ಆರು ಹಾಸಿಗೆ ಸಾಮರ್ಥ್ಯವುಳ್ಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಎಂಬಿಬಿಎಸ್‌ ವೈದ್ಯರಿಲ್ಲ. ಗುತ್ತಿಗೆ ಆಧಾರದಲ್ಲಿ ಒಬ್ಬ ವೈದ್ಯರು ಸೇವೆ ಸಲ್ಲಿಸುತ್ತಿದ್ದಾರೆ

ಅಮರಪ್ಪ ಕುರಿ ನವಲಿ

ನವಲಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಕೀಯ ಸೌಲಭ್ಯ, ತಜ್ಞ ವೈದ್ಯರ ಕೊರತೆಯಿಂದ ರೋಗಿಗಳು ಪರದಾಡುವಂತಾಗಿದೆ.

ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನಿತ್ಯ 200ರಿಂದ 300 ಜನ ರೋಗಿಗಳು ಬರುತ್ತಿದ್ದರೂ ಅವರಿಗೆ ಚಿಕಿತ್ಸೆ ನೀಡಲು ವೈದ್ಯರೇ ಇಲ್ಲದಂತಾಗಿದೆ. ಜತೆಗೆ ಆ್ಯಂಬುಲೆನ್ಸ್‌ ಮತ್ತು ಅಗತ್ಯ ವೈದ್ಯಕೀಯ ಸೌಲಭ್ಯಗಳೂ ಇಲ್ಲ. ಹೀಗಾಗಿ ಆಸ್ಪತ್ರೆಗೆ ಬರುವ ರೋಗಿಗಳು ನರಕಯಾತನೆ ಅನುಭವಿಸುತ್ತಿದ್ದಾರೆ.

ನವಲಿ ಹೋಬಳಿ ವ್ಯಾಪ್ತಿಯಲ್ಲಿ ಬರುವ 25ಕ್ಕೂ ಹೆಚ್ಚು ಗ್ರಾಮ, ಕ್ಯಾಂಪ್, ತಾಂಡಾ ಇವೆಲ್ಲವುಗಳಿಗೆ ನವಲಿ ಹೋಬಳಿಯಲ್ಲಿ ಇರುವ ಏಕೈಕ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆ್ಯಂಬುಲೆನ್ಸ್‌ ವ್ಯವಸ್ಥೆ ಇಲ್ಲ. ಅಪಘಾತ, ಹೆರಿಗೆ ಹಾಗೂ ತುರ್ತು ಸಂದರ್ಭದಲ್ಲಿ ಗ್ರಾಮೀಣ ಪ್ರದೇಶದಿಂದ ಕರೆದುಕೊಂಡು ಬರಲು, ಹೆಚ್ಚಿನ ಚಿಕಿತ್ಸೆಗಾಗಿ ತಾಲೂಕು ಅಥವಾ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲು ಆ್ಯಂಬುಲೆನ್ಸ್ ಇಲ್ಲದೇ ರೋಗಿಗಳು ಸಂಕಷ್ಟ ಎದುರಿಸುತ್ತಿದ್ದಾರೆ. ಕೆಲವು ಸಂದರ್ಭದಲ್ಲಿ ದುಬಾರಿ ಹಣ ನೀಡಿ ಖಾಸಗಿ ವಾಹನ ತೆಗೆದುಕೊಂಡು ರೋಗಿಗಳು ಚಿಕಿತ್ಸೆಗೆ ಆಸ್ಪತ್ರೆಗೆ ಬರುತ್ತಿದ್ದಾರೆ.

