ಸಾರಾಂಶ
Koli Samaj is trying to add to P. Sect : Chinchansur
-ನಿಜಶರಣ ಅಂಬಿಗರ ಚೌಡಯ್ಯ ಜಯಂತ್ಯುತ್ಸವ ಕಾರ್ಯಕ್ರಮ
----ಕನ್ನಡಪ್ರಭ ವಾರ್ತೆ ಯಾದಗಿರಿ
ಅತ್ಯಂತ ಕಡು ಬಡ ಕೋಲಿ ಸಮಾಜವನ್ನು ಪರಿಶಿಷ್ಟ ಪಂಗಡ ವರ್ಗಕ್ಕೆ ಸೇರಿಸಲು ಶಕ್ತಿಮೀರಿ ಪ್ರಯತ್ನಿಸುತ್ತೇನೆ ಎಂದು ರಾಜ್ಯ ನಿಜಶರಣ ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷ ಬಾಬುರಾವ ಚಿಂಚನಸೂರ್ ಹೇಳಿದರು.ನಗರದ ವಿದ್ಯಾಮಂಗಲ ಕಾರ್ಯಾಲಯದಲ್ಲಿ ಜಿಲ್ಲಾಡಳಿತ, ಜಿ.ಪಂ., ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಿಜಶರಣ ಅಂಬಿಗರ ಚೌಡಯ್ಯ ಜಯಂತ್ಯುತ್ಸವ ಸಮಿತಿ ಹಾಗೂ ನಗರಸಭೆ ಸಂಯುಕ್ತಾಶ್ರಯದಲ್ಲಿ ನಡೆದ ನಿಜಶರಣ ಅಂಬಿಗರ ಚೌಡಯ್ಯ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕೋಲಿ ಸಮಾಜ ಕಡುಬಡ ಸಮಾಜವಾಗಿದ್ದು, ಮಹಿಳೆಯರು ಇನ್ನೂ ಕೂಲಿ ಕೆಲಸಕ್ಕೆ ಹೋಗುವಂತಹ ಪರಿಸ್ಥಿತಿ ಇದೆ. ಅದರಂತೆ ಸರ್ಕಾರಿ ಕೆಳದರ್ಜೆಯ ಸಿಬ್ಬಂದಿಗಳಾಗಿ ಕಾರ್ಯನಿರ್ವಹಿಸುತ್ತಿದ್ದು, ಅತ್ಯುನ್ನತ ಹುದ್ದೆಯನ್ನು ಅಲಂಕರಿಸಲು, ಉನ್ನತ ವಿದ್ಯಾಭ್ಯಾಸಕ್ಕಾಗಿ ಪರಿಶಿಷ್ಟ ಪಂಗಡ ಮೀಸಲಾತಿ ಅತ್ಯಂತ ಅವಶ್ಯಕವಾಗಿದೆ ಎಂದರು.ಸಮಾಜದ ಮಕ್ಕಳು ಉನ್ನತ ಹುದ್ದೆ ಅಲಂಕರಿಸಲು ಈ ಮೀಸಲಾತಿಯ ಅವಶ್ಯಕತೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಮಟ್ಟದಲ್ಲಿ ಪ.ಪಂಗಡ ವರ್ಗದ ಪಟ್ಟಿಯಲ್ಲಿ ಸೇರ್ಪಡೆಗೆ ಶಕ್ತಿಮೀರಿ ಹೋರಾಡುವುದಾಗಿ ತಿಳಿಸಿದರು. ಸಮಾಜದ ಒಗ್ಗಟ್ಟು ಮತ್ತು ಐಕ್ಯತೆಯಿಂದ ಮಾತ್ರ ಇದು ಸಾಧ್ಯವಿದೆ ಎಂದರು.
ಉಪನ್ಯಾಸಕ ಡಾ. ಭೀಮರಾಯ ಅರಕೇರಿ ಮಾತನಾಡಿ, ನಿಜಶರಣ ಅಂಬಿಗರ ಚೌಡಯ್ಯ ಅವರು ಮೂಢನಂಬಿಕೆ, ಡಾಂಭಿಕ ಭಕ್ತಿ, ಶೋಷಣೆ, ಸಾಮಾಜಿಕ ತಾರತಮ್ಯದ ವಿರುದ್ಧ ಕ್ರಾಂತಿಕಾರಿ ವಚನಗಳನ್ನು ವಿಡಂಬನಾತ್ಮಕ ರೀತಿಯಲ್ಲಿ ಜನರಿಗೆ ತಿಳಿಹೇಳಿ ಸಮ ಸಮಾಜ ಸುಧಾರಣೆಗೆ ಶ್ರಮಿಸಿದರು ಎಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಲಲಿತಾ ಅನಪುರ ಮಾತನಾಡಿ, ಕೋಲಿ ಸಮಾಜ ಒಗ್ಗಟ್ಟಿನಿಂದ ಪರಿಶಿಷ್ಟ ಪಂಗಡ ಮೀಸಲಾತಿ ಪಡೆಯೋಣ ಎಂದು ಹೇಳಿದರು. ನಿಜಶರಣ ಅಂಬಿಗರ ಚೌಡಯ್ಯ ಜಯಂತ್ಯುತ್ಸವ ಸಮಿತಿ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಗೋಸಿ ಮಾತನಾಡಿದರು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿನಾಯಕ ಮಾಲಿ ಪಾಟೀಲ್, ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೋಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಉತ್ತರಾದೇವಿ ಮಠಪತಿ, ಸಮಾಜದ ಮುಖಂಡರಾದ ಮಹೇಶ್ ಮುದ್ನಾಳ ಸೇರಿದಂತೆ ಇತರರಿದ್ದರು. ಡಾ. ಶ್ರೀನಿವಾಸ್ ಕಾರ್ಯಕ್ರಮ ನಿರ್ವಹಿಸಿದರು.----
21ವೈಡಿಆರ್8: ಯಾದಗಿರಿ ನಗರದ ವಿದ್ಯಾಮಂಗಲ ಕಾರ್ಯಾಲಯದಲ್ಲಿ ನಡೆದ ನಿಜಶರಣ ಅಂಬಿಗರ ಚೌಡಯ್ಯ ಜಯಂತ್ಯುತ್ಸವ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು.