ಸಾರಾಂಶ
ಕನ್ನಡಪ್ರಭ ವಾರ್ತೆ ಮಡಿಕೇರಿ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮದಡಿ ಜೀವನ ಕೌಶಲ್ಯ ಮತ್ತು ಉದ್ಯಮಶೀಲತೆ ಜಾಗೃತಿ ಕಾರ್ಯಾಗಾರ ಕೂಡಿಗೆಯ ಸ್ವ-ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಡೆಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮ್ತತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಯೂನಿಯನ್ ಬ್ಯಾಂಕ್, ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಸಹಯೋಗದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕ ಪ್ರಕಾಶ್ ಕಾರ್ಯಾಗಾರ ಉದ್ಘಾಟಿಸಿದರು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನಟರಾಜ ಮಾತನಾಡಿ, ಶಿಬಿರಾರ್ಥಿಗಳಿಗೆ ಮಹಿಳಾ ದಿನಾಚರಣೆ ಶುಭಾಶಯಗಳನ್ನು ತಿಳಿಸಿದರು.
ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮದ ಕುರಿತು ವಿವರಿಸುತ್ತಾ ಹೆಣ್ಣು ಮಕ್ಕಳ ಶಿಕ್ಷಣ, ಲಿಂಗಾನುಪಾತ, ಭ್ರೂಣಹತ್ಯೆ, ಜೀವನ ಕೌಶಲ್ಯ ಮತ್ತು ಉದ್ಯಮ ಶೀಲತೆಯ ಪ್ರಾಮುಖ್ಯತೆ ಕುರಿತು ತಿಳಿಸಿದರು.ಮಹಿಳೆಯರಿಗಾಗಿ ಇಲಾಖೆಯಲ್ಲಿರುವ ವಿವಿಧ ಯೋಜನೆಗಳಾದ ಗೃಹಲಕ್ಷ್ಮೀ ಯೋಜನೆ, ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆ, ಸುಕನ್ಯಾ ಸಮೃದ್ಧಿ ಯೋಜನೆ, ಪೋಷಣ್ ಅಭಿಯಾನ ಯೋಜನೆ, ಉದ್ಯೋಗಿನಿ ಯೋಜನೆ, ಸಖಿ ಒನ್ ಸ್ಟಾಪ್ ಸೆಂಟರ್ ಹಾಗೂ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಮುಂತಾದವುಗಳ ಬಗ್ಗೆ ತಿಳಿಸಿದರು.
ಸರ್ಕಾರದಿಂದ ದೊರಕುವ ವಿವಿಧ ಯೋಜನೆಯ ಸೌಲಭ್ಯಗಳು ಮತ್ತು ತರಬೇತಿಗಳನ್ನು ಪಡೆದು ಮಹಿಳೆಯರು ಪರಾವಲಂಬಿಗಳಾಗದೆ ಸ್ವಾವಲಂಬಿಗಳಾಗಿ ಸಮಾಜದಲ್ಲಿ ಉನ್ನತ ಸ್ಥಾನಮಾನಗಳನ್ನು ಗಳಿಸಬೇಕೆಂದು ತಿಳಿಸಿದರು.ಸಖಿ ಒನ್ ಸ್ಟಾಪ್ ಸೆಂಟರ್‌ನ ಆಡಳಿತಾಧಿಕಾರಿ ಪ್ರಭಾವತಿ ನಿರೂಪಿಸಿದರು. ಕಾರ್ಯಾಗಾರದಲ್ಲಿ ಸ್ವ-ಉದ್ಯೋಗ ತರಬೇತಿ ಸಂಸ್ಥೆಯ ಉಪನ್ಯಾಸಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬ್ಬಂದಿ ಹಾಜರಿದ್ದರು.