ನೂರಡಿ ಗಡಿ ದಾಟಲಿರುವ ಕೆಆರ್‌ಎಸ್ ಅಣೆಕಟ್ಟೆ; ರೈತರಲ್ಲಿ ಮೊಗದಲ್ಲಿ ಮಂದಹಾಸ

| Published : Jul 05 2024, 12:47 AM IST

ನೂರಡಿ ಗಡಿ ದಾಟಲಿರುವ ಕೆಆರ್‌ಎಸ್ ಅಣೆಕಟ್ಟೆ; ರೈತರಲ್ಲಿ ಮೊಗದಲ್ಲಿ ಮಂದಹಾಸ
Share this Article
  • FB
  • TW
  • Linkdin
  • Email

ಸಾರಾಂಶ

ಕೊಡಗು ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೃಷ್ಣರಾಜ ಸಾಗರ ಜಲಾಶಯದ ನೀರಿನ ಮಟ್ಟ ಶುಕ್ರವಾರ ಬೆಳಗ್ಗೆ ವೇಳೆ 100 ಅಡಿ ದಾಟಲಿದೆ. ಗರಿಷ್ಠ ಮಟ್ಟ 124.80 ಅಡಿ ಹೊಂದಿರುವ ಜಲಾಶಯದಲ್ಲಿ ಗುರುವಾರ ರಾತ್ರಿ 8 ಗಂಟೆ ವೇಳೆ 99.70 ಅಡಿ ನೀರು ಸಂಗ್ರಹವಾಗಿತ್ತು. ಶುಕ್ರವಾರ ಬೆಳಗ್ಗೆ ವೇಳೆಗೆ ಅಣೆಕಟ್ಟೆಯಲ್ಲಿ 100 ಅಡಿ ನೀರು ತುಂಬಲಿದ್ದು, ಇದರಿಂದ ಜಿಲ್ಲೆಯ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಕೊಡಗು ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೃಷ್ಣರಾಜ ಸಾಗರ ಜಲಾಶಯದ ನೀರಿನ ಮಟ್ಟ ಶುಕ್ರವಾರ ಬೆಳಗ್ಗೆ ವೇಳೆ 100 ಅಡಿ ದಾಟಲಿದೆ.

ಗರಿಷ್ಠ ಮಟ್ಟ 124.80 ಅಡಿ ಹೊಂದಿರುವ ಜಲಾಶಯದಲ್ಲಿ ಗುರುವಾರ ರಾತ್ರಿ 8 ಗಂಟೆ ವೇಳೆ 99.70 ಅಡಿ ನೀರು ಸಂಗ್ರಹವಾಗಿತ್ತು. ಶುಕ್ರವಾರ ಬೆಳಗ್ಗೆ ವೇಳೆಗೆ ಅಣೆಕಟ್ಟೆಯಲ್ಲಿ 100 ಅಡಿ ನೀರು ತುಂಬಲಿದ್ದು, ಇದರಿಂದ ಜಿಲ್ಲೆಯ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.

ಕಾವೇರಿ ಉಗಮಸ್ಥಾನ ತಲಕಾವೇರಿ, ಭಾಗಮಂಡಲ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಕನ್ನಂಬಾಡಿ ಅಣೆಕಟ್ಟೆಗೆ ಹೆಚ್ಚಿನ ನೀರು ಹರಿದು ಬರುತ್ತಿದೆ. ಗುರುವಾರ ಜಲಾಶಯಕ್ಕೆ 8,669 ಕ್ಯುಸೆಕ್ ನೀರು ಹರಿದು ಬರುತ್ತಿದೆ. ಜಲಾಶಯದಿಂದ 544 ಕ್ಯುಸೆಕ್ ನೀರು ಹೊರ ಬಿಡಲಾಗುತ್ತಿತ್ತು. ಪ್ರಸ್ತುತ 22.577 ಟಿಎಂಸಿ ನೀರು ಸಂಗ್ರಹವಾಗಿದೆ.

