ಕಂಪ್ಲಿ: ಪಟ್ಟಣದ ಅಕ್ಕಿಗಿರಣಿ ಮಾಲೀಕರ ಸಂಘದ ತಾಲೂಕು ಅಧ್ಯಕ್ಷ ಕೆ.ಎಂ. ಹೇಮಯ್ಯಸ್ವಾಮಿ ಅವರ ಪುತ್ರಿ, ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತಗಾರ್ತಿ ವಿದುಷಿ ಕೆ.ಎಂ. ರೋಹಿಣಿ ಗಂಗಾಧರಯ್ಯ ಅವರಿಗೆ ಈ ವರ್ಷದ ಪ್ರತಿಷ್ಠಿತ ರಾಣಿ ಚನ್ನಮ್ಮ ಪ್ರಶಸ್ತಿ ಲಭಿಸಿದೆ.ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು. ಈ ಸಂದರ್ಭದಲ್ಲಿ ಪ್ರಶಸ್ತಿಯೊಂದಿಗೆ ₹1 ಲಕ್ಷ ಮೌಲ್ಯದ ಚೆಕ್ ಹಾಗೂ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು. ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳೆಯರನ್ನು ಗುರುತಿಸಿ ನೀಡಲಾಗುವ ಈ ಪ್ರಶಸ್ತಿ, ರೋಹಿಣಿಯವರ ಸಾಧನೆಗೆ ಮತ್ತೊಂದು ಮುತ್ತಿನಹಾರವಾಗಿ ಪರಿಣಮಿಸಿದೆ.
ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಕ್ಷೇತ್ರದಲ್ಲಿ ವಿದುಷಿ ರೋಹಿಣಿ ಗಂಗಾಧರಯ್ಯ ತಮ್ಮದೇ ಆದ ವಿಶಿಷ್ಟ ಗುರುತು ಮೂಡಿಸಿಕೊಂಡಿದ್ದಾರೆ. ಸಂಗೀತದಲ್ಲಿ ಆಳವಾದ ಅಧ್ಯಯನ ಹಾಗೂ ಸಂಶೋಧನಾ ಮನೋಭಾವ ಹೊಂದಿರುವ ಅವರು, ಈಗಾಗಲೇ 40ಕ್ಕೂ ಹೆಚ್ಚು ಭಾರತೀಯ ಸಂಗೀತಶಾಸ್ತ್ರ ಸಂಬಂಧಿತ ಸಂಶೋಧನಾ ಪ್ರಬಂಧಗಳನ್ನು ಪ್ರಕಟಿಸಿದ್ದಾರೆ. ಜೊತೆಗೆ, ಸಂಗೀತಾಭ್ಯಾಸಿಗಳಿಗೆ ಮಾರ್ಗದರ್ಶಕವಾಗುವಂತೆ 10ಕ್ಕೂ ಹೆಚ್ಚು ಮೌಲಿಕ ಕೃತಿಗಳನ್ನು ರಚಿಸಿದ್ದು, ಅವುಗಳು ವಿದ್ಯಾರ್ಥಿಗಳು ಹಾಗೂ ಸಂಶೋಧಕರಿಗೆ ಅಮೂಲ್ಯ ಸಂಪತ್ತಾಗಿವೆ.ವಿಶೇಷವಾಗಿ, ಹಿಂದೂಸ್ತಾನಿ ಸಂಗೀತವನ್ನು ಇಂಗ್ಲಿಷ್ ಭಾಷೆಯಲ್ಲಿ ಸರಳವಾಗಿ ಪರಿಚಯಿಸುವ ಉದ್ದೇಶದಿಂದ ಅವರು ರಚಿಸಿದ ಸ್ವರ ಕಲ್ಪ ಎಂಬ ನಾಲ್ಕು ಸಂಪುಟಗಳ ಕೃತಿ ಸಂಗೀತಾಭ್ಯಾಸ ಮಾಡುವವರಿಗೆ ದಾರಿದೀಪವಾಗಿ ಕಾರ್ಯನಿರ್ವಹಿಸುತ್ತಿದೆ.
“ಪ್ರಣತಿ” ಎಂಬ ಸಂಸ್ಥೆಯ ಮೂಲಕ ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿಗಾಗಿ ನಿರಂತರವಾಗಿ ಸಾಮಾಜಿಕ ಸೇವೆ ಸಲ್ಲಿಸುತ್ತಿದ್ದಾರೆ. ಸಮಾಜಮುಖಿ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಭಾಗವಹಿಸುವ ಅವರ ಸೇವೆಯನ್ನು ಪರಿಗಣಿಸಿ ರಾಜ್ಯ ಸರ್ಕಾರವು ಈ ಗೌರವಾನ್ವಿತ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಿದೆ.