ಕುಂದಾಪುರ ಕೋಡಿ ಡಾಲ್ಫಿನ್ ಬೀಚ್ ಅಭಿವೃದ್ಧಿಗೆ ಸಂಸದ ಕೋಟ ಸೂಚನೆ

| Published : Nov 16 2024, 12:36 AM IST

ಕುಂದಾಪುರ ಕೋಡಿ ಡಾಲ್ಫಿನ್ ಬೀಚ್ ಅಭಿವೃದ್ಧಿಗೆ ಸಂಸದ ಕೋಟ ಸೂಚನೆ
Share this Article
  • FB
  • TW
  • Linkdin
  • Email

ಸಾರಾಂಶ

ಉಡುಪಿ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆ ನಡೆಯಿತು.

ಉಡುಪಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆ

ಕನ್ನಡಪ್ರಭ ವಾರ್ತೆ ಮಣಿಪಾಲ

ಕುಂದಾಪುರ ತಾಲೂಕಿನ ಪ್ರವಾಸಿ ತಾಣಗಳಲ್ಲಿ ಒಂದಾದ ಕೋಡಿ ಕಡಲ ತೀರದ 26.50 ಎಕರೆ ಜಮೀನನ್ನು ಪ್ರವಾಸೋದ್ಯಮ ಇಲಾಖೆಗೆ ಹಸ್ತಾಂತರಿಸಬೇಕು. ಈ ಜಾಗವು ಪ್ರವಾಸೋದ್ಯಮಕ್ಕೆ ಪೂರಕವಾಗಿದ್ದು, ಡಾಲ್ಫಿನ್‌ಗಳು ಕಾಣಸಿಗುವ ಜಿಲ್ಲೆಯ ಏಕೈಕ ಪ್ರವಾಸಿ ತಾಣವಾಗಿದೆ. ಇಲ್ಲಿ ಪ್ರವಾಸಿ ಚಟುವಟಿಕೆಗಳನ್ನು ಆಧುನಿಕ ಶೈಲಿಯಲ್ಲಿ ಅಭಿವೃದ್ಧಿಪಡಿಸಬೇಕು ಎಂದು ಉಡುಪಿ - ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಅವರು ಶುಕ್ರವಾರ ಇಲ್ಲಿನ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜಿಲ್ಲೆಗೆ ಕಳೆದ ಸಾಲಿನಲ್ಲಿ 4 ಕೋಟಿಗೂ ಹೆಚ್ಚು ಪ್ರವಾಸಿಗರು ಬಂದು ಹೋಗಿದ್ದಾರೆ. ಹೊರಗಿನಿಂದ ಬರುವ ಪ್ರವಾಸಿಗರಿಗೆ ಅನುಕೂಲವಾಗುವ ಎಲ್ಲ ರೀತಿಯ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವುದರ ಜೊತೆಗೆ ಪ್ರವಾಸಿ ತಾಣಗಳ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಸೂಚನೆ ನೀಡಿದರು.ಕಡಲತೀರಗಳಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಕಾರ್ಯಗಳು, ಜಲಕ್ರೀಡೆ, ಬೋಟಿಂಗ್ ಸೇರಿದಂತೆ ಮತ್ತಿತರ ಚಟುವಟಿಕೆಗಳನ್ನು ಕೈಗೊಳ್ಳುವಾಗ ಪ್ರವಾಸಿಗರ ಸುರಕ್ಷತೆಗೆ ಪ್ರಥಮ ಆದ್ಯತೆ ಒದಗಿಸಬೇಕು. ಈ ಚಟುವಟಿಕೆಗಳನ್ನು ಪ್ರಾರಂಭಿಸುವ ಮುನ್ನ ಸೂಕ್ತ ಪ್ರಾಧಿಕಾರಗಳ ಅನುಮತಿಯನ್ನು ಕಡ್ಡಾಯವಾಗಿ ಪಡೆಯಬೇಕು ಎಂದರು.

