ಸಾರಾಂಶ
ರಾಜ್ಯದ ಮಲೆನಾಡು ಮತ್ತು ಕರಾವಳಿಯಲ್ಲಿ ಉತ್ತಮ ಮಳೆಯಾಗುತ್ತಿದೆ. ಇದೇ ವೇಳೆ, ಬೆಳಗಾವಿಯ ಪಶ್ಚಿಮಘಟ್ಟ ಹಾಗೂ ನೆರೆಯ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ ನದಿ ಒಳಹರಿವಿನ ಪ್ರಮಾಣ ಏರಿಕೆಯಾಗುತ್ತಿದೆ.
ಕನ್ನಡಪ್ರಭ ವಾರ್ತೆ ಬೆಳಗಾವಿ/ಬೆಂಗಳೂರು
ರಾಜ್ಯದ ಮಲೆನಾಡು ಮತ್ತು ಕರಾವಳಿಯಲ್ಲಿ ಉತ್ತಮ ಮಳೆಯಾಗುತ್ತಿದೆ. ಇದೇ ವೇಳೆ, ಬೆಳಗಾವಿಯ ಪಶ್ಚಿಮಘಟ್ಟ ಹಾಗೂ ನೆರೆಯ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ ನದಿ ಒಳಹರಿವಿನ ಪ್ರಮಾಣ ಏರಿಕೆಯಾಗುತ್ತಿದೆ.ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಮಾಂಜರಿ ಬಳಿ ಕೃಷ್ಣಾ ನದಿ ನೀರಿನ ಪ್ರಮಾಣ ಸುಮಾರು ಎರಡು ಅಡಿಯಷ್ಟು ಏರಿಕೆಯಾಗಿದೆ. ಇದರಿಂದಾಗಿ ಮಾಂಜರಿ-ಬಾವನಸವದತ್ತಿ ಸಂಪರ್ಕಿಸುವ ಹಳೆ ಸೇತುವೆ ಜಲಾವೃತಗೊಂಡಿದೆ.
ಜಲಪಾತಗಳಲ್ಲೂ ನೀರು:ಬೆಳಗಾವಿಗೆ ಸಮೀಪದ ಮಹಾರಾಷ್ಟ್ರದ ಚಂದಗಡ ತಾಲೂಕಿನಲ್ಲಿರುವ ಅಂಬೋಲಿ, ಬಾಬಾ ಜಲಪಾತಗಳಲ್ಲಿ ಭಾರೀ ಪ್ರಮಾಣದ ನೀರು ಹರಿದು ಬರುತ್ತಿದ್ದು, ನೋಡುಗರ ಕಣ್ಮನ ಸೆಳೆಯುತ್ತಿವೆ. ಬೆಟ್ಟಗುಡ್ಡಗಳ ಮಧ್ಯೆ, ದಟ್ಟ ಅರಣ್ಯಗಳ ನಡುವೆ ನೆಲೆ ನಿಂತ ಜಲಧಾರೆಗಳೆಲ್ಲವೂ ಹಾಲ್ನೊರೆಯುಕ್ಕಿಸುತ್ತಾ ಹರಿಯುತ್ತಿವೆ.
ಕರಾವಳಿಯಲ್ಲಿ ಉತ್ತಮ ಮಳೆ:ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಮಲೆನಾಡು ಪ್ರದೇಶಗಳಲ್ಲಿ ಶನಿವಾರ ರಾತ್ರಿಯಿಂದೀಚೆಗೆ ಉತ್ತಮ ಮಳೆಯಾಗಿದೆ. ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗಿನ ಹಲವೆಡೆಯೂ ಮಳೆಯಾಗಿದೆ.