ಕುಂಡ್ಯೋಳಂಡ ಹಾಕಿ ಕಾರ್ನಿವಲ್ 30ರಂದು ಉದ್ಘಾಟನೆ

| Published : Mar 27 2024, 01:01 AM IST

ಕುಂಡ್ಯೋಳಂಡ ಹಾಕಿ ಕಾರ್ನಿವಲ್ 30ರಂದು ಉದ್ಘಾಟನೆ
Share this Article
  • FB
  • TW
  • Linkdin
  • Email

ಸಾರಾಂಶ

‘ಕುಂಡ್ಯೋಳಂಡ ಹಾಕಿ ಕಾರ್ನಿವಲ್ 2024’ ಶನಿವಾರ ಬೆಳಗ್ಗೆ 10.30ಕ್ಕೆ ನಾಪೋಕ್ಲು ಕೆಪಿಎಸ್ ಶಾಲೆಯ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಉದ್ಘಾಟನೆಗೊಳ್ಳಲಿದೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಅಜ್ಜಿಕುಟ್ಟೀರ ಎಸ್.ಪೊನ್ನಣ್ಣ ಹಾಕಿ ಹಬ್ಬ ಉದ್ಘಾಟಿಸಲಿದ್ದಾರೆ. ಏ.೨೮ರ ತನಕ ಹಾಕಿ ಕೂಟ ನಡೆಯಲಿದೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ಕೊಡವ ಕುಟುಂಬಗಳ ನಡುವಿನ 24ನೇ ಹಾಕಿ ಹಬ್ಬ ಪ್ರತಿಷ್ಠಿತ ‘ಕುಂಡ್ಯೋಳಂಡ ಹಾಕಿ ಕಾರ್ನಿವಲ್ 2024’ ಶನಿವಾರ ಬೆಳಗ್ಗೆ 10.30ಕ್ಕೆ ನಾಪೋಕ್ಲು ಕೆಪಿಎಸ್ ಶಾಲೆಯ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಉದ್ಘಾಟನೆಗೊಳ್ಳಲಿದೆ.

ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಅಜ್ಜಿಕುಟ್ಟೀರ ಎಸ್.ಪೊನ್ನಣ್ಣ ಹಾಕಿ ಹಬ್ಬ ಉದ್ಘಾಟಿಸಲಿದ್ದಾರೆ ಎಂದು ಕೊಡವ ಹಾಕಿ ಅಕಾಡೆಮಿಯ ಅಧ್ಯಕ್ಷ ಪಾಂಡಂಡ ಕೆ.ಬೋಪಣ್ಣ, ಹಾಕಿ ಹಬ್ಬದ ಅಧ್ಯಕ್ಷ ರಮೇಶ್ ಮುದ್ದಯ್ಯ ಹಾಗೂ ಸಂಚಾಲಕ ಕುಂಡ್ಯೋಳಂಡ ದಿನೇಶ್ ಕಾರ್ಯಪ್ಪ ತಿಳಿಸಿದ್ದಾರೆ.

ಇದಕ್ಕೂ ಮೊದಲು ನಾಪೋಕ್ಲು ಶ್ರೀ ರಾಮ ಮಂದಿರದಿಂದ ಜನರಲ್ ತಿಮ್ಮಯ್ಯ ಕ್ರೀಡಾಂಗಣದವರೆಗೆ ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಮೆರವಣಿಗೆ ಸಾಗಲಿದೆ. ಮೈದಾನದಲ್ಲಿ ಪಥಸಂಚಲನ ಮತ್ತು ಧ್ವಜಾರೋಹಣವಾದ ನಂತರ ‘ಸಾಯಿ ಮಡಿಕೇರಿ’ ಬಾಲಕಿಯರು ಹಾಗೂ ‘ಕೂರ್ಗ್ 11’ ಬಾಲಕಿಯರ ನಡುವೆ ಪ್ರದರ್ಶನ ಪಂದ್ಯ ಆಯೋಜಿಸಲಾಗಿದೆ. ಕೊಡವ ಸಾಂಸ್ಕೃತಿಕ ಕಾರ್ಯಕ್ರಮದ ಬಳಿಕ ಹಾಕಿ ಹಬ್ಬ ಉದ್ಘಾಟನೆ ಮತ್ತು ವಿಶೇಷ ಅಂಚೆ ಲಕೋಟೆ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ‘ಇಂಡಿಯನ್ ನೇವಿ’ ಮತ್ತು ‘ಕೂರ್ಗ್ 11’ ತಂಡಗಳ ನಡುವಿನ ಉದ್ಘಾಟನಾ ಪಂದ್ಯ ಗಮನ ಸೆಳೆಯಲಿದೆ.

ಕುಂಡ್ಯೋಳಂಡ ಕುಟುಂಬದ ಪಟ್ಟೆದಾರರಾದ ಕುಂಡ್ಯೋಳಂಡ ಎ.ನಾಣಯ್ಯ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಗೌರವ ಅತಿಥಿಗಳಾಗಿ ಮೈಸೂರು- ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ, ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ, ಖ್ಯಾತ ಬರಹಗಾರ ಕಂಬೀರಂಡ ಕಾವೇರಿ ಪೊನ್ನಪ್ಪ, ಹಾಕಿ ಕರ್ನಾಟಕದ ಪ್ರಧಾನ ಕಾರ್ಯದರ್ಶಿ, ಒಲಂಪಿಯನ್ ಡಾ.ಅಂಜಪರವಂಡ ಬಿ.ಸುಬ್ಬಯ್ಯ, ಹಾಕಿ ವಿಶ್ವ ಕಪ್ ವಿಜೇತ ಪೈಕೇರ ಈ. ಕಾಳಯ್ಯ, ಒಲಂಪಿಯನ್ ಲೆ.ಕ.ಬಾಳೆಯಡ ಕೆ.ಸುಬ್ರಮಣಿ, ಉದ್ಯಮಿ ಶೆರಿ ಸಬಾಸ್ಟಿಯನ್, ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ವೆಂಕಟ್ ರಾಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಮಾಜಿ ಕಾನೂನು ಸಚಿವ ಎಂ.ಸಿ.ನಾಣಯ್ಯ, ಮಾಜಿ ಶಾಸಕರಾದ ಮಂಡೇಪಂಡ ಅಪ್ಪಚ್ಚು ರಂಜನ್, ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯರಾದ ಶಾಂತೆಯಂಡ ವೀಣಾ ಅಚ್ಚಯ್ಯ, ಮಂಡೇಪಂಡ ಸುನೀಲ್ ಸುಬ್ರಮಣಿ, ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಮನ್ ಸುಬ್ರಮಣಿ, ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷ ಮುದ್ದಂಡ ನಾಣಯ್ಯ, ಹಾಕಿ ಕೂರ್ಗ್ ಅಧ್ಯಕ್ಷ ಪಾಲಂಗಡ ಲವ, ನಾಪೋಕ್ಲು ಗ್ರಾ.ಪಂ. ಅಧ್ಯಕ್ಷೆ ವನಜಾಕ್ಷಿ, ಕೊಡಗು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೊಡಂದೇರ ಬಾಂಡ್ ಗಣಪತಿ, ಉಪಾಧ್ಯಕ್ಷ ಕೇಟೋಳಿರ ಹರೀಶ್ ಪೂವಯ್ಯ, ವೆಸ್ಟ್ ಕೊಳಕೇರಿ ಗ್ರಾಮಾಭಿವೃದ್ಧಿ ಸಂಘದ ಅಧ್ಯಕ್ಷ ಕೇಟೋಳಿರ ಕುಟ್ಟಪ್ಪ ಹಾಗೂ ನಾಪೋಕ್ಲು ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಪ್ರಾಂಶುಪಾಲರಾದ ಮೇದುರ ವಿಶಾಲ್ ಪಾಲ್ಗೊಳ್ಳಿದ್ದಾರೆ ಎಂದು ಪಾಂಡಂಡ ಕೆ.ಬೋಪಣ್ಣ, ರಮೇಶ್ ಮುದ್ದಯ್ಯ ಹಾಗೂ ಸಂಚಾಲಕ ಕುಂಡ್ಯೋಳಂಡ ದಿನೇಶ್ ಕಾರ್ಯಪ್ಪ ಮಾಹಿತಿ ನೀಡಿದ್ದಾರೆ.

ತಿಂಗಳ ಕಾಲ ಹಾಕಿ ಹಬ್ಬ ನಡೆಯಲಿದ್ದು, ಏ.28 ರಂದು ಅಂತಿಮ ಪಂದ್ಯಾಟದ ಮೂಲಕ ಹಬ್ಬಕ್ಕೆ ತೆರೆ ಬೀಳಲಿದೆ.