ಸಾರಾಂಶ
ತುರುವೇಕೆರೆ : ರಾಜ್ಯ ಕಾಂಗ್ರೆಸ್ ಸರ್ಕಾರದ ‘ಗ್ಯಾರಂಟಿ’ ಯೋಜನೆಗಳಿಂದ ನಮ್ಮ ಹಳ್ಳಿಯ ಹೆಣ್ಣುಮಕ್ಕಳು ಸ್ವಲ್ಪ ದಾರಿ ತಪ್ಪಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರ ಈ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ಕುಮಾರಸ್ವಾಮಿಯವರ ಹೇಳಿಕೆಗೆ ಕಾಂಗ್ರೆಸ್ ನಾಯಕರು ಕಿಡಿ ಕಾರಿದ್ದಾರೆ.
ತುಮಕೂರು ಜಿಲ್ಲೆ ತುರುವೇಕೆರೆ ಪಟ್ಟಣದಲ್ಲಿ ಶನಿವಾರ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಪರ ಪ್ರಚಾರ ಭಾಷಣದಲ್ಲಿ ಮಾತನಾಡಿದ ಕುಮಾರಸ್ವಾಮಿ, ರಾಜ್ಯದ ಕಾಂಗ್ರೆಸ್ ಸರ್ಕಾರ ಕಳೆದ ಚುನಾವಣೆಯಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿತ್ತು. ಅವುಗಳನ್ನು ಈಗ ಜಾರಿಗೊಳಿಸಿ, ನಾವು ನುಡಿದಂತೆ ನಡೆದಿದ್ದೇವೆ ಎನ್ನುತ್ತಿದ್ದಾರೆ. ಆದರೆ, ಈ ಗ್ಯಾರಂಟಿ ಯೋಜನೆಗಳ ಜಾರಿಯಿಂದ ನನ್ನ ಹಳ್ಳಿಯ ತಾಯಂದಿರು ಸ್ವಲ್ಪ ದಾರಿ ತಪ್ಪಿದ್ದಾರೆ. ಅವರ ಬದುಕು ಏನಾಗಬೇಕು ಎಂದು ಯೋಚನೆ ಮಾಡಬೇಕಿದೆ ಎಂದರು.
‘ಅವರಿಗೆ ಐದು ಗ್ಯಾರಂಟಿ ಬಿಟ್ಟು ಬೇರೆನಿಲ್ಲಾ. ಆದರೆ, ಕಾಂಗ್ರೆಸ್‌ನವರು ಗ್ಯಾರಂಟಿಗಾಗಿ ಯಾರ ಜೇಬಿಗೆ ಕೈ ಹಾಕಿದ್ದಾರೆ ಎಂಬುದನ್ನು ಪ್ರಶ್ನಿಸಬೇಕು. ನಿಮ್ಮ ಕುಟುಂಬದ ಬದುಕು ಏನಾಗಬೇಕು ಎಂಬುದನ್ನು ನೀವು ಯೋಚನೆ ಮಾಡಬೇಕಿದೆ’ ಎಂದು ನೆರೆದಿದ್ದ ಜನರನ್ನು ಉದ್ದೇಶಿಸಿ ಮಾತನಾಡಿದರು.