ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆ ನಿಷೇಧಾಜ್ಞೆ ಜಾರಿ

| Published : May 21 2024, 12:35 AM IST

ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆ ನಿಷೇಧಾಜ್ಞೆ ಜಾರಿ
Share this Article
  • FB
  • TW
  • Linkdin
  • Email

ಸಾರಾಂಶ

ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ ನಿಮಿತ್ತ ಶಾಂತ, ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸಲು ಜೂ. 1ರಿಂದ 3ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ನಲಿನ್ ಅತುಲ್ ಆದೇಶ ಹೊರಡಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಕೊಪ್ಪಳ

ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ ನಿಮಿತ್ತ ಶಾಂತ, ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸಲು ಜೂ. 1ರಿಂದ 3ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ನಲಿನ್ ಅತುಲ್ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ ಜೂ. 3ರಂದು ಜರುಗಲಿರುವ ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯ ಮತದಾನ ಅಂತ್ಯಗೊಳ್ಳುವ 48 ಗಂಟೆಗಳ ಪೂರ್ವದಲ್ಲಿ ರಾಜಕೀಯ ಪಕ್ಷಗಳ, ಅಭ್ಯರ್ಥಿಗಳ ಬಹಿರಂಗ ಪ್ರಚಾರ, ಮೆರವಣಿಗೆ ಅಂತ್ಯಗೊಳ್ಳುತ್ತವೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯಾದ್ಯಂತ ಜೂ. 1ರ ಸಂಜೆ 6 ಗಂಟೆಯಿಂದ ಜೂ. 3ರ ಮಧ್ಯರಾತ್ರಿಯವರೆಗೆ ವಿವಿಧ ಷರತ್ತಿಗೊಳಪಟ್ಟು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಜಿಲ್ಲಾ ವ್ಯಾಪ್ತಿಯಲ್ಲಿ 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ. ಚುನಾವಣಾ ಅಭ್ಯರ್ಥಿ, ಬೆಂಬಲಿಗರು ಸೇರಿ 5 ಜನರಗಿಂತ ಹೆಚ್ಚಿನ ಸಂಖ್ಯೆಯ ಜನರು ಸೇರಬಾರದು. ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ಡೊಗ್ಗ, ಚಾಕು ಅಥವಾ ದೇಹಕ್ಕೆ ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರ ತೆಗೆದುಕೊಂಡು ಹೋಗುವುದನ್ನು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ.

ಮತಗಟ್ಟೆ ಕೇಂದ್ರಗಳ 100 ಮೀಟರ್ ವ್ಯಾಪ್ತಿಯ ಒಳಗೆ ಚುನಾವಣೆ ಪ್ರಚಾರ ನಿಷೇಧಿಸಿದೆ. ಯಾವುದೇ ವ್ಯಕ್ತಿ ಬಹಿರಂಗವಾಗಿ ಮೇಲೆ ವಿವರಿಸಿದ ಮಾರಕಾಸ್ತ್ರಗಳು, ಸ್ಪೋಟಕ ವಸ್ತುಗಳು, ವಿನಾಶಕಾರಿ ವಸ್ತುಗಳು ಹಾಗೂ ಇತರ ಆಕ್ಷೇಪಾರ್ಹ ವಸ್ತು ಹೊಂದಿದ್ದು ಕಂಡು ಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಅಧಿಕಾರ ಇರುತ್ತದೆ. ಅಲ್ಲದೇ ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು.ಎಲ್ಲ ಮತಗಟ್ಟೆ ಕೇಂದ್ರಗಳ ಸುತ್ತಲಿನ 100 ಮೀಟರ್ ವ್ಯಾಪ್ತಿಯ ಸ್ಥಳ ನಿರ್ಬಂಧಿತ ಪ್ರದೇಶವಾಗಿದೆ. ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ. ಈ ಆದೇಶವು ಶವ ಸಂಸ್ಕಾರ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗೆ ಅನ್ವಯಿಸುವುದಿಲ್ಲ.

ನಿಷೇಧಾಜ್ಞೆ ಸಮಯದಲ್ಲಿ ರಾಜಕೀಯ ಪಕ್ಷಗಳು ಅಥವಾ ಅಭ್ಯರ್ಥಿಗಳು ಬಾಗಿಲಿನಿಂದ ಬಾಗಿಲಿಗೆ ಹೋಗಿ ಮತಯಾಚಿಸುವ ಸಲುವಾಗಿ ಮನೆಯಿಂದ ಮನೆಗೆ ಹೋಗುವುದು ನಿರ್ಬಂಧಿಸಿರುವುದಿಲ್ಲ. ಆದರೆ 5 ಜನರಿಗಿಂತ ಹೆಚ್ಚಿನ ಗುಂಪು ಕೂಡಿಕೊಂಡು ಮನೆಯಿಂದ ಮನೆಗೆ ಹೋಗಿ ಮತ ಯಾಚಿಸುವುದನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

ಶುಷ್ಕ ದಿನ ಘೋಷಣೆ:

ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆ ಜೂ.3ರಂದು ಮತದಾನ ನಡೆಯುವುದರಿಂದ ಕರ್ನಾಟಕ ಅಬಕಾರಿ ಪರವಾನಿಗೆಗಳ ನಿಯಮಗಳು 1967 ರ ನಿಯಮ 10 ಬಿ ಹಾಗೂ ಪ್ರಜಾಪ್ರಾತಿನಿಧ್ಯ ಕಾಯ್ದೆ 1951 ರ ಕಲಂ 135 (ಸಿ) ಅನ್ವಯ ಕೊಪ್ಪಳ ಜಿಲ್ಲೆಯಾದ್ಯಂತ ಜೂ. 1ರ ಸಂಜೆ 4ರಿಂದ ಜೂ. 3 ರ ರಾತ್ರಿ 12 ಗಂಟೆಯವರೆಗೆ ಶುಷ್ಕ ದಿನಗಳೆಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ನಲಿನ್ ಅತುಲ್ ಆದೇಶ ಹೊರಡಿಸಿದ್ದಾರೆ.

ಆದೇಶದನ್ವಯ ಶುಷ್ಕ ದಿನಗಳಂದು ಜಿಲ್ಲೆಯಾದ್ಯಂತ ಎಲ್ಲ ರೀತಿಯ ಮದ್ಯ ತಯಾರಿಕೆ, ಮದ್ಯ ಮಾರಾಟ, ಮದ್ಯ ಸಂಗ್ರಹಣೆ ಹಾಗೂ ಮದ್ಯ ಸಾಗಾಟವನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಈ ದಿನಗಳಂದು ಜಿಲ್ಲೆಯಾದ್ಯಂತ ಎಲ್ಲ ರೀತಿಯ ಮದ್ಯ ಮಾರಾಟ ಅಂಗಡಿಗಳು ಮತ್ತು ಬಾರ್‌ಗಳನ್ನು ಸಂಪೂರ್ಣವಾಗಿ ಮುಚ್ಚಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.