ಕಾರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗ್ರಾಮ ಮಟ್ಟದ ಅರಣ್ಯ ಹಕ್ಕು ಸಮಿತಿ, ಉಪ ವಿಭಾಗ ಮಟ್ಟದ ಅರಣ್ಯ ಹಕ್ಕು ಸಮಿತಿ ಹಾಗೂ ಜಿಲ್ಲಾ ಮಟ್ಟದ ಅರಣ್ಯ ಹಕ್ಕು ಸಮಿತಿಗಳ ಸದಸ್ಯರು ಹಾಗೂ ಇಲಾಖೆಗೆ ಸಂಬಂಧಿಸಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿಗೆ ಕಾರ್ಯಾಗಾರ ಆಯೋಜಿಸಲಾಗಿತ್ತು.

ಕಾರವಾರ: ಅರಣ್ಯ ಹಕ್ಕು ಕಾಯ್ದೆಯ ಕುರಿತಂತೆ ಸಂಪೂರ್ಣವಾಗಿ ತಿಳಿದುಕೊಂಡು, ಜಿಲ್ಲೆಯಲ್ಲಿ ಈ ಬಗ್ಗೆ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಸಮರ್ಪಕ ರೀತಿಯಲ್ಲಿ ವಿಲೇವಾರಿ ಮಾಡುವಂತೆ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ತಿಳಿಸಿದರು.

ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಉತ್ತರ ಕನ್ನಡ ಇವರ ಸಂಯುಕ್ತ ಆಶ್ರಯದಲ್ಲಿ ಅನುಸೂಚಿತ ಬುಡಕಟ್ಟುಗಳ ಮತ್ತು ಇತರ ಪಾರಂಪರಿಕ ಅರಣ್ಯವಾಸಿಗಳ ಅಧಿನಿಯಮ-2006 ಮತ್ತು ನಿಯಮಗಳು 2008ರ ಅನುಷ್ಠಾನ ಕುರಿತು, ಗ್ರಾಮ ಮಟ್ಟದ ಅರಣ್ಯ ಹಕ್ಕು ಸಮಿತಿ, ಉಪ ವಿಭಾಗ ಮಟ್ಟದ ಅರಣ್ಯ ಹಕ್ಕು ಸಮಿತಿ ಹಾಗೂ ಜಿಲ್ಲಾ ಮಟ್ಟದ ಅರಣ್ಯ ಹಕ್ಕು ಸಮಿತಿಗಳ ಸದಸ್ಯರು ಹಾಗೂ ಇಲಾಖೆಗೆ ಸಂಬಂಧಿಸಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿಗೆ ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಅತಿ ಹೆಚ್ಚಿನ ಪ್ರಮಾಣದ ಅರಣ್ಯ ಪ್ರದೇಶವಿದ್ದು, ಇಡೀ ರಾಜ್ಯದಲ್ಲೇ ಅತ್ಯಧಿಕ ಸಂಖ್ಯೆಯಲ್ಲಿ ಅರಣ್ಯ ಹಕ್ಕು ಕುರಿತು ಅರ್ಜಿಗಳು ಜಿಲ್ಲೆಯಲ್ಲಿ ಸಲ್ಲಿಕೆಯಾಗಿದ್ದು, ಈ ಎಲ್ಲ ಅರ್ಜಿಗಳನ್ನು ಪರಿಶೀಲಿಸಿ ಸೂಕ್ತ ರೀತಿಯಲ್ಲಿ ಇತ್ಯರ್ಥಪಡಿಸಲು ಅರಣ್ಯ ಹಕ್ಕು ಕಾಯ್ದೆಯ ಕುರಿತು ಸಂಪೂರ್ಣ ವಿವರಗಳನ್ನು ತಿಳಿಯುವ ಅವಶ್ಯಕತೆಯಿದೆ. ಕಾಯ್ದೆಯಲ್ಲಿನ ನಿಯಮ, ತಿದ್ದುಪಡಿ, ದಾಖಲೆಗಳ ಸಂಗ್ರಹ ಮುಂತಾದ ಎಲ್ಲ ಅಂಶಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಿಬ್ಬಂದಿ ತಿಳಿದುಕೊಂಡು ಅದರಂತೆ ಕಾರ್ಯನಿರ್ವಹಿಸಬೇಕು ಎಂದರು.

ಈಗಾಗಲೇ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಪರಿಶೀಲಿಸಿ ನಿಗದಿತ ಅವಧಿಯೊಳಗೆ ಅವುಗಳನ್ನು ಕಾನೂನು ರೀತಿಯಲ್ಲಿ ವಿಲೇವಾರಿ ಮಾಡುವಂತೆ ತಿಳಿಸಿದ ಅವರು, ತಿರಸ್ಕೃತ ಅರ್ಜಿಗಳ ಪುನರ್ ಪರಿಶೀಲನೆ ಕಾರ್ಯವನ್ನು ಶೀಘ್ರದಲ್ಲಿ ಮುಕ್ತಾಯಗೊಳಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಅರಣ್ಯ ಹಕ್ಕು ಕಾಯ್ದೆಯ ಕುರಿತು ಒಡಿಶಾದಿಂದ ಆಗಮಿಸಿದ್ದ ವಿಷಯ ತಜ್ಞ ವೈ.ಗಿರಿರಾವ್, ಕಾರ್ಯಕ್ರಮ ಅಧಿಕಾರಿ ಪ್ರಿಯಾಂಕ ಸಿಂಗ್, ಶಿರಸಿ ಉಪ ವಿಭಾಗಾಧಿಕಾರಿ ಚಂದ್ರಶೇಖರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂದೀಪ್ ಸೂರ್ಯವಂಶಿ, ಜಿಪಂ ಉಪ ಕಾರ್ಯದರ್ಶಿ ಪ್ರಕಾಶ್ ಹಾಲಮ್ಮನವರ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ವೈ.ಕೆ. ಉಮೇಶ್ ಉಪಸ್ಥಿತರಿದ್ದರು.

ಜಿಲ್ಲೆಯ ಎಲ್ಲ ತಾಲೂಕುಗಳು ತಹಸೀಲ್ದಾರ್‌ಗಳು, ತಾಪಂ ಇಒಗಳು, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು, ವಲಯ ಅರಣ್ಯ ಸಂರಕ್ಷಣಾಧಿಕಾರಿಗಳು, ಭೂ ದಾಖಲೆಗಳ ಇಲಾಖೆಯ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಭಾಗವಹಿಸಿದ್ದರು.