ಪರೀಕ್ಷೆಯು ಎರಡು ಅವಧಿಗಳಲ್ಲಿ ನಡೆಯಿತು. ಬೆಳಗ್ಗೆ 10ರಿಂದ ಮಧ್ಯಾಹ್ನ 12ರ ವರೆಗೆ ಮೊದಲ ಪತ್ರಿಕೆ ಹಾಗೂ ಮಧ್ಯಾಹ್ನ 2ರಿಂದ ಸಂಜೆ 4ರ ವರೆಗೆ ಎರಡನೇ ಪತ್ರಿಕೆಯ ಪರೀಕ್ಷೆ ನಡೆಸಲಾಯಿತು.
ಕಾರವಾರ: ಕರ್ನಾಟಕ ಲೋಕಸೇವಾ ಆಯೋಗದ(ಕೆಪಿಎಸ್ಸಿ) ವತಿಯಿಂದ 319 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗಾಗಿ ಭಾನುವಾರ ಜಿಲ್ಲೆಯಲ್ಲಿ ನಡೆದ ಪರೀಕ್ಷೆ ಯಾವುದೇ ಗೊಂದಲಗಳಿಲ್ಲದೆ ಸುಸೂತ್ರವಾಗಿ ಮುಕ್ತಾಯಗೊಂಡಿತು.
ಪರೀಕ್ಷಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಪಾರದರ್ಶಕವಾಗಿ ಪರೀಕ್ಷೆ ನಡೆಸಲಾಯಿತು. ಜಿಲ್ಲೆಯಲ್ಲಿ ಕಾರವಾರದ ಸರ್ಕಾರಿ ಪದವಿಪೂರ್ವ ಕಾಲೇಜು, ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜು(ಸ್ವಾಯತ್ತ), ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಹಾಗೂ ಮಾಜಾಳಿಯ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಸೇರಿದಂತೆ ಒಟ್ಟು 4 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿತ್ತು. ಈ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಒಟ್ಟು 1,970 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು.ಪರೀಕ್ಷೆಯು ಎರಡು ಅವಧಿಗಳಲ್ಲಿ ನಡೆಯಿತು. ಬೆಳಗ್ಗೆ 10ರಿಂದ ಮಧ್ಯಾಹ್ನ 12ರ ವರೆಗೆ ಮೊದಲ ಪತ್ರಿಕೆ ಹಾಗೂ ಮಧ್ಯಾಹ್ನ 2ರಿಂದ ಸಂಜೆ 4ರ ವರೆಗೆ ಎರಡನೇ ಪತ್ರಿಕೆಯ ಪರೀಕ್ಷೆ ನಡೆಸಲಾಯಿತು. ಮೊದಲ ಅವಧಿಯಲ್ಲಿ 990 ಅಭ್ಯರ್ಥಿಗಳು ಹಾಜರಾಗಿದ್ದು, 980 ಮಂದಿ ಗೈರಾಗಿದ್ದರು. ಎರಡನೇ ಅವಧಿಯಲ್ಲಿ 984 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದು, 986 ಮಂದಿ ಗೈರಾಗಿದ್ದರು.ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಈ ಬಾರಿ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಪ್ರತಿ ಪರೀಕ್ಷಾ ಕೊಠಡಿಗೆ ಇಬ್ಬರು ಮೇಲ್ವಿಚಾರಕರನ್ನು ನೇಮಿಸಲಾಗಿತ್ತು. ಸಿಸಿ ಟಿವಿ ಕಣ್ಗಾವಲು, ವೆಬ್ಕಾಸ್ಟಿಂಗ್, ಮೊಬೈಲ್ ಜಾಮರ್ ಹಾಗೂ ಅಭ್ಯರ್ಥಿಗಳ ತಪಾಸಣೆಗೆ ವಿಶೇಷ ವ್ಯವಸ್ಥೆ ಮಾಡಲಾಗಿತ್ತು.ಜಿಲ್ಲಾಧಿಕಾರಿ ಹರ್ಷಲ್ ಬೊಯರ್ ಅವರು ಕಾರವಾರದ ಸರ್ಕಾರಿ ಪದವಿಪೂರ್ವ ಕಾಲೇಜು ಹಾಗೂ ಮಾಜಾಳಿಯ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪರೀಕ್ಷಾ ಕೇಂದ್ರಗಳ ಸಿಸಿ ಟಿವಿ ದೃಶ್ಯಾವಳಿಗಳ ಮೇಲ್ವಿಚಾರಣೆಗಾಗಿ ಸ್ಥಾಪಿಸಲಾಗಿದ್ದ ವೆಬ್ಕಾಸ್ಟಿಂಗ್ ಕೇಂದ್ರಕ್ಕೂ ಭೇಟಿ ನೀಡಿ ಪರಿಶೀಲನೆ ನಡೆಸಿದರು.