ಸಾರಾಂಶ
ಕನ್ನಡಪ್ರಭ ವಾರ್ತೆ ಕುಶಾಲನಗರಕುಶಾಲನಗರ ತಾಲೂಕು ತ್ರೈಮಾಸಿಕ ಕೆಡಿಪಿ ಸಭೆ ಕೂಡಿಗೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯಿತು.ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ, ಗ್ರಾಮ ಪಂಚಾಯಿತಿ ಮಟ್ಟದ ಅಭಿವೃದ್ಧಿ ಹಾಗೂ ಪ್ರಗತಿಪರಿಶೀಲನೆ ಬಗ್ಗೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಮಗ್ರವಾಗಿ ಚರ್ಚೆ ನಡೆಸಲಾಯಿತು.ನಂತರ ಮಾತನಾಡಿದ ಶಾಸಕ ಡಾ.ಮಂತರ್ ಗೌಡ, ಜಿಲ್ಲೆಯಲ್ಲಿ ವಿದ್ಯುತ್ ಸರಬರಾಜು ವ್ಯವಸ್ಥೆಯನ್ನು ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ಸಮರ್ಪಕಗೊಳಿಸುವ ಸಂಬಂಧ ರಾಜ್ಯ ಸರ್ಕಾರ 220 ಕೋಟಿ ರು. ಅನುದಾನ ಕಲ್ಪಿಸಿದೆ ಎಂದು ಮಾಹಿತಿ ನೀಡಿದರು.ಚೆಸ್ಕಾಂಗೆ ಅನುದಾನ ಹಂಚಿಕೆ:
ಜಿಲ್ಲೆಯಲ್ಲಿ ಐದು ಉಪ ವಿಭಾಗಗಳಿಗೆ ತಲಾ 40 ಕೋಟಿ ರು.ನಿಂದ 50 ಕೋಟಿ ರು.ಗಳ ಅನುದಾನ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮಕ್ಕೆ ಬಿಡುಗಡೆಯಾಗಿದ್ದು, ಈ ಮೂಲಕ ಅಗತ್ಯವಿರುವ ತಂತ್ರಜ್ಞಾನಗಳೊಂದಿಗೆ ಸಮರ್ಪಕ ವಿದ್ಯುತ್ ಪೂರೈಕೆ, ಗ್ರಾಮೀಣ ಭಾಗಗಳಲ್ಲಿ ವಿದ್ಯುತ್ ಕಂಬಗಳ ಮತ್ತು ಟ್ರಾನ್ಸ್‌ಫಾರ್ಮರ್‌ಗಳ ಬದಲಾವಣೆ, ಸ್ಥಳಾಂತರ, ಆಧುನಿಕ ತಂತಿಗಳ ಜೋಡಣೆ ಸೇರಿದಂತೆ ವಿವಿಧ ಕಾಮಗಾರಿಗಳನ್ನು ನಡೆಸಲಾಗುವುದು ಎಂದು ಹೇಳಿದರು.ತಾವರೆಕೆರೆ ಅಭಿವೃದ್ಧಿಗೆ 2 ಕೋಟಿ:ಕುಶಾಲನಗರ ಐತಿಹಾಸಿಕ ಕೆರೆ ತಾವರೆಕೆರೆಯ ಅಭಿವೃದ್ಧಿಗಾಗಿ ಈಗಾಗಲೇ ಎರಡು ಕೋಟಿ ರು.ಗಳನ್ನು ಮೀಸಲಿರಿಸಲಾಗಿದ್ದು, ಕೆರೆಯ ಒತ್ತುವರಿ ತೆರವುಗೊಳಿಸಿ ಸಂರಕ್ಷಣೆ ಮಾಡುವ ಮೂಲಕ ಅಭಿವೃದ್ಧಿ ಕಾಮಗಾರಿಗೆ ಈ ತಿಂಗಳ ಅಂತ್ಯದೊಳಗಾಗಿ ಟೆಂಡರ್ ಪ್ರಕ್ರಿಯೆ ನಡೆಸಲಾಗುತ್ತದೆ ಎಂದು ಮಾಹಿತಿ ನೀಡಿದರು.ದುಬಾರೆ ಪ್ರವಾಸಿ ಕೇಂದ್ರದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ತೂಗು ಸೇತುವೆ ನಿರ್ಮಾಣ ಕಾಮಗಾರಿ ಮಾರ್ಚ್ ಅಂತ್ಯದೊಳಗೆ ಆರಂಭಗೊಳ್ಳಲಿದೆ ಎಂದು ತಿಳಿಸಿದರು.ಕುಡಿಯುವ ನೀರಿಗೆ ಕ್ರಿಯಾಯೋಜನೆ:
