ಸರ್ಕಾರವು ಸಾರ್ವಜನಿಕರ ಕುಂದುಕೊರತೆ ಆಲಿಸಿ ಸ್ಥಳದಲ್ಲಿಯೇ ಅಥವಾ ತ್ವರಿತಗತಿಯಲ್ಲಿ ಪರಿಹಾರ ನೀಡುವ ಉದ್ದೇಶದಿಂದ ಪ್ರಜಾಸೇವಾ ಆಂದೋಲನ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತಿದೆ ಎಂದು ಶಾಸಕ ಡಾ.ಮಂತರ್ ಗೌಡ ಹೇಳಿದರು.

ಕುಶಾಲನಗರ: ಸರ್ಕಾರವು ಸಾರ್ವಜನಿಕರ ಕುಂದುಕೊರತೆ ಆಲಿಸಿ ಸ್ಥಳದಲ್ಲಿಯೇ ಅಥವಾ ತ್ವರಿತಗತಿಯಲ್ಲಿ ಪರಿಹಾರ ನೀಡುವ ಉದ್ದೇಶದಿಂದ ಪ್ರಜಾಸೇವಾ ಆಂದೋಲನ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತಿದೆ ಎಂದು ಶಾಸಕ ಡಾ.ಮಂತರ್ ಗೌಡ ಹೇಳಿದರು.

ಕುಶಾಲನಗರ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ವತಿಯಿಂದ ಕೂಡಿಗೆ ಡಯಟ್ ಮೈದಾನದಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಜನರ ಬಳಿಗೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ತೆರಳಿ ಅವರ ಸಮಸ್ಯೆಗಳನ್ನು ಆಲಿಸಿ ಬಗೆಹರಿಸಲು ಸೂಚಿಸಿದ ಹಿನ್ನೆಲೆಯಲ್ಲಿ ಪ್ರತಿ ಶನಿವಾರ ಪ್ರಜಾಸೇವಾ ಆಂದೋಲನ ಕಾರ್ಯಕ್ರಮ ನಡೆಸಲಾಗುತ್ತಿದೆ. ಜನ ಸೇವೆಯೇ ಜನಾರ್ದನ ಸೇವೆ ಎಂದು ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಸಾರ್ವಜನಿಕ ಕೆಲಸ‌ ಮಾಡಬೇಕಾಗಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಮಾತನಾಡಿ, ಜನರ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಲು ಸರ್ಕಾರದ ಪ್ರಜಾಸೇವಾ ಎಂಬ ವಿನೂತನ ಕಾರ್ಯಕ್ರಮವನ್ನು ಜಾರಿಗೆ ತಂದಿದೆ. ಈ ಪ್ರಜಾಸೇವಾ ಕಾರ್ಯಕ್ರಮವನ್ನು ಸಕಾಲಕ್ಕೆ ಜೋಡಿಸಲಾಗಿದೆ. ಇದನ್ನು ಅಧಿಕಾರಿಗಳು ಅರ್ಥಮಾಡಿಕೊಳ್ಳಬೇಕು. ಸಮಯಕ್ಕೆ ಸರಿಯಾಗಿ ಸ್ಪಂದಿಸಬೇಕು ಮತ್ತು ಪರಿಹಾರ ಒದಗಿಸಬೇಕು. ಇದರ ಜವಬ್ದಾರಿ ಅರಿತುಕೊಂಡು ಈ ದೇಶದ ಕಾನೂನು ಮತ್ತು ಸಂವಿಧಾನ ಅಡಿಯಲ್ಲಿ ಅಧಿಕಾರಿಗಳು ಪ್ರಾಮಾಣಿಕವಾಗಿ ಸೇವೆ ಸಲ್ಲಿಸಬೇಕು ಎಂದರು.

ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ, ಕಳೆದ ಅನೇಕ ವರ್ಷಗಳಿಂದ ಬಗೆಹರಿಸಲು ಸಾಧ್ಯವಾಗದಂತಹ ಜ್ವಲಂತ ಸಮಸ್ಯೆಗಳನ್ನು ಜನರ ಬಳಿಗೆ ಅಧಿಕಾರಿಗಳು ಹೋಗಿ ಪರಿಹರಿಸಬೇಕು ಎಂಬ ಉದ್ದೇಶದಿಂದ ಇಂತಹ ಜನೋಪಕಾರಿ ಪ್ರಜಾಸೇವಾ ಕಾರ್ಯಕ್ರಮವನ್ನು ಸರ್ಕಾರ ಜಾರಿಗೆ ತಂದಿದೆ ಎಂದರು. ಗ್ರಾಮೀಣ ಭಾಗದ ಜನರು ಹಾಗೂ ಅನಕ್ಷರಸ್ಥ ಸಾರ್ವಜನಿಕ ತಮ್ಮ ಕೆಲಸ ಕಾರ್ಯಗಳಿಗೆ ದಿನನಿತ್ಯ ಕಚೇರಿ ಅಲೆದಾಡುವುದನ್ನು ತಪ್ಪಿಸಲು ಹಾಗೂ ತ್ವರಿತ ನ್ಯಾಯ ಒದಗಿಸಲು ಈ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದೆ. ಸಾರ್ವಜನಿಕ ಈ ಕಾರ್ಯಕ್ರಮ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭ ತಹಸೀಲ್ದಾರ್ ರಮೇಶ್ ಬಾಬು, ತಾಲೂಕು ಪಂಚಾಯಿತಿ ‌ಕಾರ್ಯನಿರ್ವಹಣಾಧಿಕಾರಿ ಅಪ್ಪಣ್ಣ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ‌ ನವೀನ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೃಷ್ಣಪ್ಪ, ಸಮಾಜ ಕಲ್ಯಾಣ ಇಲಾಖೆ ತಾಲೂಕು ಸಹಾಯಕ ನಿರ್ದೇಶಕ ಸಿದ್ದೇಗೌಡ, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ನಾರಾಯಣ ಸ್ವಾಮಿ, ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಪುಟ್ಟಸ್ವಾಮಿ, ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕಿ ಮಿಲನ ಭರತ್, ಪಶುವೈದ್ಯಾಧಿಕಾರಿ ಡಾ.ಸಂಜೀವ್‌ಕುಮಾರ್‌ ಸಿಂಧೆ, ತಾಲೂಕು ಆರೋಗ್ಯಾಧಿಕಾರಿ ಡಾ.ಇಂಧೂಧರ್, ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಇಲಾಖೆ ತಾಲೂಕು ಅಧಿಕಾರಿ ಮೋಹನ್, ಮಹಿಳಾ ಮತ್ತು ‌ಮಕ್ಕಳ ಕಲ್ಯಾಣಾಧಿಕಾರಿ ಶ್ರೀದೇವಿ, ಪುರಸಭೆ ಮುಖ್ಯಾಧಿಕಾರಿ ಕೃಷ್ಣಪ್ರಸಾದ್ ಮತ್ತಿತರರು ಇದ್ದರು.

ಸಮಸ್ಯೆಗಳಿಗೆ ಶಾಸಕರ ಸ್ಪಂದನೆ :

ಕೂಡಿಗೆ, ಕೂಡುಮಂಗಳೂರು, ಹಾರಂಗಿ, ಹುದೂಗೂರ, ಯಡವನಾಡು, ಗುಡ್ಡೆಹೊಸೂರು, ಚಿಕ್ಕತ್ತೂರು, ಕಣಿವೆ, ಮಾದಲಾಪುರ ಸೇರಿದಂತೆ ಸುತ್ತಮುತ್ತಲಿನ ಹತ್ತಾರು ಗ್ರಾಮಗಳಿಂದ ಆಗಮಿಸಿದ್ದ ನೂರಾರು ಜನರು ತಮ್ಮ ಸಮಸ್ಯೆಗಳ ಪರಿಹಾರಕ್ಕೆ 100ಕ್ಕೂ ಹೆಚ್ಚಿನ ಅರ್ಜಿ ಸಲ್ಲಿಸಿದರು.

ಶಾಸಕ ಮಂತರ್ ಗೌಡ ಅವರು ಪ್ರತಿ ಅರ್ಜಿದಾರರನ್ನು ವೇದಿಕೆ ಬಳಿ ಕರೆದು ಅವರ ಸಮಸ್ಯೆ ಆಲಿಸುವ ಮೂಲಕ ಪರಿಹಾರಕ್ಕೆ ಸಂಬಂಧಿಸಿದ ಅಧಿಕಾರಿಗಳಿಗೆ ಸ್ಥಳದಲ್ಲಿ ಸೂಚನೆ ನೀಡಿದರು.

ಕೆಲವು ವೈಯಕ್ತಿಕ ಹಾಗೂ ವಿವಾದಿತ ಸಮಸ್ಯೆಗಳ ಪರಿಹಾರಕ್ಕೆ ಅಧಿಕಾರಿಗಳಿಗೆ ಕಾಲಾವಕಾಶ ನೀಡಿದರು. ಸ್ಥಳೀಯ ಪಂಚಾಯಿತಿ ‌ಮಟ್ಟದಲ್ಲಿ ಪರಿಹರಿಸಬಹುದಾದ‌ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.