ಕುಶಾಲನಗರ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರ ಹೆಚ್ಚುವರಿ ಡಯಾಲಿಸಿಸ್ ಯಂತ್ರಗಳ ಉದ್ಘಾಟನೆ

| Published : Nov 16 2024, 12:37 AM IST

ಕುಶಾಲನಗರ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರ ಹೆಚ್ಚುವರಿ ಡಯಾಲಿಸಿಸ್ ಯಂತ್ರಗಳ ಉದ್ಘಾಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಕುಶಾಲನಗರ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ರೋಟರಿ ಸಂಸ್ಥೆಯ ಕೋರಿಕೆ ಮೇರೆಗೆ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ವತಿಯಿಂದ ಕೊಡುಗೆಯಾಗಿ ನೀಡಲಾದ ಎರಡು ಡಯಾಲಿಸಿಸ್ ಯಂತ್ರ ಗಳನ್ನು ಶುಕ್ರವಾರ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಕುಶಾಲನಗರ

ತಾಲೂಕು ಕೇಂದ್ರ ಕುಶಾಲನಗರ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ರೋಗಿಗಳ ಅನುಕೂಲಕ್ಕಾಗಿ ವೈಯಕ್ತಿಕವಾಗಿ ಆ್ಯಂಬುಲೆನ್ಸ್ ವಾಹನ ಕೊಡುಗೆ ನೀಡುವುದಾಗಿ ಶಾಸಕ ಡಾ.ಮಂತರ್ ಗೌಡ ಭರವಸೆ ನೀಡಿದ್ದಾರೆ.

ಕುಶಾಲನಗರ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ರೋಟರಿ ಸಂಸ್ಥೆಯ ಕೋರಿಕೆ ಮೇರೆಗೆ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ವತಿಯಿಂದ ಕೊಡುಗೆಯಾಗಿ ನೀಡಲಾದ ಎರಡು ಡಯಾಲಿಸಿಸ್ ಯಂತ್ರ ಗಳನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರದಿಂದ ನಾಲ್ಕು ಡಯಾಲಿಸಿಸ್ ಯಂತ್ರಗಳನ್ನು ಆಸ್ಪತ್ರೆಗೆ ಮಂಜೂರು ಮಾಡಿಸಿ ಡಯಾಲಿಸಿಸ್ ಕೇಂದ್ರಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ. ಇದೀಗ ಹೆಚ್ಚುವರಿಯಾಗಿ ಎರಡು ಡಯಾಲಿಸಿಸ್ ಯಂತ್ರಗಳನ್ನು ಸೆಂಟ್ರಲ್ ಬ್ಯಾಂಕ್ ನೀಡಿದೆ. ಇದರಿಂದ ತಾಲೂಕಿನಲ್ಲಿ ಮೂತ್ರಕೋಶದ ತೊಂದರೆ ಯಿಂದ ಬಳಲುತ್ತಿರುವ ಬಡ ರೋಗಿಗಳಿಗೆ ಡಯಾಲಿಸಿಸ್ ಕೇಂದ್ರದಿಂದ ಹೆಚ್ಚು ಅನುಕೂಲವಾಗಲಿದೆ ಎಂದರು.