ಬೇಸಿಗೆ ಅವಧಿಯಲ್ಲಿ ಪಟ್ಟಣ ಮತ್ತು ಗ್ರಾಮಾಂತರ ಪ್ರದೇಶಗಳಿಗೆ ಅಗತ್ಯವಿರುವ ಕುಡಿಯುವ ನೀರಿನ ಸರಬರಾಜು ಬಗ್ಗೆ ಕ್ರಿಯಾಯೋಜನೆ ರೂಪಿಸುವುದು, ಯಾವುದೇ ರೀತಿಯಲ್ಲಿ ನೀರಿನ ದುರುಪಯೋಗ ಆಗದಂತೆ ಎಚ್ಚರವಹಿಸುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಶಾಸಕರು ಕಿವಿಮಾತು ಹೇಳಿದರು.ಅರಣ್ಯದಲ್ಲಿ ಕಾಡಾನೆಗಳು ಸೇರಿದಂತೆ ವನ್ಯಜೀವಿಗಳಿಗೆ ಅಗತ್ಯ ಉಳ್ಳ ಕೆರೆಗಳ ಅಭಿವೃದ್ಧಿ ಹಾಗೂ ಅರಣ್ಯದಲ್ಲಿ ಆಹಾರ ದೊರಕುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಶಾಸಕರು ನಿರ್ದೇಶನ ನೀಡಿದರು.ಗ್ರಾಮೀಣ ಪ್ರದೇಶಗಳಲ್ಲಿ ಜಲಜೀವನ್ ಮಿಷನ್ ಕಾಮಗಾರಿ ಬಹುತೇಕ ವೈಫಲ್ಯ ಕಂಡಿದ್ದು, ತಕ್ಷಣ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚಿಸಲಾಯಿತು.ನಾಗರಿಕರಿಗೆ ಸವಲತ್ತುಗಳನ್ನು ನೀಡುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳು ಸ್ಥಳೀಯ ಗ್ರಾಮ ಪಂಚಾಯಿತಿ ಅಧಿಕಾರಿಗಳೊಂದಿಗೆ ಸಂಪರ್ಕ ಸಾಧಿಸುವುದು ಹಾಗೂ ಯೋಜನೆಗಳ ಅನುಷ್ಠಾನ ಯಶಸ್ವಿಯಾಗುವಂತೆ ನೋಡಿಕೊಳ್ಳುವುದು ಜವಾಬ್ದಾರಿಯಾಗಿದೆ ಎಂದು ಹೇಳಿದರು.ಕಾರ್ಮಿಕ ಇಲಾಖೆ ಮೂಲಕ ಫಲಾನುಭವಿಗಳಿಗೆ ದೊರಕುವ ಸೌಲಭ್ಯಗಳನ್ನು ಸಮರ್ಪಕವಾಗಿ ಲಭ್ಯವಾಗುವಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸುವುದರೊಂದಿಗೆ ಈ ಬಗ್ಗೆ ಜನರಿಗೆ ಮಾಹಿತಿ ನೀಡುವ ಕೆಲಸ ಆಗಬೇಕಾಗಿದೆ ಎಂದರು.ಕಂದಾಯ ಇಲಾಖೆ, ಆಹಾರ ಇಲಾಖೆ, ಕಾರ್ಮಿಕ ಇಲಾಖೆ, ಕುಶಾಲನಗರ ಯೋಜನಾ ಅಭಿವೃದ್ಧಿ ಪ್ರಾಧಿಕಾರ, ಪುರಸಭೆ, ಅಬಕಾರಿ ಪೊಲೀಸ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ತಾಲೂಕಿನ ಸಮಗ್ರ ಅಭಿವೃದ್ಧಿ ಬಗ್ಗೆ ಮಾಹಿತಿ ಕಲೆ ಹಾಕಿದ ಶಾಸಕ ಡಾ.ಮಂತರ್ ಗೌಡ, ಮಾರ್ಚ್ ಅಂತ್ಯದೊಳಗೆ ವಿವಿಧ ಇಲಾಖೆ ಹಿರಿಯ ಅಧಿಕಾರಿಗಳ ಜೊತೆ ಹಾಡಿಗಳಿಗೆ ಭೇಟಿ ನೀಡಿ ಸಮಸ್ಯೆಗಳ ಬಗ್ಗೆ ಪರಿಶೀಲಿಸಿ ಸ್ಥಳದಲ್ಲಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. ಸಭೆಗೆ ಗೈರು ಹಾಜರಾದ ಅಧಿಕಾರಿಗಳಿಗೆ ತಕ್ಷಣ ನೋಟಿಸ್ ನೀಡಿ ಕ್ರಮ ಕೈಗೊಳ್ಳುವಂತೆ ಶಾಸಕರು ಸಭೆಯಲ್ಲಿ ಹಿರಿಯ ಅಧಿಕಾರಿಗಳಿಗೆ ಸೂಚಿಸಿದರು.ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ್ವರ್ ಕುಮಾರ್, ಕುಶಾಲನಗರ ತಾಲೂಕು ತಹಸೀಲ್ದಾರ್ ಕಿರಣ್ ಗೌರಯ್ಯ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್ ಮತ್ತು ಕೆಡಿಪಿ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.