ಸಾರಾಂಶ
ಕನ್ನಡಪ್ರಭ ವಾರ್ತೆ ವಿಜಯಪುರ
ಖಾದಿ ದೇಶದ ಅಸ್ಮಿತೆಯಾಗಿದ್ದು, ಇದನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಖಾದಿ ಬಳಕೆಯೊಂದಿಗೆ ಉತ್ತೇಜನ ಅತ್ಯಗತ್ಯವಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಹೇಳಿದರು.ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಖಾದಿ ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನ.೧ರಿಂದ ೧೫ ರವರೆಗೆ ಆಯೋಜಿಸಿರುವ ರಾಜ್ಯ ಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳದ ಖಾದಿ ಉತ್ಸವ-೨೦೨೪ಕ್ಕೆ ಚಾಲನೆ ನೀಡಿ ಮಾತನಾಡಿದರು.
ದೇಶದ ಸ್ವಾತಂತ್ರ್ಯ ಚಳುವಳಿಯ ಸಂದರ್ಭದಲ್ಲಿ ಮಹಾತ್ಮಗಾಂಧೀಜಿ ವಿದೇಶಿ ಉತ್ಪನ್ನಗಳಿಗೆ ಕಡಿವಾಣ ಹಾಕಿ ಖಾದಿ ಉತ್ಪನ್ನಗಳನ್ನು ಸ್ವಯಂ ನೇಯ್ಗೆಯ ಮೂಲಕ ಸ್ವದೇಶಿ ಉತ್ಪನ್ನಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದರು. ಖಾದಿ ದೇಶದ ಅಸ್ಮಿತೆ, ಸ್ವಾವಲಂಬನೆಯ ಪ್ರತಿಕವಾದ ಖಾದಿ ಉಳಿಸಿ ಬೆಳೆಸುವ ಅವಶ್ಯಕತೆ ಇದೆ.ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಖಾದಿ ಉದ್ದಿಮೆ ಸಂಕಷ್ಟದಲ್ಲಿದೆ. ಹಲವು ಸಂಘ-ಸಂಸ್ಥೆಗಳು ಖಾದಿ ಪರಿಚಯಿಸಿ, ಬೆಳೆಸುವ ಛಲಹೊಂದಿ ಖಾದಿ ಮಾರುಕಟ್ಟೆ ವಿಸ್ತರಿಸುತ್ತಿದ್ದಾರೆ ಎಂದು ತಿಳಿಸಿದರು.ವಿಜಯಪುರ ಜಿಲ್ಲೆ ಐತಿಹಾಸಿಕ ನಗರವಾಗಿದ್ದು, ಕಳೆದ ೧೦ ವರ್ಷಗಳಿಂದ ಖಾದಿ ಆಯೋಗ, ಖಾದಿ ಮಂಡಳಿ ವತಿಯಿಂದ ಜಿಲ್ಲಾ ಮಟ್ಟದ ಹಾಗೂ ರಾಜ್ಯ ಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನಗಳನ್ನು ನಡೆಸಲಾಗುತ್ತಿದೆ. ವಿಜಯಪುರ ಜಿಲ್ಲೆಯಲ್ಲಿ ಖಾದಿ, ರೇಷ್ಮೆ ಹಾಗೂ ಉಣ್ಣೆಯ ವಸ್ತುಗಳಿಗೆ ಹೆಚ್ಚಿನ ಬೇಡಿಕೆಯಿದ್ದು, ವಿಶೇಷವಾಗಿ ಶುದ್ಧ ರೇಷ್ಮೆ ಸೀರೆಗಳು ಹೆಚ್ಚಿನ ಪ್ರಮಾಣದಲ್ಲಿ ಪ್ರದರ್ಶನ ಹಾಗೂ ಮಾರಾಟದ ವ್ಯವಸ್ಥೆ ಕಲ್ಪಿಸಲಾಗಿದೆ.
ಖಾದಿ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಮೇಳದಲ್ಲಿ ವಿವಿಧ ೭೫ ವಸ್ತು ಪ್ರದರ್ಶನ ಹಾಗೂ ಮಾರಾಟ ಮಳಿಗೆಗಳನ್ನು ಸ್ಥಾಪಿಸಲಾಗಿದೆ. ಜಿಲ್ಲೆ ಸೇರಿದಂತೆ ರಾಜ್ಯದ ಹಾಗೂ ಹೊರ ರಾಜ್ಯಗಳಿಂದ ಮಳಿಗೆಗಳನ್ನು ಸ್ಥಾಪಿಸಲಾಗಿದೆ ಎಂಬ ಮಾಹಿತಿ ನೀಡಿದರು.ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಮೇಯರ್ ಮಹೇಜಬಿನ್ ಹೊರ್ತಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕನಾನ್ ಮುಶ್ರೀಪ್, ಉಪ ಮೇಯರ್ ದಿನೇಶ ಹಳ್ಳಿ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿ.ಟಿ.ವೆಂಕಟೇಶ, ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಪಂ ಸಿಇಒ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ, ಕೆಕೆಜಿಎಸ್ ಅಧ್ಯಕ್ಷ ಬಿ.ಬಿ.ಪಾಟೀಲ, ಜಿಲ್ಲಾ ಖಾದಿ ಗ್ರಾಮೊದ್ಯೋಗ ಅಧಿಕಾರಿ ನಾರಾಯಣ ಕಾಂಬಳೆ, ಜಿಲ್ಲಾ ಖಾದಿ ಗ್ರಾಮೋದ್ಯೋಗ ಕಚೇರಿ ಬೆಳಗಾವಿಯ ಸಾವಿತ್ರಮ್ಮ ದಳವಾಯಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.ಕೋಟ್‌ಖಾದಿಗೆ ವಿಶ್ವ ಮಟ್ಟದಲ್ಲಿ ಬ್ರ್ಯಾಂಡ್ ಸೃಷ್ಟಿ ಮಾಡುವ ಅವಶ್ಯಕತೆ ಇದೆ. ಖಾದಿ ಮಾರುಕಟ್ಟೆ ಹೆಚ್ಚಿಸಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯಬೇಕು. ಈ ನಿಟ್ಟಿನಲ್ಲಿ ಸರ್ಕಾರದ ಮಟ್ಟದಲ್ಲಿಯೂ ಸಹ ಗಮನ ಸೆಳೆಯಲಾಗುವುದು. ೧೫ ದಿನಗಳ ಆಯೋಜಿಸಿರುವ ಖಾದಿ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಖಾದಿ ಉತ್ಪನ್ನಗಳನ್ನು ಖರೀದಿಸುವ ಮೂಲಕ ಉತ್ತೇಜನ ನೀಡಬೇಕು.ಎಂ.ಬಿ.ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವರು.