ಕಸ್ತೂರಿರಂಗನ್ ವರದಿ ಜಾರಿ ವಿಚಾರದಲ್ಲಿ ರಾಜ್ಯದ ಬಿಜೆಪಿ ನಾಯಕರು ಇಂದು ದೊಡ್ಡ ದೊಡ್ಡ ಮಾತುಗಳನ್ನು ಆಡುತ್ತಿದ್ದಾರೆ. ಮಲೆನಾಡಿನ ರೈತರ ಪರವಾಗಿ ನಾವಿದ್ದೇವೆ ಎಂದು ಹೇಳುತ್ತಿದ್ದಾರೆ. ಹಾಗಾದರೆ ಕೇಂದ್ರ ಸರ್ಕಾರ ಒಂದರ ನಂತರ ಒಂದರಂತೆ ಈ ವರದಿಯ ಜಾರಿಗೆ ಸಂಬಂಧಿಸಿದ ಕರಡು ಅಧಿಸೂಚನೆ ಹೊರಡಿಸುತ್ತಿರುವುದಾದರೂ ಏಕೆ? ಈ ವಿಷಯದಲ್ಲಿ ಅವರ ಪಕ್ಷವೇ ಕೇಂದ್ರದಲ್ಲಿ ಅಧಿಕಾರದಲ್ಲಿರುವುದರಿಂದ ಕೇಂದ್ರ ಸರ್ಕಾರದ ನಿಲುವೇನು ಎಂದು ಮೊದಲು ಸ್ಪಷ್ಟಪಡಿಸಲಿ ಎಂದು ಸಚಿವ ಮಧು ಬಂಗಾರಪ್ಪ ಸವಾಲೆಸೆದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಕಸ್ತೂರಿರಂಗನ್ ವರದಿ ಜಾರಿ ವಿಚಾರದಲ್ಲಿ ರಾಜ್ಯದ ಬಿಜೆಪಿ ನಾಯಕರು ಇಂದು ದೊಡ್ಡ ದೊಡ್ಡ ಮಾತುಗಳನ್ನು ಆಡುತ್ತಿದ್ದಾರೆ. ಮಲೆನಾಡಿನ ರೈತರ ಪರವಾಗಿ ನಾವಿದ್ದೇವೆ ಎಂದು ಹೇಳುತ್ತಿದ್ದಾರೆ. ಹಾಗಾದರೆ ಕೇಂದ್ರ ಸರ್ಕಾರ ಒಂದರ ನಂತರ ಒಂದರಂತೆ ಈ ವರದಿಯ ಜಾರಿಗೆ ಸಂಬಂಧಿಸಿದ ಕರಡು ಅಧಿಸೂಚನೆ ಹೊರಡಿಸುತ್ತಿರುವುದಾದರೂ ಏಕೆ? ಈ ವಿಷಯದಲ್ಲಿ ಅವರ ಪಕ್ಷವೇ ಕೇಂದ್ರದಲ್ಲಿ ಅಧಿಕಾರದಲ್ಲಿರುವುದರಿಂದ ಕೇಂದ್ರ ಸರ್ಕಾರದ ನಿಲುವೇನು ಎಂದು ಮೊದಲು ಸ್ಪಷ್ಟಪಡಿಸಲಿ ಎಂದು ಸಚಿವ ಮಧು ಬಂಗಾರಪ್ಪ ಸವಾಲೆಸೆದರು.

ಸೋಮವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಪರಿಸರದೊಂದಿಗೆ ಬದುಕುತ್ತಿರುವ ಮಲೆನಾಡಿನ ಜನರನ್ನೇ ಸಂಕಷ್ಟಕ್ಕೆ ಸಿಲುಕಿಸುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಬಿಜೆಪಿ ನಾಯಕರು ನಾವು ಮಲೆನಾಡಿನ ರೈತರ ಪರವಾಗಿ ಮಾತನಾಡುತ್ತಿದ್ದೇವೆ ಎಂದು ಹೇಳುತ್ತಿದ್ದಾರೆ. ಕಸ್ತೂರಿ ರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಪ್ರತಿಭಟನೆ ಮಾಡುತ್ತಿದ್ದಾರೆ. ಆದರೆ ಈ ವರದಿಯ ಜಾರಿಗೆ ನೀವು ಏಕೆ ಕರಡು ಅಧಿಸೂಚನೆ ಹೊರಡಿಸುತ್ತಿದ್ದೀರಿ ಎಂದು ಪಕ್ಷದ ಕೇಂದ್ರ ನಾಯಕರನ್ನು ಪ್ರಶ್ನಿಸುವ ಧೈರ್ಯ ಅವರಿಗಿಲ್ಲ ಎಂದು ಕುಟುಕಿದರು.

