ಸಾರಾಂಶ
ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿ ಜಮೀನು ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧದ ನ್ಯಾಯಾಂಗ ನಿಂದನೆ ವಿಚಾರಣೆಗೆ ಸುಪ್ರೀಂಕೋರ್ಟ್ ತಡೆ ನೀಡಿದೆ.
ಕನ್ನಡಪ್ರಭ ವಾರ್ತೆ ನವದೆಹಲಿ
ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿ ಜಮೀನು ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧದ ನ್ಯಾಯಾಂಗ ನಿಂದನೆ ವಿಚಾರಣೆಗೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧದ ತನಿಖೆಗೆ ಆದೇಶ ನೀಡಿದ್ದ ಕರ್ನಾಟಕ ಹೈಕೋರ್ಟ್ ನಿರ್ದೇಶನ ಪ್ರಶ್ನಿಸಿ ಕುಮಾರಸ್ವಾಮಿಯವರು ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಂಕಜ್ ಮಿಥಲ್ ಹಾಗೂ ನ್ಯಾ.ಪ್ರಸನ್ನ ಬಿ. ವರಾಳೆ ನೇತೃತ್ವದ ದ್ವಿಸದಸ್ಯ ಪೀಠ, ಮುಂದಿನ ಆದೇಶದವರೆಗೂ ಕುಮಾರಸ್ವಾಮಿ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆಗೆ ತಡೆ ನೀಡಿ ಆದೇಶ ಹೊರಡಿಸಿದೆ.ಪ್ರಕರಣವೇನು?:
ಕೇತಗಾನಹಳ್ಳಿ ವ್ಯಾಪ್ತಿಯಲ್ಲಿ ಕುಮಾರಸ್ವಾಮಿ ಹಾಗೂ ಅವರ ಸಂಬಂಧಿ ಮಾಜಿ ಶಾಸಕ ಡಿ.ಸಿ.ತಮ್ಮಣ್ಣ ಮತ್ತಿತರರ ವಿರುದ್ಧ ಭೂಕಬಳಿಕೆ ಆರೋಪ ಕೇಳಿ ಬಂದಿತ್ತು. ತನಿಖೆ ನಡೆಸಿದ್ದ ಲೋಕಾಯುಕ್ತ, ಈ ಒತ್ತುವರಿ ತೆರವಿಗೆ ಸೂಚಿಸಿತ್ತು. ಆದರೆ, ಲೋಕಾಯುಕ್ತದ ಸೂಚನೆ ಬಳಿಕವೂ ಅಧಿಕಾರಿಗಳು ಒತ್ತುವರಿ ತೆರವಿಗೆ ಮುಂದಾಗಿರಲಿಲ್ಲ.ಲೋಕಾಯುಕ್ತ ನೀಡಿರುವ ಆದೇಶ ಜಾರಿಗೊಳಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆಕ್ಷೇಪಿಸಿ ಸಮಾಜ ಪರಿವರ್ತನಾ ಸಮುದಾಯದ ಎಸ್.ಆರ್.ಹಿರೇಮಠ ಅವರು ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್, ಮೂರು ತಿಂಗಳಲ್ಲಿ ತೆರವು ಮಾಡಲು ಸೂಚನೆ ನೀಡಿತ್ತು. ಅಲ್ಲದೆ, ಪ್ರಕರಣ ಸಂಬಂಧ ಕುಮಾರಸ್ವಾಮಿಯವರ ತನಿಖೆಗೆ ಸಮ್ಮತಿ ಸೂಚಿಸಿತ್ತು. ಹೈಕೋರ್ಟ್‌ನ ಈ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣಾ ಆದೇಶ ಪ್ರಶ್ನಿಸಿ, ಕುಮಾರಸ್ವಾಮಿಯವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.