ಕುಶಾಲನಗರ: ಭಾರತ್‌ ಸ್ಕೌಟ್ಸ್‌ ಗೈಡ್ಸ್‌ ಧ್ವಜ ದಿನಾಚರಣೆ

| Published : Nov 07 2024, 11:59 PM IST

ಸಾರಾಂಶ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಧ್ವಜ ದಿನಾಚರಣೆ ಹಾಗೂ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕುಶಾಲನಗರ ತಾಲೂಕು ಸ್ಥಳೀಯ ಸಂಸ್ಥೆಯ ವತಿಯಿಂದ ಕುಶಾಲನಗರ ತಹಸೀಲ್ದಾರ್ ಕಾರ್ಯಾಲಯದ ಆವರಣದಲ್ಲಿ ಧ್ವಜ ದಿನಾಚರಣೆ ನಡೆಯಿತು.

ಕನ್ನಡಪ್ರಭ ವಾರ್ತೆ ಕುಶಾಲನಗರ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಧ್ವಜ ದಿನಾಚರಣೆ ಹಾಗೂ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕುಶಾಲನಗರ ತಾಲೂಕು ಸ್ಥಳೀಯ ಸಂಸ್ಥೆಯ ವತಿಯಿಂದ ಕುಶಾಲನಗರ ತಹಸೀಲ್ದಾರ್ ಕಾರ್ಯಾಲಯದ ಆವರಣದಲ್ಲಿ ಧ್ವಜ ದಿನಾಚರಣೆ ನಡೆಯಿತು.

ಧ್ವಜ ಚೀಟಿಯನ್ನು ಕುಶಾಲನಗರ ತಹಸೀಲ್ದಾರ್ ಕಿರಣ್ ಗೌರಯ್ಯ ಬಿಡುಗಡೆ ಮಾಡಿದರು.

ಈ ಸಂದರ್ಭ ಮಾತನಾಡಿದ ಅವರು, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ವಿದ್ಯಾರ್ಥಿಗಳಲ್ಲಿ ದೇಶಭಕ್ತಿ ಹಾಗೂ ದೇಶದ ಕುರಿತಾದ ಕರ್ತವ್ಯಗಳನ್ನು ತಿಳಿಹೇಳುವ ಕಾರ್ಯ ಮಾದರಿಯಾಗಿದೆ ಎಂದರು.

ಧ್ವಜ ದಿನಾಚರಣೆ ಮಹತ್ವ ಕುರಿತು ಮಾಹಿತಿ ನೀಡಿದ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕುಶಾಲನಗರ ತಾಲೂಕು ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಡಾ. ಪ್ರವೀಣ್ ದೇವರಗುಂಡ ಸೋಮಪ್ಪ ಮಾತನಾಡಿ, ವಿಶ್ವಾದ್ಯಂತ ಸ್ಥಾಪನೆಗೊಂಡು ಸಾಮಾಜಿಕ ಚಳವಳಿಯಲ್ಲಿ ತೊಡಗಿರುವ

ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ವಿದ್ಯಾರ್ಥಿಗಳು ಹಾಗೂ ಯುವ ಸಮುದಾಯದಲ್ಲಿ ಶಿಸ್ತು- ಸಂಯಮ ಹಾಗೂ ಉತ್ತಮ ನಾಯಕತ್ವ ಗುಣಗಳನ್ನು ಬೆಳೆಸುವ ಮೂಲಕ ದೇಶದ ಪ್ರಗತಿಗೆ ಪ್ರತಿಯೊಬ್ಬರೂ ಸಂಕಲ್ಪ ಹೊಂದಬೇಕೆಂಬ ಸದಾಶಯಗಳನ್ನು ಹೊಂದಿದೆ ಎಂದರು.

ದೇಶದಲ್ಲಿ 1950 ರಲ್ಲಿ ಅಂದಿನ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರು ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಗಳನ್ನು ಒಟ್ಟುಗೂಡಿಸಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಎಂದು ಸ್ಥಾಪಿಸಿದ ನೆನಪಿಗಾಗಿ ಪ್ರತಿ ವರ್ಷ ನ.1 ರಂದು ರಾಷ್ಟ್ರದಾದ್ಯಂತ ಧ್ವಜ ದಿನ ಮತ್ತು ಸಂಸ್ಥಾಪನಾ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಸಂಸ್ಥೆಯ ಜಿಲ್ಲಾ ಸಾರ್ವಜನಿಕ ಸಂಪರ್ಕಾಧಿಕಾರಿ ಟಿ.ಜಿ.ಪ್ರೇಮಕುಮಾರ್, ಭ್ರಾತೃತ್ವ ಹಾಗೂ ಭಾವೈಕ್ಯತೆಯ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು.

ಶಿರಸ್ತೇದಾರ್ ಬಿ.ಪಿ.ಅನಿತ, ಕಂದಾಯಾಧಿಕಾರಿ ಸಂತೋಷ್, ಸ್ಕೌಟ್ಸ್, ಗೈಡ್ಸ್ ನ ಕುಶಾಲನಗರ ಸಂಸ್ಥೆಯ ಉಪಾಧ್ಯಕ್ಷ ಕೆ.ವಿ.ಅರುಣ್, ಕೆ.ಪಿ.ರಾಜು, ಕಾರ್ಯದರ್ಶಿ ಎಂಎಸ್.ಗಣೇಶ್ , ಸಹ ಕಾರ್ಯದರ್ಶಿ ಎಸ್.ಆರ್.ಶಿವಲಿಂಗ, ಮುಳ್ಳುಸೋಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗೈಡ್ಸ್ ವಿದ್ಯಾರ್ಥಿಗಳು, ಕಂದಾಯ ಇಲಾಖೆಯ ಸಿಬ್ಬಂದಿ ಇದ್ದರು.