ಸಾರಾಂಶ
ಕೆಪಿಎಸ್ಸಿ ಪರೀಕ್ಷೆ ಪೂರ್ವಸಿದ್ಧತಾ ಸಭೆಯಲ್ಲಿ ಜಿಲ್ಲಾಧಿಕಾರಿ । ಎಲ್ಲ ಕೊಠಡಿಗಳಿಗೆ ಸಿಸಿ ಟಿವಿ ಅಳವಡಿಕೆ ಸೂಚನೆಕನ್ನಡಪ್ರಭವಾರ್ತೆ, ಚಿತ್ರದುರ್ಗಡಿಸೆಂಬರ್ 16 ಮತ್ತು 17ರಂದು ಗ್ರೂಪ್-ಸಿ ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‍ಸಿ) ವತಿಯಿಂದ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕಾರ್ಯವನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯಾಪ್ರಭು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಕೆಪಿಎಸ್‍ಸಿ ಗ್ರೂಪ್-ಸಿ ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರೀಕ್ಷಾ ಮೇಲ್ವಿಚಾರಣೆ ಹೊಣೆ ಹೊತ್ತ ಅಧಿಕಾರಿಗಲು ಓಎಂಆರ್ ನಿರ್ವಹಣೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು. ಎಲ್ಲಿಯೂ ಲೋಪಗಳಾಗದಂತೆ ಗಮನ ಹರಿಸಬೇಕೆಂದರು.ಮೊಬೈಲ್, ಬ್ಲೂಟೂತ್ ಮತ್ತು ಆಧುನಿಕ ಸಂವಹನದ ಉಪಕರಣ ಬಳಸಿ ಪರೀಕ್ಷಾ ಅಕ್ರಮ ಮಾಡುವುದನ್ನು ತಡೆಯಲು ಪರೀಕ್ಷಾ ಕೇಂದ್ರಗಳಲ್ಲಿ ಜಾಮರ್ ಹಾಗೂ ಪರೀಕ್ಷಾ ಕೇಂದ್ರದ ಎಲ್ಲಾ ಕೊಠಡಿಗಳಲ್ಲಿ ಸಿಸಿಟಿವಿ ಅಳವಡಿಸಲಾಗುವುದು. ಪರೀಕ್ಷಾ ಸಂಬಂಧ ಕೆಪಿಎಸ್‍ಸಿ ನೀಡಿರುವ ಮಾರ್ಗಸೂಚಿಗಳನ್ನು ತಪ್ಪದೇ ಪಾಲನೆ ಮಾಡಬೇಕು ಎಂದು ತಾಕೀತು ಮಾಡಿದರು.
ಗ್ರೂಪ್-ಸಿ ಹುದ್ದೆಗಳ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಯು ಡಿಸೆಂಬರ್ 16ರಂದು ಮಧ್ಯಾಹ್ನ 2 ರಿಂದ ಸಂಜೆ 4 ರವರೆಗೆ ಕನ್ನಡ ಭಾಷಾ ಪರೀಕ್ಷೆ ಚಿತ್ರದುರ್ಗ ನಗರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆಯಲಿದೆ. 8 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಡಿಸೆಂಬರ್ 17ರಂದು ಬೆಳಗ್ಗೆ 10 ರಿಂದ 11.30 ರವರೆಗೆ ಸಾಮಾನ್ಯ ಜ್ಞಾನದ ಪರೀಕ್ಷೆಯು ಚಿತ್ರದುರ್ಗ ನಗರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆಯಲಿದ್ದು, 744 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇದೇ ದಿನ ಮಧ್ಯಾಹ್ನ 2 ರಿಂದ ಸಂಜೆ 4 ರವರೆಗೆ ಸಾಮಾನ್ಯ ಕನ್ನಡ, ಸಾಮಾನ್ಯ ಇಂಗ್ಲಿಷ್, ಕಂಪ್ಯೂಟರ್ ಜ್ಞಾನ ವಿಷಯಗಳ ಪರೀಕ್ಷೆಯು ಚಿತ್ರದುರ್ಗ ನಗರದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆಯಲಿದ್ದು, 481 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದು, ಗ್ರೂಪ್-ಸಿ ಹುದ್ದೆಗಳಿಗೆ ಒಟ್ಟು 1225 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದರು.ಪರೀಕ್ಷಾ ಕೇಂದ್ರಕ್ಕೆ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಬೇಕು. ಇದಕ್ಕೆ ಪೂರಕವಾಗಿ ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗುವುದು. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುಂಚೆ ಸೂಕ್ತವಾಗಿ ತಪಾಸಣೆ ನಡೆಸಬೇಕು. ಖಜಾನೆ ಅಧಿಕಾರಿ, ಮಾರ್ಗಾಧಿಕಾರಿಗಳು, ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಹಾಗೂ ಕೊಠಡಿ ಮೇಲ್ವಿಚಾರಕರು ಪ್ರಶ್ನೆಪತ್ರಿಕೆ ಹಾಗೂ ಓಎಂಆರ್ ನಿರ್ವಹಣೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು ಎಂದರು.