2014ರ ಆಗಸ್ಟ್ 27 ರಂದು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಸ್ತೂರಿ ರಂಗನ್ ವರದಿಯನ್ನು ಜಾರಿಗೆ ತರುತ್ತೇವೆ ಎಂದು ಸುಪ್ರೀಂ ಕೋರ್ಟ್‌ನ ಹಸಿರು ನ್ಯಾಯಾಧಿಕರಣಕ್ಕೆ ಅಫಿಡವಿಟ್ ಸಲ್ಲಿಸಿದ್ದು ಏಕೆ? ಇಂದು ಮಲೆನಾಡಿನ ಜನರ ಮುಂದೆ ಮೊಸಳೆ ಕಣ್ಣೀರು ಹಾಕುವವರು ಅಂದು ಏಕೆ ಮಾತನಾಡಲಿಲ್ಲ ಎಂದು ಪ್ರಶ್ನಿಸಿದ ಅವರು, ಕಸ್ತೂರಿ ರಂಗನ್ ವರದಿ ಕರಡು ಅಧಿಸೂಚನೆಯನ್ನು ನಾವು ಆರು ಬಾರಿಯೂ ಸ್ಪಷ್ಟವಾಗಿ ತಿರಸ್ಕರಿಸಿದ್ದೇವೆ ಎಂದರು.

ಈ ಸಂಬಂಧ ಚರ್ಚಿಸಲೆಂದೇ ವಿಶೇಷ ಅಧಿವೇಶನ ಕರೆಯುವ ತೀರ್ಮಾನವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೆಗೆದುಕೊಂಡಿದ್ದಾರೆ. ಯಾವ ಕಾರಣಕ್ಕೂ ಈ ವರದಿ ಜಾರಿಗೆ ಅವಕಾಶ ನೀಡಬಾರದು, ಬಿಜೆಪಿಯವರು, ಕೇಂದ್ರ ಸರ್ಕಾರದವರು ಏನು ಬೇಕಾದರೂ ಮಾಡಿಕೊಳ್ಳಲಿ, ಇದಕ್ಕೆ ನಾವೇ ಬೇಕಾದರೂ ನ್ಯಾಯಾಲಯಕ್ಕೆ ಹೋಗಿ ಮಲೆನಾಡಿನ ಜನರನ್ನು ರಕ್ಷಿಸೋಣ ಎಂದು ಅವರು ಹೇಳಿದ್ದಾರೆ ಎಂದರು.

ಸಂಸದರು ಏನು ಮಾಡುತ್ತಿದ್ದರು?: ಕಸ್ತೂರಿ ರಂಗನ್ ವರದಿ ಕುರಿತು 2016ರ ಆಗಸ್ಟ್ 11 ರಂದು ಕೇಂದ್ರ ಸರ್ಕಾರ ಕರೆದಿದ್ದ ಮಹತ್ವದ ಸಭೆಗೆ ಶಿವಮೊಗ್ಗದ ಸಂಸದ ಬಿ.ವೈ. ರಾಘವೇಂದ್ರ ಹಾಗೂ ಅಂದಿನ ಉಡುಪಿ-ಚಿಕ್ಕಮಗಳೂರು ಸಂಸದೆಯಾಗಿದ್ದ ಶೋಭಾ ಕರಂದ್ಲಾಜೆ ಅವರು ಭಾಗವಹಿಸದೇ ಇದ್ದಿದ್ದನ್ನು ಮಧು ಬಂಗಾರಪ್ಪ ಪ್ರಶ್ನಿಸಿದರು. ಮಲೆನಾಡಿನ ಎರಡು ಪ್ರಮುಖ ಜಿಲ್ಲೆಗಳ ಜನರ ಬದುಕಿನ ಮೇಲೆ ಪರಿಣಾಮ ಬೀರುವ ಇಂತಹ ಮಹತ್ವದ ವಿಚಾರದ ಸಭೆಗೆ ಸಂಸದರು ಹಾಜರಾಗದೇ ಇದ್ದರೆ ಹೇಗೆ? ಅವರಿಗೆ ಅಂದು ಬೇರೆ ಮಹತ್ವದ ಕೆಲಸ ಏನಿತ್ತು? ಇವರು ಸಭೆಗೆ ಹೋಗದೆ ಬೇಜವಾಬ್ದಾರಿಯಿಂದ ನಡೆದುಕೊಂಡರೆ, ಮಲೆನಾಡಿನ ಜನರ ಸಮಸ್ಯೆಯನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರುವವರಾದರೂ ಯಾರು ಎಂದು ಕೇಳಿದರು.

