ಸಾರಾಂಶ
ಕೊಡಗು ವಿಶ್ವವಿದ್ಯಾಲಯವನ್ನು ಮುಚ್ಚುವ ಅಥವಾ ಮತ್ತೊಂದು ವಿವಿಯೊಂದಿಗೆ ವಿಲೀನಗೊಳಿಸುವ ಕುರಿತು ತೆಗೆದುಕೊಂಡಿರುವ ನಿರ್ಧಾರವನ್ನು ಪುನರ್‌ಪರಿಶೀಲಿಸಬೇಕು ಎಂದು ಒಕ್ಕಲಿಗರ ಸಂಘ ಒತ್ತಾಯಿಸಿದೆ.
ಮಡಿಕೇರಿ: ಕೊಡಗು ವಿಶ್ವ ವಿದ್ಯಾಲಯವನ್ನು ಮುಚ್ಚುವ ಅಥವಾ ಮತ್ತೊಂದು ವಿವಿಯೊಂದಿಗೆ ವಿಲೀನಗೊಳಿಸುವ ಕುರಿತು ತೆಗೆದುಕೊಂಡಿರುವ ನಿರ್ಧಾರವನ್ನು ಕೊಡಗಿನ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸರ್ಕಾರ ಪುನರ್ ಪರಿಶೀಲಿಸಬೇಕು ಎಂದು ಕೊಡಗು ಜಿಲ್ಲಾ ಒಕ್ಕಲಿಗರ ಸಂಘ ಒತ್ತಾಯಿಸಿದೆ.
ಪತ್ರಿಕಾ ಪ್ರಕಟಣೆ ನೀಡಿರುವ ಸಂಘದ ಅಧ್ಯಕ್ಷ ಎಸ್.ಎಂ.ಚಂಗಪ್ಪ ಅವರು ಕೊಡಗು ವಿವಿ ಜಿಲ್ಲೆಯ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳ ಶೈಕ್ಷಣಿಕ ಗುರಿ ಸಾಧನೆಗೆ ಹೆಚ್ಚು ಉಪಯುಕ್ತವಾಗಿದೆ. ಇದನ್ನು ಮುಚ್ಚುವುದರಿಂದ ಸ್ಥಳೀಯ ವಿದ್ಯಾರ್ಥಿಗಳಿಗೆ ದೊಡ್ಡ ನಷ್ಟವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.ಸುಮಾರು ಮೂರು ವರ್ಷಗಳ ಹಿಂದೆ ಸ್ಥಾಪನೆಗೊಂಡ ಕೊಡಗು ವಿವಿ ಈಗಷ್ಟೇ ತನ್ನ ಕ್ಷೇತ್ರವನ್ನು ವಿಸ್ತರಿಸಿಕೊಂಡು ಚೇತರಿಸಿಕೊಳ್ಳುತ್ತಿದೆ. ಅಲ್ಲದೆ ವಿದ್ಯಾರ್ಥಿಗಳಿಗೆ ಅನುಕೂಲಕರ ವಾತವಾರಣ ಸೃಷ್ಟಿಯಾಗುತ್ತಿದೆ, ಜಿಲ್ಲೆಯ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ಹೊರ ಜಿಲ್ಲೆಗಳನ್ನು ಅವಲಂಬಿಸಬೇಕಾದ ಅನಿವಾರ್ಯತೆ ತಪ್ಪಿದೆ. ಉದ್ಯೋಗ ಸೃಷ್ಟಿ, ಶೈಕ್ಷಣಿಕ ಪ್ರಗತಿ ಮತ್ತು ಜಿಲ್ಲೆಯ ಅಭಿವೃದ್ಧಿಗೂ ವಿವಿ ಪೂರಕವಾಗಿದೆ. ಕೊಡಗಿನ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಸದೃಢರಾಗಬೇಕಾದರೆ ಕೊಡಗು ವಿವಿಯನ್ನು ಉಳಿಸಿಕೊಳ್ಳುವ ಅಗತ್ಯವಿದೆ.
ಪ್ರಸ್ತುತ ವಿವಿಯಲ್ಲಿ ಸಣ್ಣಪುಟ್ಟ ಕೊರತೆ ಅಥವಾ ನ್ಯೂನತೆಗಳು ಇರಬಹುದು, ಆದರೆ ವರ್ಷ ಕಳೆದಂತೆ ಜಿಲ್ಲೆಗೆ ವಿವಿ ಎಷ್ಟು ಅವಶ್ಯಕ ಎನ್ನುವುದು ಮನದಟ್ಟಾಗಬಹುದು. ಆದ್ದರಿಂದ ರಾಜ್ಯ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿದು ಕೊಡಗಿನ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಈ ಬಾರಿಯ ಬಜೆಟ್ ನಲ್ಲಿ ಅಗತ್ಯ ಅನುದಾನ ಮೀಸಲಿಟ್ಟು ಕೊಡಗು ವಿವಿಯನ್ನು ಇಲ್ಲೇ ಉಳಿಸಬೇಕೆಂದು ಎಸ್.ಎಂ.ಚಂಗಪ್ಪ ಒತ್ತಾಯಿಸಿದ್ದಾರೆ.