ಪಡುಕೆರೆ ಬೀಚ್ ವ್ಯಾಪ್ತಿಯಲ್ಲಿ ಕೆಲವು ಹೋಂ ಸ್ಟೇಗಳಿಗೆ ಅನುಮತಿ ನೀಡಲಾಗಿದೆ. ಇವುಗಳ ಬಗ್ಗೆ ಸ್ಥಳೀಯರು ಆಕ್ಷೇಪಣೆಗಳನ್ನು ಸಹ ಸಲ್ಲಿಸಿದ್ದಾರೆ. ಈ ಬಗ್ಗೆ ಪರಿಶೀಲಿಸಿ, ಕಾನೂನುಬಾಹಿರ ಯಾವುದೇ ರೀತಿಯ ಚಟುವಟಿಕೆಗಳು ಆಗದಂತೆ ಎಚ್ಚರವಹಿಸಬೇಕು ಎಂದವರು ಅಧಿಕಾರಿಗಳಿಗೆ ಸಲಹೆ ನೀಡಿದರು.ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಮಾತನಾಡಿ, ಕಳೆದ 20 ವರ್ಷಗಳಿಂದ ಮಲ್ಪೆ ಬೀಚ್ ಹಾಗೂ ಸೈಂಟ್ ಮೇರೀಸ್ ದ್ವೀಪದ ನಿರ್ವಹಣೆಯನ್ನು ಮಲ್ಪೆ ಅಭಿವೃದ್ಧಿ ಸಮಿತಿಗೆ ನೀಡಲಾಗಿತ್ತು. ಆದರೆ ಪ್ರಸ್ತುತ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿಗೆ ಹಾಗೂ ಸಮಿತಿಯ ಕಾರ್ಯವ್ಯಾಪ್ತಿಗೆ ಕಾನೂನು ತಡೆಯಾಗುತ್ತಿರುವುದರಿಂದ ಇವುಗಳ ನಿರ್ವಹಣೆಯನ್ನು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಗೆ ಹಿಂಪಡೆಯಲಾಗಿದೆ ಎಂದರು.ಮಲ್ಪೆ ಬೀಚಲ್ಲಿ ಫ್ಲೋಟಿಂಗ್ ಬ್ರಿಡ್ಜ್ ಚಟುವಟಿಕೆಯನ್ನು ಖಾಸಗಿಯವರು ನಿರ್ವಹಿಸುತ್ತಿದ್ದು, ಇದರ ಆದಾಯದಲ್ಲಿ ಶೇ.75: 25 ಅಡಿಯಲ್ಲಿ ನಿರ್ವಹಣೆಯನ್ನು ಬೀಚ್ ಅಭಿವೃದ್ಧಿ ಸಮಿತಿಯೇ ನಿರ್ವಹಿಸಬೇಕು ಎಂದವರು ಹೇಳಿದರು.

ಕೇಂದ್ರ ಸರ್ಕಾರದ ಸ್ವದೇಶ ದರ್ಶನ ಯೋಜನೆಯಡಿ ಚಾಲೆಂಜ್ ಬೇಸಡ್ ಡೆಸ್ಟಿನೇಷನ್ ಡೆವಲಪ್‌ಮೆಂಟ್ ಆಧಾರದಲ್ಲಿ 10 ಕೋಟಿ ರು. ವೆಚ್ಚದಲ್ಲಿ ಇಕೋ ಟೂರಿಸಂ ಮತ್ತು ಅಮೃತ್ ಧರೋಹರ್ ಸೈಟ್‌ಗಳ ಅಭಿವೃದ್ಧಿಗೊಳಿಸಲಾಗುವುದು. ಪಡುಕೆರೆಯಿಂದ ಕಾಪುವರೆಗೆ ಸೈಕಲ್ ಟ್ರ್ಯಾಕ್‌ಗಳನ್ನೊಳಗೊಂಡಂತೆ ವಿವಿಧ ಸೌಲಭ್ಯಗಳನ್ನು ಒಳಗೊಂಡ ಯೋಜನಾ ವರದಿಯನ್ನು ಸಿದ್ಧಪಡಿಸಲಾಗಿದೆ ಎಂದರು.ಸಭೆಯಲ್ಲಿ ಶಾಸಕರಾದ ಯಶ್‌ಪಾಲ್ ಎ ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ಜಿಪಂ ಸಿಇಒ ಪ್ರತೀಕ್ ಬಾಯಲ್, ಎಸ್ಪಿ ಡಾ. ಅರುಣ್ ಕೆ., ಎಡಿಸಿ ಮಮತಾ ದೇವಿ ಜಿ.ಎಸ್., ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಸಿ.ಯು., ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.