ಹಳ್ಳಿಗಳ ಸಂಖ್ಯೆ ಹೆಚ್ಚಾಗಿದ್ದು ಹೇಗೆ?: ಮೊದಲ ಆರು ಅಧಿಸೂಚನೆಗಳಲ್ಲಿ ತೀರ್ಥಹಳ್ಳಿ ತಾಲೂಕಿನ 139 ಗ್ರಾಮಗಳ ಪಟ್ಟಿಯನ್ನು ಪ್ರಸ್ತಾಪಿಸಲಾಗಿತ್ತು. ಇದನ್ನು ತೀರ್ಥಹಳ್ಳಿಯ ಜನರು ಹಾಗೂ ಕರ್ನಾಟಕ ಸರ್ಕಾರ ವಿರೋಧಿಸಿತ್ತು. ಆದರೆ ಇದೀಗ ಅಂತಿಮ ಅಧಿಸೂಚನೆಯ ಹೆಸರಿನಲ್ಲಿ ತೀರ್ಥಹಳ್ಳಿ ತಾಲೂಕಿನ ಗ್ರಾಮಗಳ ಸಂಖ್ಯೆಯನ್ನು 154ಕ್ಕೆ ಹೆಚ್ಚಿಸುವ ಪ್ರಯತ್ನ ನಡೆದಿದೆ. ಈ ಬಗ್ಗೆ ಸ್ಥಳೀಯ ಶಾಸಕ ಆರಗ ಜ್ಞಾನೇಂದ್ರ ಅವರು ಏನು ಹೇಳುತ್ತಾರೆ ಎಂಬ ಕುತೂಹಲವಿದೆ ಎಂದರು. ಕಸ್ತೂರಿರಂಗನ್ ವರದಿ ಜಾರಿ ವಿರುದ್ಧ ನಾವು ನಿರಂತರವಾಗಿ ಹೋರಾಟ ಮಾಡಿಕೊಂಡು ಬಂದಿದ್ದು, ಈ ಸಂಬಂಧ ಈಗ ತೀರ್ಥಹಳ್ಳಿಯಲ್ಲಿ ಪಾದಯಾತ್ರೆ ಮಾಡುತ್ತಿದ್ದೇವೆ ಎಂದರು.

ಗೋಷ್ಠಿಯಲ್ಲಿ ಮಾಜಿ ಸಂಸದ ಆಯನೂರು ಮಂಜುನಾಥ್, ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಅಧ್ಯಕ್ಷ ರಮೇಶ್ ಶೆಟ್ಟಿ, ಜವಳಿ ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಚೇತನ್ ಗೌಡ, ಭೋವಿ ನಿಗಮದ ಮಾಜಿ ಅಧ್ಯಕ್ಷರಾದ ಎನ್.ರವಿಕುಮಾರ್, ಶಿವಮೊಗ್ಗ ಮಹಾನಗರ ಪಾಲಿಕೆ ಮಾಜಿ ಸದಸ್ಯ ಎಚ್.ಸಿ ಯೋಗೇಶ್, ಹಿಂದುಳಿದ ವರ್ಗಗಳ ರಾಜ್ಯ ಸಂಯೋಜಕ ಜಿ.ಡಿ ಮಂಜುನಾಥ್‌, ಶಿವಮೊಗ್ಗ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲೀಮ್ ಪಾಷಾ ಹಾಜರಿದ್ದರು.

ಬಂಗಾರಪ್ಪ ಅವರ ಹಾದಿಯಲ್ಲಿ ಮುಖ್ಯಮಂತ್ರಿ: ಹಿಂದೆ ನಮ್ಮ ತಂದೆ ಬಂಗಾರಪ್ಪ ಅವರು ಕಾವೇರಿ ನೀರು ವಿಚಾರವಾಗಿ ವಿಶೇಷ ಅಧಿವೇಶನ ಕರೆದಿದ್ದರು. ಇಂದು ನಾನು ಬಂಗಾರಪ್ಪ ಅವರ ಶಿಷ್ಯ ಎಂದು ಹೆಮ್ಮೆಯಿಂದ ಹೇಳಿಕೊಳ್ಳುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅವರದ್ದೇ ಹಾದಿಯಲ್ಲಿ ನಡೆದು ಕಸ್ತೂರಿ ರಂಗನ್ ವಿಚಾರವಾಗಿ ವಿಶೇಷ ಅಧಿವೇಶನ ಕರೆದಿದ್ದಾರೆ. ಇದಕ್ಕಾಗಿ ಮುಖ್ಯಮಂತ್ರಿಗಳಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಹೇಳಿದರು. ಸಿದ್ದರಾಮಯ್ಯ ಅವರೊಂದಿಗೆ ಕೆಲಸ ಮಾಡಿದ್ದು ನನ್ನ ಭಾಗ್ಯ. ನಮ್ಮ ತಂದೆಯವರ ಕೈಯಲ್ಲಿ ಸಚಿವರಾಗಿ ಡಿ.ಕೆ. ಶಿವಕುಮಾರ್ ಅವರು ಕೆಲಸ ಮಾಡಿದ್ದರು. ಇಂದು ನಾನು ಡಿ.ಕೆ. ಶಿವಕುಮಾರ್ ಅವರ ಅಡಿಯಲ್ಲಿ ಕೆಲಸ ಮಾಡುತ್ತಿರುವುದು ಹೆಮ್ಮೆಯ ಸಂಗತಿ ಎಂದು ತಿಳಿಸಿದರು.