ಸಾರಾಂಶ
ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಪ್ರಸ್ತುತ(ಕನ್ನಡ, ಇಂಗ್ಲಿಷ್, ಹಿಂದಿ) ತ್ರಿಭಾಷೆ ಸೂತ್ರವನ್ನು ಅನುಸರಿಸಲಾಗುತ್ತಿದೆ. ಇದರಿಂದ ರಾಜ್ಯ ಪಠ್ಯ ಕ್ರಮದಲ್ಲಿ ವ್ಯಾಸಂಗ ಮಾಡುವ ಮಕ್ಕಳು ತೃತೀಯ ಭಾಷೆಯಾಗಿ ಹಿಂದಿಯನ್ನು ಕಲಿಯುವುದು ಕಡ್ಡಾಯವಾಗಿದೆ.
ರಾಣಿಬೆನ್ನೂರು: ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ದ್ವಿಭಾಷಾ ನೀತಿ ಜಾರಿಗೆ ತರುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ(ನಾರಾಯಣಗೌಡ ಬಣ) ಕಾರ್ಯಕರ್ತರು ಸೋಮವಾರ ತಾಲೂಕಿನ ಕೊಡಿಯಾಲ ಗ್ರಾಮದಲ್ಲಿ ಪಿಡಿಒ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಪ್ರಸ್ತುತ(ಕನ್ನಡ, ಇಂಗ್ಲಿಷ್, ಹಿಂದಿ) ತ್ರಿಭಾಷೆ ಸೂತ್ರವನ್ನು ಅನುಸರಿಸಲಾಗುತ್ತಿದೆ. ಇದರಿಂದ ರಾಜ್ಯ ಪಠ್ಯ ಕ್ರಮದಲ್ಲಿ ವ್ಯಾಸಂಗ ಮಾಡುವ ಮಕ್ಕಳು ತೃತೀಯ ಭಾಷೆಯಾಗಿ ಹಿಂದಿಯನ್ನು ಕಲಿಯುವುದು ಕಡ್ಡಾಯವಾಗಿದೆ. ಇದರಿಂದ 2024ರ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಹಿಂದಿ ವಿಷಯದಲ್ಲಿ ಅನೇಕ ಮಕ್ಕಳು ಅನುತ್ತೀರ್ಣರಾಗಿದ್ದಾರೆ.
2025ರಲ್ಲಿಯೂ ಹಿಂದಿ ವಿಷಯದಲ್ಲಿ ಅನುತ್ತೀರ್ಣರಾದ ಮಕ್ಕಳ ಸಂಖ್ಯೆ ಹೆಚ್ಚಾಗಿದೆ. ಬದಲಾದ ಕಾಲಘಟ್ಟದಲ್ಲಿ ವ್ಯವಹಾರಗಳಿಗೆ, ಉನ್ನತ ಶಿಕ್ಷಣ ಮತ್ತು ವೃತ್ತಿ ನಿರ್ವಹಣೆಗೆ ಇಂಗ್ಲಿಷ್ ಭಾಷೆ ಕಲಿಯುವುದು ವಿದ್ಯಾರ್ಥಿಗಳ ಭವಿಷ್ಯಕ್ಕೆ ಪೂರಕವಾಗಿದೆ. ಆದರೆ ಹಿಂದಿಯನ್ನು ಕಲಿಯುವುದರಿಂದ ರಾಜ್ಯದ ವಿದ್ಯಾರ್ಥಿಗಳಿಗೆ ಯಾವುದೇ ಲಾಭವಿಲ್ಲ.ತಮಿಳುನಾಡಿನಲ್ಲಿ 1968ರಿಂದಲೇ ದ್ವಿಭಾಷಾ ನೀತಿ ಅನುಸರಿಸಲಾಗುತ್ತಿದೆ. ಇದಲ್ಲದೆ ಉತ್ತರ ಭಾರತದ ಉತ್ತರ ಪ್ರದೇಶ ಹಾಗೂ ಬಿಹಾರ ರಾಜ್ಯಗಳಲ್ಲಿಯೂ ದ್ವಿಭಾಷಾ ನೀತಿ ಅನುಸರಿಸಲಾಗುತ್ತಿದೆ. ಆದ್ದರಿಂದ ರಾಜ್ಯದ ಶಾಲೆಗಳಲ್ಲಿ ಕನ್ನಡ ಮತ್ತು ಇಂಗ್ಲಿಷ್ ಭಾಷೆ ಒಳಗೊಂಡ ದ್ವಿಭಾಷಾ ನೀತಿ ಜಾರಿಗೆ ತರಬೇಕು.
ತೃತೀಯ ಭಾಷೆಯನ್ನು ಪಠ್ಯಕ್ರಮದಿಂದ ಹೊರಗಿಡಬೇಕು. ರಾಜ್ಯ ಹಾಗೂ ಸಿಬಿಎಸ್‌ಸಿ ಮತ್ತು ಐಸಿಎಸ್‌ಇ ಶಾಲೆಗಳಿಗೆ ಏಕರೂಪದ ಶಿಕ್ಷಣ ನೀತಿ ಜಾರಿಗೊಳಿಸಬೇಕು. ಸಿಬಿಎಸ್‌ಸಿ, ಐಸಿಎಸ್‌ಇ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಕನ್ನಡವನ್ನು ಕಡ್ಡಾಯಗೊಳಿಸಬೇಕು ಹಾಗೂ ಕನ್ನಡ ಮಾಧ್ಯಮ ಶಾಲೆಗಳನ್ನು ಬಲಗೊಳಿಸಿ ಉತ್ತಮ ಗುಣಮಟ್ಟದ ಇಂಗ್ಲಿಷ್ ಶಿಕ್ಷಣ ನೀಡುವಂತೆ ಮನವಿಯಲ್ಲಿ ಆಗ್ರಹಿಸಲಾಗಿದೆ. ತಾಲೂಕು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಕೊಟ್ರೇಶ ಗುತ್ತೂರ, ಚಂದ್ರಕಲಾ ಹೆಗ್ಗಪ್ಪನವರ, ಅನಿಲಕುಮಾರ ಮಾಳಗೇರ, ಜಫಿಯುಲ್ಲಾ ಕೊತ್ವಾಲ, ಲತಾ ಜಿ.ಎಂ., ರೇಖಾ, ಅಕ್ಕಮ್ಮ, ಶಿವಕುಮಾರ ಹೆಗ್ಗಪ್ಪನವರ, ಸಾವಿತ್ರಮ್ಮ, ಶೈಲಾ, ಅನುಷಾ ಚವ್ಹಾಣ, ಋತುಜಾಬಿ ಬಡಗಿ, ನಂದಿನಿ ಮತ್ತಿತರರಿದ್ದರು.