ಇ-ಆಫೀಸ್ ತಂತ್ರಾಂಶದ ಮೂಲಕ ಕಡತ ವಿಲೇವಾರಿ ಮಾಡುವಂತೆ ಕಟಾರಿಯಾ ಸೂಚನೆ

| Published : Jan 25 2024, 02:09 AM IST

ಸಾರಾಂಶ

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲೆಯ ಸಮಗ್ರ ಅಭಿವೃದ್ಧಿ ಕುರಿತ ಪ್ರಗತಿ ಪರಿಶೀಲನೆ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯ ಇ-ಆಫೀಸ್ ತಂತ್ರಾಂಶದ ಮೂಲಕ ಕಡತ ವಿಲೇವಾರಿ ಮಾಡುವಂತೆ ಸೂಚಿಸಿದರು.

- ಜಿಲ್ಲಾ ಪಂಚಾಯ್ತಿಯಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿ ಕುರಿತ ಪ್ರಗತಿ ಪರಿಶೀಲನಾ ಸಭೆ

----

- ಜಿಲ್ಲೆಯ ಎಲ್ಲಾ ಇಲಾಖೆಗಳ ಅಧಿಕಾರಿಗಳು ಇ-ಆಫೀಸ್ ಮೂಲಕ ಪತ್ರ ವ್ಯವಹಾರ ನಡೆಸಬೇಕು

- ಇ-ಆಫೀಸ್ ಬಳಕೆ ಮಾಡದೇ ಭೌತಿಕ ಕಡತಗಳನ್ನು ತೆರೆಯುವ ಇಲಾಖೆಗಳ ಅಧಿಕಾರಿಗಳ ವಿರುದ್ಧ ಕ್ರಮ

- ಫ್ರೂಟ್ ತಂತ್ರಾಂಶದಲ್ಲಿ ಜಿಲ್ಲೆಯಲ್ಲಿ ಶೇ. 80 ರಷ್ಟು ನೋಂದಣಿಯಾಗಿದ್ದು, ಶೇ. 95 ರಷ್ಟು ಗುರಿ ಸಾಧಿಸಲು ಸೂಚನೆ

- ವಿವಿಧ ಕಚೇರಿಗಳಲ್ಲಿ ದಲ್ಲಾಳಿಗಳ ಹಾವಳಿ ಮಿತಿ ಮೀರಿದ್ದು, ಅದಕ್ಕೆ ಕಡಿವಾಣ ಹಾಕಲು ತಾಕೀತುಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಇ-ಆಫೀಸ್ ತಂತ್ರಾಂಶದ ಮೂಲಕ ಕಡತ ವಿಲೇವಾರಿ ಮಾಡುವಂತೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲೆಯ ಸಮಗ್ರ ಅಭಿವೃದ್ಧಿ ಕುರಿತ ಪ್ರಗತಿ ಪರಿಶೀಲನೆ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಎಲ್ಲಾ ಇಲಾಖೆಗಳ ಅಧಿಕಾರಿಗಳು ಇ-ಆಫೀಸ್ ಮೂಲಕವೇ ಪತ್ರ ವ್ಯವಹಾರ ಮಾಡಬೇಕು. ಸಾರ್ವಜನಿಕರಿಂದ ಸ್ವೀಕರಿಸಿದ ಅರ್ಜಿಗಳನ್ನು ಇ-ಆಫೀಸ್ ಮೂಲಕವೇ ಕಡತ ತೆರೆಯಬೇಕು. ನಿಗಧಿತ ಸಮಯದಲ್ಲಿ ಅರ್ಜಿಯನ್ನು ವಿಲೇವಾರಿ ಮಾಡಬೇಕು. ಇ-ಆಫೀಸ್ ಬಳಕೆ ಮಾಡದೇ ಭೌತಿಕ ಕಡತಗಳನ್ನು ತೆರೆಯುವ ಇಲಾಖೆಗಳ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ತಂತ್ರಾಂಶ ಬಳಕೆ ಕುರಿತು ಆಗಾಗ್ಗೆ ವರದಿ ಸಲ್ಲಿಸುವಂತೆ ಹೇಳಿದರು.

ತಾಲೂಕು ಕಚೇರಿಗಳ ಆಧುನೀಕರಣ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದ್ದು, ಮೊದಲ ಹಂತದಲ್ಲಿ ಎಲ್ಲ ಹಳೆಯ ಕಡತಗಳ ಸ್ಕ್ಯಾನಿಂಗ್ ಮತ್ತು ಡಿಜಿಟಲೀಕರಣ ಮಾಡಲಾಗುವುದು ಇಲಾಖೆ ಪೋರ್ಟಲ್‌ನಿಂದ ಆ ದಾಖಲೆಗಳನ್ನು ಸಾರ್ವಜನಿಕರು ನೇರವಾಗಿ ಪಡೆಯಲು ಅವಕಾಶ ಕಲ್ಪಿಸಲಾಗುವುದು ಎಂದರು.

