ಸೋಮವಾರಪೇಟೆ: ಕೊಡವ ಸಮಾಜದಿಂದ ತಾಲೂಕು ಕಚೇರಿ ಎದುರು ಪ್ರತಿಭಟನೆ

| Published : Dec 31 2024, 01:04 AM IST

ಸೋಮವಾರಪೇಟೆ: ಕೊಡವ ಸಮಾಜದಿಂದ ತಾಲೂಕು ಕಚೇರಿ ಎದುರು ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಸೋಮವಾರಪೇಟೆ ಕೊಡವ ಸಮಾಜ ವತಿಯಿಂದ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.

ಕನ್ನಡಪ್ರಭ ವಾರ್ತೆ ಸೋಮವಾರಪೇಟೆ

ಮೂರ್ನಾಡು ಸಮೀಪದ ಕಟ್ಟೆಮಾಡು ಶ್ರೀ ಮೃತ್ಯುಂಜಯ ದೇವಾಲಯಕ್ಕೆ ಸಾಂಪ್ರದಾಯಿಕ ಉಡುಗೆಯಲ್ಲಿ ತೆರಳಿದ ಕೊಡವರನ್ನು ಒಳ ಪ್ರವೇಶಿಸದಂತೆ ತಡೆದಿರುವುದು ಖಂಡನೀಯ. ತಕ್ಷಣ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸೋಮವಾರಪೇಟೆ ಕೊಡವ ಸಮಾಜದ ವತಿಯಿಂದ ಸೋಮವಾರ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಲಾಯಿತು.

ಕೊಡವ ಸಂಸ್ಕೃತಿ, ಆಚಾರ ವಿಚಾರಕ್ಕೆ ಧಕ್ಕೆ ತಂದವರನ್ನು ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ ಕೊಡವ ಸಮುದಾಯದ ಪ್ರಮುಖರನ್ನೇ ಬಂಧಿಸಿ, ಬೇರೆ ಬೇರೆ ಸ್ಥಳಗಳಿಗೆ ಕರೆದೊಯ್ದಿರುವ ಪೊಲೀಸ್ ಇಲಾಖೆಯ ಕ್ರಮ ಖಂಡನೀಯ ಎಂದು ಸಂಘದ ಅಧ್ಯಕ್ಷ ಮಾಳೇಟಿರ ಅಭಿಮನ್ಯುಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಜನಾಂಗಗಳ ನಡುವೆ ಸಂಘರ್ಷವನ್ನು ಸೃಷ್ಟಿಸಲು ಯತ್ನಿಸುತ್ತಿರುವ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಬೇಕು. ತಪ್ಪಿದ್ದಲ್ಲಿ ಕೊಡವ ಸಮುದಾಯದಿಂದ ತೀವ್ರ ತರದ ಹೋರಾಟ ಮಾಡಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

ಮನವಿಯನ್ನು ತಹಸೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ, ಪೊಲೀಸ್ ಇನ್ಸ್ಪೆಕ್ಟರ್ ಮೂಲಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಕೊಡವ ಸಮಾಜದ ಉಪಾಧ್ಯಕ್ಷ ಬೊಳಂದಂಡ ಕುಟ್ಟಪ್ಪ, ಕಾರ್ಯದರ್ಶಿ ಕೊಚ್ಚೇರ ಅನಿಲ್, ಸಹ ಕಾರ್ಯದರ್ಶಿ ಹಂಚೆಟ್ಟಿರ ನಿತಿನ್, ಖಜಾಂಚಿ ಪಾಡೆಯಂಡ ಮುತ್ತಣ್ಣ, ನಿರ್ದೇಶಕರಾದ ಮಚ್ಚಂಡ ಪ್ರಕಾಶ್, ಮಣವಟ್ಟೀರ ಹರೀಶ್ ಸೇರಿದಂತೆ ಇತರರು ಭಾಗವಹಿಸಿದ್ದರು.