ಕಳೆದ ನಾಲ್ಕು ದಶಕಗಳಿಂದ ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯರಾಗಿರುವ ದೊಡ್ಡ ಕೇಶವರೆಡ್ಡಿ ಅವರು, ರಾಜಕೀಯ ಅನುಭವ, ಸಂಘಟನಾ ಸಾಮರ್ಥ್ಯ ಹಾಗೂ ಸಾರ್ವಜನಿಕ ಸಂಪರ್ಕದ ಮೂಲಕ ಗುರುತಿಸಿಕೊಂಡಿದ್ದಾರೆ.

ಬಳ್ಳಾರಿ: ಜಿಲ್ಲೆಯ ರಾಜಕೀಯ ವಲಯದಲ್ಲಿ ಗುರುತಿಸಿಕೊಂಡಿರುವ ಹಿರಿಯ ರಾಜಕೀಯ ಮುಖಂಡ ಹಾಗೂ ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೋರ್ಲಗುಂದಿ ದೊಡ್ಡ ಕೇಶವರೆಡ್ಡಿ ತಮ್ಮ ಬೆಂಬಲಿಗರೊಂದಿಗೆ ಕಂಪ್ಲಿ ಶಾಸಕ ಜೆ.ಎನ್. ಗಣೇಶ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಕಳೆದ ನಾಲ್ಕು ದಶಕಗಳಿಂದ ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯರಾಗಿರುವ ದೊಡ್ಡ ಕೇಶವರೆಡ್ಡಿ ಅವರು, ರಾಜಕೀಯ ಅನುಭವ, ಸಂಘಟನಾ ಸಾಮರ್ಥ್ಯ ಹಾಗೂ ಸಾರ್ವಜನಿಕ ಸಂಪರ್ಕದ ಮೂಲಕ ಗುರುತಿಸಿಕೊಂಡಿದ್ದಾರೆ. ವಿವಿಧ ರಾಜಕೀಯ ಬೆಳವಣಿಗೆಗಳ ನಡುವೆಯೂ ತಮ್ಮದೇ ಆದ ಬೆಂಬಲಿಗರ ಬಳಗ ಹೊಂದಿದ್ದಾರೆ.

ಕೋರ್ಲಗುಂದಿ ಗ್ರಾಪಂ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಕೇಶವರೆಡ್ಡಿ ಅವರು, ಗ್ರಾಮೀಣ ಪ್ರದೇಶದ ವಿವಿಧ ಸಮುದಾಯಗಳ ಜನರೊಂದಿಗೆ ನಿಕಟ ಸಂಪರ್ಕ ಹೊಂದಿದ್ದಾರೆ. ಗ್ರಾಮೀಣ ಮಟ್ಟದಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ರಾಜಕೀಯವಾಗಿ ಗುರುತಿಸಿಕೊಂಡಿದ್ದಾರೆ.

ನಾಲ್ಕು ದಶಕಗಳ ರಾಜಕೀಯ ಅನುಭವ:

ಕಳೆದ ಸುಮಾರು ನಾಲ್ಕು ದಶಕಗಳಿಂದ ಸಾರ್ವಜನಿಕ ಜೀವನದಲ್ಲಿ ತೊಡಗಿಸಿಕೊಂಡಿರುವ ದೊಡ್ಡ ಕೇಶವರೆಡ್ಡಿ, ರಾಜಕೀಯದ ಏಳುಬೀಳು ಕಂಡಿರುವ ಅನುಭವಿ ನಾಯಕ. ಸ್ಥಳೀಯ ಸಂಸ್ಥೆಗಳ ರಾಜಕಾರಣದಿಂದ ಹಿಡಿದು ಪಕ್ಷ ಸಂಘಟನೆಯವರೆಗೆ ವಿವಿಧ ಹಂತಗಳಲ್ಲಿ ಕಾರ್ಯ ನಿರ್ವಹಿಸಿರುವ ಅವರು, ಗ್ರಾಮೀಣ ಪ್ರದೇಶದಲ್ಲಿ ತಮ್ಮದೇ ಆದ ಪ್ರಭಾವ ಹೊಂದಿದ್ದಾರೆ.

ಹಿಂದೆ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದ ಅವರು, ಬಳ್ಳಾರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಬಳಿಕ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಆಮ್‌ಆದ್ಮಿ ಪಕ್ಷ, ಬಿಜೆಪಿಯೊಂದಿಗೆ ಗುರುತಿಸಿಕೊಂಡಿದ್ದರು. ಇದೀಗ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಮರಳುವ ಮೂಲಕ ತಮ್ಮ ರಾಜಕೀಯ ಜೀವನದಲ್ಲಿ ಮತ್ತೊಂದು ಹೆಜ್ಜೆ ಇರಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಸಂಘಟನೆ ಗ್ರಾಮೀಣ ಪ್ರದೇಶದಲ್ಲಿ ಮತ್ತಷ್ಟು ಬಲಪಡಿಸಲು ಶ್ರಮಿಸಲಾಗುವುದು. ರಾಜಕೀಯ ಎಂದರೆ ಕೇವಲ ಅಧಿಕಾರ ಪಡೆಯುವುದಲ್ಲ. ಜನರ ಸಮಸ್ಯೆಗಳಿಗೆ ಸ್ಪಂದಿಸುವುದು, ಸಮಾಜದ ಎಲ್ಲ ವರ್ಗಗಳ ಅಭಿವೃದ್ಧಿಗೆ ಶ್ರಮಿಸುವುದು ಮುಖ್ಯ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದೊಂದಿಗೆ ಗುರುತಿಸಿಕೊಂಡು ಸಾರ್ವಜನಿಕ ಸೇವೆ ಮುಂದುವರಿಸುವುದಾಗಿ ಹೇಳಿದ್ದಾರೆ. ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷರಾಗಿರುವ ಕೊರ್ಲಗುಂದಿ ಕೇಶವರೆಡ್ಡಿ ಗ್ರಾಮೀಣ ಮಟ್ಟದ ರೈತರೊಂದಿಗೆ ನಿರಂತರ ಸಂಪರ್ಕ ಹೊಂದಿದ್ದು, ಪಕ್ಷ ಸಂಘಟನೆಗೆ ಸಹಕಾರಿಯಾಗಲಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ.

ಕಾಂಗ್ರೆಸ್ ಪಕ್ಷ ಸಂಘಟನೆಗೊಳಿಸುವುದು ಹಾಗೂ ಬರುವ ಜಿಪಂ ಚುನಾವಣೆಯಲ್ಲಿ ಸಕ್ರೀಯಗೊಳ್ಳುವ ಆಶಯದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿರುವೆ.ಕಾಂಗ್ರೆಸ್ ಪಕ್ಷ ಗ್ರಾಮೀಣ ಮಟ್ಟದಲ್ಲಿ ಗಟ್ಟಿಗೊಳಿಸಲು ಶ್ರಮಿಸಲಾಗುವುದು ಎಂದು ಬಳ್ಳಾರಿ ಹಿರಿಯ ರಾಜಕೀಯ ಮುಖಂಡ ಕೊರ್ಲಗುಂದಿ ದೊಡ್ಡ ಕೇಶವರೆಡ್ಡಿ ತಿಳಿಸಿದ್ದಾರೆ.