ಸಬ್ ರಿಜಿಸ್ಟರ್ ಕಚೇರಿ ಖಾಸಗಿ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇನ್ನು 10 ದಿವಸದೊಳಗೆ ತಾಲೂಕು ಕಚೇರಿಗೆ ವರ್ಗಾಯಿಸುವಂತೆ ಸೂಚಿಸಿದ ಅವರು, ಸಬ್ ರಿಜಿಸ್ಟರ್ ಕಚೇರಿ, ತಹಸೀಲ್ದಾರ್ ಕಚೇರಿ ಹಾಗೂ ಆರ್.ಟಿ.ಒ ಕಚೇರಿಗಳಲ್ಲಿ ದಲ್ಲಾಳಿಗಳ ಹಾವಳಿ ಮಿತಿ ಮೀರಿದೆಯೆಂದು ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ದಲ್ಲಾಳಿಗಳಿಗೆ ಕಡಿವಾಣ ಹಾಕುವಂತೆ ತಿಳಿಸಿದರಲ್ಲದೆ ಸರ್ಕಾರಿ ಕಚೇರಿಗಳಲ್ಲಿ ಸ್ವಚ್ಛತೆ ಕಾಪಾಡುವಂತೆ ತಿಳಿಸಿದರು.

ಫ್ರೂಟ್ ತಂತ್ರಾಂಶದಲ್ಲಿ ಜಿಲ್ಲೆಯಲ್ಲಿ ಶೇ. 80 ರಷ್ಟು ನೋಂದಣಿಯಾಗಿದ್ದು, ನೋಂದಣಿಯಾಗದ ರೈತರನ್ನು ಗುರುತಿಸಿ ನೋಂದಾಯಿಸಲು ಕ್ರಮ ವಹಿಸುವಂತೆ ಹೇಳಿದ ಅವರು, ಶೇ. 95 ರಷ್ಟು ಗುರಿ ಸಾಧಿಸುವಂತೆ ಹೇಳಿದರು.

ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಹಾಗೂ ಜಾನುವಾರುಗಳಿಗೆ ಯಾವುದೇ ರೀತಿ ಮೇವಿನ ಕೊರತೆಯಾಗದಂತೆ ಮುಂಜಾಗ್ರತೆ ವಹಿಸಬೇಕು. ನೀರಿನ ಸಮಸ್ಯೆ ಕಂಡು ಬಂದ ಗ್ರಾಮಗಳಲ್ಲಿ ಅಲ್ಲಿನ ಖಾಸಗಿ ಬೋರ್ ವೆಲ್‌ಗಳ ಮೂಲಕ ನೀರು ಪೂರೈಕೆಗೆ ಕ್ರಮವಹಿಸುವಂತೆ ತಿಳಿಸಿದ ಅವರು, ಫಾರಂ 50, 53 ಅರ್ಜಿಗಳನ್ನು ಡಿಜಿಟಲಿಕರಣ ಮಾಡುವಂತೆ ಹೇಳಿದರಲ್ಲದೆ ಜಿಲ್ಲೆಯಲ್ಲಿನ ಕೆರೆಗಳ ಸರ್ವೆ ನಡೆಸಿ ಒತ್ತುವರಿಯಾಗಿರುವ ಕೆರೆಗಳ ಒತ್ತುವರಿ ತೆರವುಗೊಳಿಸಬೇಕು. ಸಾರ್ವಜನಿಕ ಸದುದ್ದೇಶಕ್ಕೆ ಮೀಸಲಾಗಿರುವ ಭೂಮಿ ಸಂರಕ್ಷಿಸಲು ಕ್ರಮ ವಹಿಸುವಂತೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಮೀನಾ ನಾಗರಾಜ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗೋಪಾಲಕೃಷ್ಣ, ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ, ಉಪ ವಿಭಾಗಾಧಿಕಾರಿಗಳಾದ ದಲ್ಜಿತ್ ಕುಮಾರ್, ಡಾ. ಕಾಂತರಾಜು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.ಪೋಟೋ ಫೈಲ್‌ ನೇಮ್‌ 24 ಕೆಸಿಕೆಎಂ 3

ಚಿಕ್ಕಮಗಳೂರಿನ ಜಿಪಂ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದರ್‌ ಕುಮಾರ್‌ ಕಟಾರಿಯಾ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಜಿಲ್ಲಾಧಿಕಾರಿ ಮೀನಾ ನಾಗರಾಜ್‌, ಸಿಇಒ ಡಾ. ಗೋಪಾಲಕೃಷ್ಣ, ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ ಇದ್ದರು.