ಕರ್ನಾಟಕ ಅನುದಾನರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘದ (ಕುಪ್ಮಾ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಆಶ್ರಯದಲ್ಲಿ ಬೆಳ್ತಂಗಡಿಯ ಸಿರಿ ಮಾತೃಶ್ರೀ ಕೈಗಾರಿಕಾ ಪಾರ್ಕ್ ನ ಸಭಾಂಗಣದಲ್ಲಿ ನಡೆದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ
ಬೆಳ್ತಂಗಡಿ: ಅನುದಾನರಹಿತ ಶಿಕ್ಷಣ ಸಂಸ್ಥೆಗಳು ಯಾವುದೇ ಸರ್ಕಾರಿ ಅನುದಾನವಿಲ್ಲದೆ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದು, ವಿದ್ಯಾರ್ಥಿಗಳ ದಾಖಲಾತಿ ಮತ್ತು ಫಲಿತಾಂಶದಲ್ಲೂ ಮುಂಚೂಣಿಯಲ್ಲಿವೆ. ಆದರೆ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವಾಗ ಸರ್ಕಾರ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಬೇಸರದ ಸಂಗತಿ ಎಂದು ಕುಪ್ಮಾ ರಾಜ್ಯ ಸಮಿತಿಯ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಹೇಳಿದರು.ಕರ್ನಾಟಕ ಅನುದಾನರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘದ (ಕುಪ್ಮಾ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಆಶ್ರಯದಲ್ಲಿ ಬೆಳ್ತಂಗಡಿಯ ಸಿರಿ ಮಾತೃಶ್ರೀ ಕೈಗಾರಿಕಾ ಪಾರ್ಕ್ ನ ಸಭಾಂಗಣದಲ್ಲಿ ನಡೆದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಕಾರ್ಯಕ್ರಮ ಉದ್ಘಾಟಿಸಿದ ಕುಪ್ಮಾ ರಾಜ್ಯ ಸಮಿತಿಯ ಗೌರವಾಧ್ಯಕ್ಷ ಡಾ. ಎಂ.ಬಿ. ಪುರಾಣಿಕ್ ಮಾತನಾಡಿ, ಶಿಕ್ಷಣ ಕ್ಷೇತ್ರದಲ್ಲಿ ನಿರಂತರ ಬದಲಾವಣೆಗಳು ಹಾಗೂ ಹಲವು ಸಮಸ್ಯೆಗಳು ಎದುರಾಗುತ್ತಿದ್ದು, ಅನುದಾನರಹಿತ ಶಿಕ್ಷಣ ಸಂಸ್ಥೆಗಳು ಸಂಕಷ್ಟ ಅನುಭವಿಸುತ್ತಿವೆ. ಕೊರೊನಾ ಅವಧಿಯಲ್ಲಿ ಶುಲ್ಕ ಸಂಗ್ರಹವಾಗದೆ ಅನೇಕ ಸಂಸ್ಥೆಗಳು ತೀವ್ರ ಆರ್ಥಿಕ ತೊಂದರೆ ಎದುರಿಸಿದ್ದವು. ಇಂತಹ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಕುಪ್ಮಾ ಸ್ಥಾಪನೆಯಾಗಿದೆ ಎಂದರು.ಎಸ್‌ಡಿಎಂ ಶಿಕ್ಷಣ ಸಂಸ್ಥೆ, ಉಜಿರೆಯ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್. ಮಾತನಾಡಿ, ಅನುದಾನರಹಿತ ಶಿಕ್ಷಣ ಸಂಸ್ಥೆಗಳು ಗುಣಮಟ್ಟದ ಶಿಕ್ಷಣದ ಮೂಲಕ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ. ಶಿಕ್ಷಣ ನೀತಿಗಳನ್ನು ರೂಪಿಸುವಾಗ ಶಿಕ್ಷಣ ತಜ್ಞರ ಸಲಹೆಗಳನ್ನು ಪಡೆಯಬೇಕು. ಪ್ರಶಸ್ತಿಗಳಿಗೆ ಶಿಕ್ಷಕರನ್ನು ಆಯ್ಕೆ ಮಾಡುವ ಸಂದರ್ಭದಲ್ಲಿಯೂ ಅನುದಾನರಹಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕರ ಸಾಧನೆಯನ್ನು ಗುರುತಿಸಿ ಗೌರವಿಸಬೇಕು ಎಂದರು.
ಸಿರಿ ಸಂಸ್ಥೆಯ ಆಡಳಿತ ನಿರ್ದೇಶಕ ಜನಾರ್ದನ ಅವರನ್ನು ಸನ್ಮಾನಿಸಲಾಯಿತು.ಕುಪ್ಮಾ ರಾಜ್ಯ ಸಮಿತಿಯ ಗೌರವಾಧ್ಯಕ್ಷ ಡಾ. ಕೆ.ಸಿ. ನಾಯ್ಕ್, ಉಪಾಧ್ಯಕ್ಷ ಡಾ. ಸುಧಾಕರ ಶೆಟ್ಟಿ, ಜಂಟಿ ಕಾರ್ಯದರ್ಶಿ ವಿಶ್ವನಾಥ ಶೇಷಾಚಲ ಹಾಗೂ ಜಿಲ್ಲಾ ಸಮಿತಿಯ ಗೌರವಾಧ್ಯಕ್ಷ ಡಾ. ಸಂಜೀವ ರೈ ಉಪಸ್ಥಿತರಿದ್ದರು.ಜಿಲ್ಲಾ ಕುಪ್ಮಾ ಸಮಿತಿಯ ಕಾರ್ಯದರ್ಶಿ ಡಾ. ಮಂಜುನಾಥ್ ಎಸ್. ರೇವಣಕರ್ ಸ್ವಾಗತಿಸಿದರು. ಜಿಲ್ಲಾ ಸಮಿತಿಯ ಅಧ್ಯಕ್ಷ ಯುವರಾಜ್ ಜೈನ್ ವಂದಿಸಿದರು. ಡಾ. ದಿವಾ ಕೊಕ್ಕಡ ನಿರೂಪಿಸಿದರು. ಆರು ಶಿಕ್ಷಕರಿಗೆ ಸನ್ಮಾನ: ಕಾರ್ಯಕ್ರಮದಲ್ಲಿ ಮೂಡುಬಿದಿರೆಯ ಆಳ್ವಾಸ್ ಪದವಿಪೂರ್ವ ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕ ಪ್ರೊ.ಅನಿಲ್ ಮಸ್ಕರೇನಸ್, ಮೂಡುಬಿದಿರೆಯ ಎಕ್ಸ್ ಲೆಂಟ್ ಪದವಿಪೂರ್ವ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕ ಡಾ. ಪ್ರಶಾಂತ ರಾಮಚಂದ್ರ ಹೆಗ್ಡೆ, ಉಜಿರೆಯ ಎಸ್ ಡಿಎಂ ಪದವಿಪೂರ್ವ ಕಾಲೇಜಿನ ಸಂಸ್ಕೃತ ಪ್ರಾಧ್ಯಾಪಕ ಡಾ. ಪ್ರಸನ್ನ ಕುಮಾರ್ ಐತಾಳ್, ಶ್ರೀ ಶಾರದಾ ಪದವಿಪೂರ್ವ ಕಾಲೇಜಿನ ಪ್ರಿನ್ಸಿಪಾಲ್ ಪ್ರೊ. ಪ್ರಕಾಶ್ ನಾಯಕ್ ಕೆ., ಶ್ರೀ ರಾಮಕೃಷ್ಣ ಪದವಿಪೂರ್ವ ಕಾಲೇಜಿನ ಪ್ರಿನ್ಸಿಪಾಲ್ ಯಶೋದಾ ಯು. ಶೆಟ್ಟಿ ಹಾಗೂ ಮಂಗಳೂರಿನ ಎಕ್ಸ್ ಪರ್ಟ್ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಕರುಣಾಕರ ಬಳ್ಳೂರು ಅವರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.