ ಈ ನೀತಿಯನ್ನು ಏಕಸದಸ್ಯ ಪೀಠ ಅಮಾನ್ಯಗೊಳಿಸಿ, ಅಭ್ಯರ್ಥಿ ತಂದೆಯ ಜಾತಿ-ಆದಾಯ ಪ್ರಮಾಣಪತ್ರ ಪರಿಗಣಿಸಿ ಹೊಸದಾಗಿ ಆಯ್ಕೆ ಪಟ್ಟಿ ಪ್ರಕಟಿಸುವಂತೆ ಸೂಚಿಸಿರುವುದು ಸರಿಯಿಲ್ಲ. ಹಾಗಾಗಿ, ಏಕಸದಸ್ಯ ಪೀಠದ ಆದೇಶ ರದ್ದುಪಡಿಸಬೇಕು ಎಂದು ಕೋರಿದ್ದರು.