ಕಳೆದ ವರ್ಷ ಜುಲೈ 20ರ ನಂತರ ಕೆಆರ್ ಎಸ್ ಅಣೆಕಟ್ಟೆ 100 ದಾಟಿತ್ತು. ಈ ವರ್ಷ ಜುಲೈ ಮೊದಲ ವಾರದಲ್ಲೇ ನೂರಡಿ ದಾಟುತ್ತಿರುವುದು ರೈತರಲ್ಲಿ ಹರ್ಷ ಮೂಡಿಸಿದೆ. ಅಣೆಕಟ್ಟೆ ಸಂಪೂರ್ಣ ತುಂಬುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಜುಲೈ 8 ರಿಂದ ನಾಲೆಗಳಿಗೆ ನೀರು ಬಿಡುಗಡೆ: ಎನ್.ಚಲುವರಾಯಸ್ವಾಮಿಕೆಆರ್‌ಎಸ್ ಜಲಾಶಯದಿಂದ ಜುಲೈ 8ರಂದು ವಿ.ಸಿ.ನಾಲೆ ಸೇರಿದಂತೆ ಎಲ್ಲ ನಾಲೆಗಳಿಗೆ ನೀರು ಬಿಡಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಣೆಕಟ್ಟೆಯಲ್ಲಿ ನೀರಿನ ಮಟ್ಟ 100 ಅಡಿ ದಾಟಲಿದೆ. ಜುಲೈ 6 ರಂದು ಬೆಂಗಳೂರಿನಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ನಡೆಸಿ ಜುಲೈ 8 ರಿಂದ ನಾಲೆಗಳಿಗೆ ನೀರು ಬಿಡುಗಡೆ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಕಳೆದ ಸಾಲಿನಲ್ಲಿ ಬರಗಾಲದ ಹಿನ್ನೆಲೆಯಲ್ಲಿ ರೈತರ ಬೇಡಿಕೆಯಂತೆ ನೀರು ಹರಿಸಲು ಸಾಧ್ಯವಾಗಿಲ್ಲ. ಜಲಾಶಯದಲ್ಲಿ ನೀರಿನ ಮಟ್ಟ 100 ಅಡಿ ತಲುಪಿದ ನಂತರ ನೀರು ಹರಿಸುವುದಾಗಿ ಭರವಸೆ ನೀಡಲಾಗಿತ್ತು. ವಿ.ಸಿ.ನಾಲೆ ಆಧುನೀಕರಣ ಕಾಮಗಾರಿ ನಡೆಯುತ್ತಿದೆ. ರೈತರಿಗೆ ನೀರು ನೀಡಲು ತೊಂದರೆಯಾಗುತ್ತದೆ ಎಂದು ಹಲವು ದೂರುಗಳು ಕೇಳಿ ಬಂದಿತ್ತು. ಇತ್ತೀಚೆಗೆ ಕಾಮಗಾರಿ ನಡೆಯುತ್ತಿರುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಾಲೆಗಳಿಗೆ ನೀರು ಹರಿಸಲು ಯಾವುದೇ ತೊಂದರೆಯಾಗದಂತೆ ವ್ಯವಸ್ಥೆ ಮಾಡಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಲಾಗಿದೆ.

ಜುಲೈ 6ರಂದು ನೀರಾವರಿ ಸಲಹಾ ಸಮಿತಿ ಸಭೆ ನಡೆಸಿ ಜುಲೈ 8ರಿಂದ ನಾಲೆಗಳಿಗೆ ನೀರು ಬಿಡುಗಡೆ ಮಾಡಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ರೈತರು ತಮ್ಮ ಕೃಷಿ ಚಟುವಟಿಕೆಗಳನ್ನು ಪ್ರಾರಂಭಿಸಿ ಕೊಂಡು ಉತ್ತಮ ಬೆಳೆ ಬೆಳೆಯಿರಿ. ರೈತರೊಂದಿಗೆ ಸರ್ಕಾರ ಇದ್ದು, ಅವರ ಶ್ರೇಯೋಭಿವೃದ್ದಿಗೆ ಸದಾ ಚಿಂತಿಸುತ್ತದೆ ಎಂದು ಸಚಿವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕೆಆರ್ ಎಸ್ ಅಣೆಕಟ್ಟೆಯಲ್ಲಿ ನೂತನ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಪರಿಶೀಲನೆ

ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಅಣೆಕಟ್ಟೆಗೆ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಭದ್ರತಾ ಪರಿಶೀಲನೆ ನಡೆಸಿದರು.

ಕೆಆರ್‌ಎಸ್ ಪೊಲೀಸ್ ಠಾಣೆಗೆ ಭೇಟಿ ನೀಡಿದ ನಂತರ ಅಣೆಕಟ್ಟೆಗೂ ಭೇಟಿ ನೀಡಿ ಭದ್ರತಾ ಪರಿಶೀಲನೆ ನಡೆಸಿದರು. ಈ ವೇಳೆ ಸ್ಥಳೀಯ ಅಧಿಕಾರಿಗಳಿಂದ ಮಾಹಿತಿ ಪಡೆದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ಡಿವೈಎಸ್ಪಿ ಮುರಳಿ ಸೇರಿದಂತೆ ಇತರರು ಇದ್ದರು.

ಕೆಆರ್ ಎಸ್ ನೀರಿನ ಮಟ್ಟ

ಗರಿಷ್ಠ ಮಟ್ಟ - 124.80 ಅಡಿ.

ಇಂದಿನ ಮಟ್ಟ - 99.70 ಅಡಿ

ಒಳ ಹರಿವು - 8,669 ಕ್ಯುಸೆಕ್

ಹೊರ ಹರಿವು - 544 ಕ್ಯುಸೆಕ್

ನೀರಿನ ಸಂಗ್ರಹ - 22.577 ಟಿಎಂಸಿ