ಪರೀಕ್ಷಾ ಕಾರ್ಯ ಮುಗಿದ ನಂತರ ಬೆಳಗಿನ ಅವಧಿ ಉತ್ತರ ಪತ್ರಿಕೆಗಳನ್ನು ಮತ್ತು ಮಧ್ಯಾಹ್ನ ಅವಧಿಯ ಉತ್ತರ ಪತ್ರಿಕೆಗಳ ಬಂಡಲ್‍ಗಳನ್ನು ಆಯಾ ಅಧೀವೇಶನದ ಪರೀಕ್ಷೆ ಮುಗಿದ ನಂತರ ಅಂಚೆ ಕಚೇರಿಯ ಮೂಲಕ ಲೋಕಸೇವಾ ಆಯೋಗಕ್ಕೆ ಸುರಕ್ಷಿತವಾಗಿ ತಲುಪಿಸಬೇಕು ಎಂದು ಅಂಚೆ ಇಲಾಖೆ ಅಧಿಕಾರಿಗಳಿಗೆ ದಿವ್ಯಾಪ್ರಭು ಸೂಚಿಸಿದರು.ಅಪರ ಜಿಲ್ಲಾಧಿಕಾರಿ ಬಿ.ಟಿ ಕುಮಾರಸ್ವಾಮಿ ಮಾತನಾಡಿ, ಪರೀಕ್ಷಾ ಕೇಂದ್ರದಲ್ಲಿ ಹೆಲ್ತ್ ಸ್ಕ್ರೀನಿಂಗ್ ಕೌಂಟರ್ ಸ್ಥಾಪಿಸಿ, ಆರೋಗ್ಯ ತಪಾಸಣೆಗಾಗಿ ಆರೋಗ್ಯ ಸಹಾಯಕರನ್ನು ನಿಯೋಜಿಸಬೇಕು. ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು ಜಾಮರ್, ಸಿಸಿ ಟಿವಿ ಕ್ಯಾಮೆರಾಗಳು ಸುಸ್ಥಿತಿಯಲ್ಲಿ ಕಾರ್ಯನಿರ್ವಹಿಸುತ್ತಿವೆಯೇ ಎಂಬುದನ್ನು ಖಾತ್ರಿ ಪಡಿಸಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ರವಿಶಂಕರ್ ರೆಡ್ಡಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಪುಟ್ಟಸ್ವಾಮಿ, ಪರೀಕ್ಷಾ ನೋಡಲ್ ಅಧಿಕಾರಿ ಎನ್.ಆರ್.ತಿಪ್ಪೇಸ್ವಾಮಿ, ಪೊಲೀಸ್ ಇಲಾಖೆಯ ಗುಡ್ಡಪ್ಪ, ಶಾಲಾ ಶಿಕ್ಷಣ ಇಲಾಖೆ ಯ ಅಧಿಕಾರಿಗಳಾದ ವೆಂಕಟೇಶ್, ನಾಗಭೂಷಣ್ ಸೇರಿದಂತೆ ಜಿಲ್ಲಾ ಖಜನಾಧಿಕಾರಿಗಳು, ಅಂಚೆ ಇಲಾಖೆ ಅಧಿಕಾರಿಗಳು ಇದ್ದರು.