29ರಂದು ವಿಶ್ವಮಾನವ ಕುವೆಂಪು ಜನ್ಮ ದಿನಾಚರಣೆ: ಸಿದ್ಧತಾ ಸಭೆ

| Published : Dec 13 2024, 12:50 AM IST

ಸಾರಾಂಶ

ಕುವೆಂಪು ಜನ್ಮದಿನದ ಪ್ರಯುಕ್ತ 29ರಂದು ವಿಶ್ವಮಾನವ ದಿನ ಅರ್ಥಪೂರ್ಣವಾಗಿ ಆಚರಿಸುವ ಸಂಬಂಧ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅಧ್ಯಕ್ಷತೆಯಲ್ಲಿ ಗುರುವಾರ ಪೂರ್ವಭಾವಿ ಸಭೆ ನಡೆಯಿತು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ವಿಶ್ವ ಮಾನವ ಕುವೆಂಪು ಅವರ ಜನ್ಮ ದಿನವನ್ನು ಕನ್ನಡ ಸಾಹಿತ್ಯ ಪರಿಷತ್ತು ಸಹಯೋಗದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.

ಕನ್ನಡಪ್ರಭ ವಾರ್ತೆ ಮಡಿಕೇರಿ

ರಾಷ್ಟ್ರಕವಿ ಕುವೆಂಪು ಜನ್ಮದಿನದ ಪ್ರಯುಕ್ತ 29ರಂದು ವಿಶ್ವಮಾನವ ದಿನ ಅರ್ಥಪೂರ್ಣವಾಗಿ ಆಚರಿಸುವ ಸಂಬಂಧ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅಧ್ಯಕ್ಷತೆಯಲ್ಲಿ ಗುರುವಾರ ಪೂರ್ವಭಾವಿ ಸಭೆ ನಡೆಯಿತು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ವಿಶ್ವ ಮಾನವ ಕುವೆಂಪು ಅವರ ಜನ್ಮ ದಿನವನ್ನು ಕನ್ನಡ ಸಾಹಿತ್ಯ ಪರಿಷತ್ತು ಸಹಯೋಗದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.

ಕುವೆಂಪು ಕುರಿತು ಉಪನ್ಯಾಸ, ಕವನ ವಾಚನ, ಗಮಕ ವಾಚನ ಏರ್ಪಡಿಸುವುದು, ಗೀತಾಗಾಯನ ಮತ್ತಿತರ ಕಾರ್ಯಕ್ರಮ ಆಚರಿಸುವುದರ ಜೊತೆಗೆ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ ಏರ್ಪಡಿಸಲು ತೀರ್ಮಾನಿಸಲಾಯಿತು.

ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಮಾತನಾಡಿ, ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳನ್ನು ಆಹ್ವಾನಿಸುವುದರ ಜೊತೆಗೆ ಹಲವು ಕಾರ್ಯಕ್ರಮ ಆಯೋಜಿಸುವ ಸಂಬಂಧ ಪೂರ್ವ ತಯಾರಿ ಮಾಡಿಕೊಳ್ಳುವಂತೆ ಸೂಚಿಸಿದರು.

ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಜಿಲ್ಲಾಧ್ಯಕ್ಷ ಟಿ.ಪಿ.ರಮೇಶ್‌ ಮಾತನಾಡಿ, ಕನ್ನಡ ನಾಡು ನುಡಿಗೆ ಕುವೆಂಪು ಅವರ ಕೊಡುಗೆ ಹೆಚ್ಚಿನದ್ದಾಗಿದ್ದು, ಆ ನಿಟ್ಟಿನಲ್ಲಿ ವಿವಿಧ ಕಾಲೇಜಿನ ವಿದ್ಯಾರ್ಥಿಗಳನ್ನು ಆಹ್ವಾನಿಸುವಂತೆ ಸಲಹೆ ಮಾಡಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಮುನೀರ್ ಅಹ್ಮದ್ ಮಾತನಾಡಿ, ಕುವೆಂಪು ಅವರ ಕುರಿತು ಭಾಷಣ ಸ್ಪರ್ಧೆ ಏರ್ಪಡಿಸುವಂತಾಗಬೇಕು ಎಂದರು

ಸ್ಕೌಟ್ಸ್ ಮತ್ತು ಗೈಡ್ಸ್‌ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯೂ ಮಾತನಾಡಿ, ನಗರದ ಡಿಸಿಸಿ ಬ್ಯಾಂಕ್ ಬಳಿ ಇರುವ ಕುವೆಂಪು ಅವರ ಪುತ್ಥಳಿ ಸ್ವಚ್ಛಗೊಳಿಸಬೇಕು ಎಂದು ಸಲಹೆ ಮಾಡಿದರು.

ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಅಧ್ಯಕ್ಷ ಲೋಕನಾಥ ಅಮೆಚೂರು ಮಾತನಾಡಿ, ಕುವೆಂಪು ಅವರ ಸಂದೇಶಗಳು ಯುವಜನರಿಗೆ ತಲುಪಬೇಕು. ಕನ್ನಡ ನಾಡು ನುಡಿಗೆ ಕುವೆಂಪು ಅವರು ನೀಡಿರುವ ಕೊಡುಗೆಯನ್ನು ಸದಾ ಸ್ಮರಿಸಬೇಕು ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಮಾತನಾಡಿ, ವಿಶ್ವ ಮಾನವ ದಿನಾಚರಣೆ ಪ್ರಯುಕ್ತ ಉಪನ್ಯಾಸ, ಕವನ ವಾಚನ, ಗಮಕ ವಾಚನ, ಹಾಡುಗಾರಿಕೆ ಹೀಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ಮಾಹಿತಿ ನೀಡಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ರೇವತಿ ರಮೇಶ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಂಜುಳ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಚಂದ್ರಶೇಖರ್, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಪಿ.ಪಿ.ಕವಿತಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ, ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕರಾದ ಪ್ರಸನ್ನ, ಜಿಲ್ಲಾ ಸಾಂಖ್ಯಿಕ ಅಧಿಕಾರಿ ನಾರಾಯಣ ಇತರರು ಇದ್ದರು.