ಇತ್ತೀಚಿನ ದಿನಗಳಲ್ಲಿ ಮೂತ್ರಕೋಶ ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳ ಸಂಖ್ಯೆ ಅಧಿಕವಾಗುತ್ತಿದೆ. ರೋಗಿಗಳು ಡಯಾಲಿಸಿಸ್ ಕೇಂದ್ರದ ಸೌಲಭ್ಯವನ್ನು ಸದುಪಯೋಗ ಮಾಡಿಕೊಂಡು ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ರೋಟರಿ ಸಂಸ್ಥೆಯ ಜಿಲ್ಲಾ ಯೋಜನಾ ಮುಖ್ಯಸ್ಥ ಎಸ್.ಕೆ.ಸತೀಶ್ ಮಾತನಾಡಿ, ರೋಟರಿ ಅಂತಾರಾಷ್ಟ್ರೀಯ ಸಂಸ್ಥೆಯಾಗಿದ್ದು, ಮಾನವ ಸೇವೆಯೇ ಮೂಲ ಉದ್ದೇಶವಾಗಿದೆ. ಈ ಹಿನ್ನೆಲೆಯಲ್ಲಿ ರೋಟರಿ ಸಂಸ್ಥೆಯ ಕೋರಿಕೆ ಮೇರೆಗೆ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಹಿರಿಯ ಅಧಿಕಾರಿಗಳು ನಮ್ಮ ಕೋರಿಕೆಗೆ ಸ್ಪಂದಿಸಿ ಎರಡು ಡಯಾಲಿಸಿಸ್ ಯಂತ್ರ ಗಳನ್ನು ಕುಶಾಲನಗರ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕೊಡುಗೆಯಾಗಿ ನೀಡಿರುವುದಾಗಿ ತಿಳಿಸಿದರು.

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ವಲಯ ಮುಖ್ಯಸ್ಥ ಕೆ.ಧಾರಾಸಿಂಗ್ ನಾಯಕ್ ಮಾತನಾಡಿ, ಸಿಎಸ್ಆರ್ ನಿಧಿಯಿಂದ ರು.15 ಲಕ್ಷ ವೆಚ್ಚದ ಎರಡು ಡಯಾಲಿಸಿಸ್ ಯಂತ್ರಗಳನ್ನು ಕುಶಾಲನಗರ ಸರ್ಕಾರಿ ಆಸ್ಪತ್ರೆಗೆ ನೀಡಲಾಗಿದೆ. ಮುಂದಿನ ದಿನಗಳಲ್ಲೂ ಸಾಮಾಜಿಕ ಸೇವಾ ಕಾರ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ‌.ಸತೀಶ್, ಜಿಲ್ಲಾ ರೋಟರಿ ಗವರ್ನರ್ ವಿಕ್ರಂ ದತ್ತ ಮಾತನಾಡಿದರು. ಕುಶಾಲನಗರ ರೋಟರಿ ಸಂಸ್ಥೆ ಅಧ್ಯಕ್ಷ ಹರೀಶ್ ಅಧ್ಯಕ್ಷತೆ ವಹಿಸಿದ್ದರು.

ಪುರಸಭೆ ಅಧ್ಯಕ್ಷೆ ಜಯಲಕ್ಷ್ಮಿಚಂದ್ರು, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ರೋಟರಿ ಸಂಸ್ಥೆಯ ಸಹಾಯಕ ಗವರ್ನರ್ ಡಾ.ಹರೀಶ್ ಶೆಟ್ಟಿ, ಕುಶಾಲನಗರ ರೋಟರಿ ಸಂಸ್ಥೆ ಕಾರ್ಯದರ್ಶಿ ಕಿರಣ್, ಸೆಂಟ್ರಲ್‌ ಬ್ಯಾಂಕ್ ಮಡಿಕೇರಿ ಶಾಖೆಯ ವ್ಯವಸ್ಥಾಪಕಿ ಪ್ರಿಯಾಂಕಾ, ಕುಶಾಲನಗರ ಶಾಖೆಯ ವ್ಯವಸ್ಥಾಪಕ ರಾಜ್ ಮೋಹನ್ ರೆಡ್ಡಿ , ತಾಲೂಕು ವೈದ್ಯಾಧಿಕಾರಿ ಡಾ.ಇಂದೂಧರ್, ಸಮುದಾಯ ಆರೋಗ್ಯ ಕೇಂದ್ರದ ಮುಖ್ಯಸ್ಥ

ಡಾ.ಮಧುಸೂದನ್, ಡಯಾಲಿಸಿಸ್ ಕೇಂದ್ರದ ರಮ್ಯಪೂಜಾರಿ ಹಾಗೂ ರೋಟರಿ ಸದಸ್ಯರು ಇದ್ದರು.