ಪರಿಷತ್ ಚುನಾವಣೆಯಲ್ಲಿ ಬದ್ಧತೆಯಿಂದ ಶ್ರಮಿಸಲು ಕಾರ್ಯಕರ್ತರಿಗೆ ಕೋಟ ಕರೆ

| Published : May 19 2024, 01:46 AM IST

ಪರಿಷತ್ ಚುನಾವಣೆಯಲ್ಲಿ ಬದ್ಧತೆಯಿಂದ ಶ್ರಮಿಸಲು ಕಾರ್ಯಕರ್ತರಿಗೆ ಕೋಟ ಕರೆ
Share this Article
  • FB
  • TW
  • Linkdin
  • Email

ಸಾರಾಂಶ

ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಲೋಕಸಭಾ ಚುನಾವಣೆಯಲ್ಲಿ ದುಡಿದ ಕಾರ್ಯಕರ್ತರಿಗೆ ಧನ್ಯವಾದ ಸಮರ್ಪಣೆ ಮತ್ತು ವಿಧಾನಪರಿಷತ್ ಚುನಾವಣಾ ಪೂರ್ವಸಿದ್ಧತಾ ಸಭೆ ನಡೆಯಿತು. ಸಭೆಯಲ್ಲಿ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಉಡುಪಿ

ವಿಧಾನ ಪರಿಷತ್ ಚುನಾವಣೆ ಜೂನ್‌ 3ರಂದು ನಡೆಯಲಿದ್ದು, ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಎನ್.ಡಿ.ಎ. ಅಭ್ಯರ್ಥಿ ಎಸ್.ಎಲ್. ಭೋಜೇಗೌಡ ಅವರ ಗೆಲುವಿಗೆ ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಬದ್ಧತೆಯಿಂದ ತೊಡಗಿಸಿಕೊಳ್ಳಬೇಕು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಹಾಗೂ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಕರೆ ನೀಡಿದರು.

ಅವರು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ದುಡಿದ ಕಾರ್ಯಕರ್ತರಿಗೆ ಧನ್ಯವಾದ ಸಮರ್ಪಣೆ ಮತ್ತು ವಿಧಾನಪರಿಷತ್ ಚುನಾವಣಾ ಪೂರ್ವಸಿದ್ಧತಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ವಿಧಾನ ಪರಿಷತ್ ಚುನಾವಣೆಯ ನೈರುತ್ಯ ಪದವೀಧರ ಕ್ಷೇತ್ರಕ್ಕೆ ಶಿವಮೊಗ್ಗ ಭಾಗದ ಅಭ್ಯರ್ಥಿಗಳೇ ಬಿಜೆಪಿ ಅಭ್ಯರ್ಥಿಗಳಾಗಿರುವುದು ಇತಿಹಾಸ. ಡಿ.ಎಚ್. ಶಂಕರಮೂರ್ತಿಯವರು ಸುದೀರ್ಘ 30 ವರ್ಷಗಳ ಅವಧಿಗೆ ಇದೇ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯರಾಗಿದ್ದರು. ಈ ಬಾರಿ ಡಾ. ಧನಂಜಯ ಸರ್ಜಿ ಅವರು ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಬಿಜೆಪಿ-ಜೆಡಿಎಸ್ ಮೈತ್ರಿಯ ಕಾರಣಕ್ಕೆ ನೈರುತ್ಯ ಶಿಕ್ಷಕರ ಕ್ಷೇತ್ರವನ್ನು ಎನ್.ಡಿ.ಎ. ಅಭ್ಯರ್ಥಿಯಾಗಿ ಎಸ್.ಎಲ್. ಭೋಜೇಗೌಡ ಅವರು ಸ್ಪರ್ಧಿಸಲು ಬಿಟ್ಟುಕೊಡಲಾಗಿದೆ. ಪಕ್ಷದ ಪರಂಪರೆಯಂತೆ ಅಭ್ಯರ್ಥಿ ಘೋಷಣೆಯಾದ ಬಳಿಕ ಯಾವುದೇ ಗೊಂದಲ ಉಳಿದಿಲ್ಲ. ಜಿಲ್ಲೆಯ ಎಲ್ಲ ಶಾಸಕರು, ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಒಟ್ಟಾಗಿ ಒಂದಾಗಿ ವಿಧಾನಪರಿಷತ್ ಚುನಾವಣೆಯನ್ನು ಯಶಸ್ವಿಯಾಗಿ ನಿಭಾಯಿಸಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಬದ್ಧತೆಯಿಂದ ಶ್ರಮಿಸಬೇಕು ಎಂದು ಕೋಟ ವಿನಂತಿಸಿದರು.

ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ವೇದಿಕೆಯಲ್ಲಿದ್ದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಪಕ್ಷ ವಿರೋಧಿ ಚಟುವಟಿಕೆಗೆ ನಿರ್ದಾಕ್ಷಿಣ್ಯ ಕ್ರಮ

ವಿಧಾನ ಪರಿಷತ್ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಘೋಷಣೆಯಾಗಿದೆ. ಇದರ ನಡುವೆ ಯಾವುದೇ ಪಕ್ಷ ವಿರೋಧಿ ಚಟುವಟಿಕೆಗಳನ್ನು ಸಹಿಸಲು ಸಾಧ್ಯವಿಲ್ಲ. ಅಂತಹ ಸನ್ನಿವೇಶದಲ್ಲಿ ಪಕ್ಷದ ಚೌಕಟ್ಟಿನೊಳಗೆ ಸೂಕ್ತ ಶಿಸ್ತು ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಎಚ್ಚರಿಕೆ ನೀಡಿದ್ದಾರೆ.