ವೈದ್ಯರ ಕೊರತೆ: ಆರು ಹಾಸಿಗೆ ಸಾಮರ್ಥ್ಯವುಳ್ಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಎಂಬಿಬಿಎಸ್‌ ವೈದ್ಯರಿಲ್ಲ. ಗುತ್ತಿಗೆ ಆಧಾರದಲ್ಲಿ ಒಬ್ಬ ವೈದ್ಯರು ಸೇವೆ ಸಲ್ಲಿಸುತ್ತಿದ್ದಾರೆ. ಬೆಳಗ್ಗೆ ಹಾಗೂ ರಾತ್ರಿ ತುರ್ತು ಸಂದರ್ಭದಲ್ಲಿ ವೈದ್ಯರು ಸಿಗದೇ ರೋಗಿಗಳು ಬೇರೆಡೆ ಹೋಗುವುದು ಅನಿವಾರ್ಯ. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೂಕ್ತ ಸೌಲಭ್ಯ ಸಿಗದೆ ರೋಗಿಗಳು ಖಾಸಗಿ ಆಸ್ಪತ್ರೆಗಳತ್ತ ಮುಖ ಮಾಡಿದ್ದಾರೆ. ಕೆಲವರು ತಾಲೂಕು ಹಾಗೂ ಜಿಲ್ಲಾಸ್ಪತ್ರೆಗೆ ತೆರಳಲು ಬಹಳ ಸಮಯ ಬೇಕಾಗುತ್ತದೆ ಎಂಬ ಕಾರಣಕ್ಕೆ ಸ್ಥಳೀಯವಾಗಿ ಬೇರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಆಸ್ಪತ್ರೆ ಮೇಲ್ದರ್ಜೆಗೇರಿಸಿ: ನವಲಿ ಹೋಬಳಿಯಲ್ಲಿ 30 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇದ್ದು, ಈ ಪ್ರಾಥಮಿಕ ಆರೋಗ್ಯ ಕೇಂದ್ರವೇ ಆಧಾರವಾಗಿದೆ. ₹ 2.5 ಕೋಟಿ ವೆಚ್ಚದಲ್ಲಿ ಆರು ಹಾಸಿಗೆವುಳ್ಳ ಆಸ್ಪತ್ರೆ ನಿರ್ಮಿಸಿದ್ದರೂ ಸಕಾಲದಲ್ಲಿ ಚಿಕಿತ್ಸೆ ಸಿಗುತ್ತಿಲ್ಲ ಎಂಬ ಕೊರಗು ಜನರದ್ದು, ದಿನದ 24 ಗಂಟೆ ಜನರಿಗೆ ಚಿಕಿತ್ಸೆ ನೀಡಲು ವೈದ್ಯರನ್ನು ನಿಯೋಜಿಸಬೇಕು. ಆಸ್ಪತ್ರೆ ಮೇಲ್ದರ್ಜೆಗೇರಿಸಿ ಆಧುನಿಕ ಉಪಕರಣ ನೀಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಸಿಬ್ಬಂದಿಗಳು ಸರಿಯಾಗಿ ಕೆಲಸ ಮಾಡದ ಕಾರಣ ರೋಗಿಗಳು ಚಿಕಿತ್ಸೆಯಿಂದ ವಂಚಿತರಾಗುತ್ತಿದ್ದಾರೆ. ನಿತ್ಯವೂ ಬರುವ ರೋಗಿಗಳು ವೈದ್ಯರಿಗೆ ಹಾಗೂ ಸಿಬ್ಬಂದಿಗೆ ಹಿಡಿಶಾಪ ಹಾಕುತ್ತಿದ್ದಾರೆ. ನವಲಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿರಬೇಕಾದ 108 ಆ್ಯಂಬುಲೆನ್ಸ್ ಸತತ ಎರಡು ತಿಂಗಳಿಂದ ಸರಿಯಾಗಿ ಕಾರ್ಯ ನಿರ್ವಸುತ್ತಿಲ್ಲ. ಹೀಗಾಗಿ ತುರ್ತು ಸಂದರ್ಭದಲ್ಲಿ ರೋಗಿಗಳು ಪರದಾಡುವಂತಹ ಪರಿಸ್ಥಿತಿ ನಿಭಾಯಿಸುವುದಕ್ಕೆ ಸಿಬ್ಬಂದಿ ಜತೆ ಜಗಳಗಳೂ ನಡೆಯುತ್ತಿವೆ ಎಂದು ನವಲಿ ಗ್ರಾಮಸ್ಥ ಓಂಕಾರಪ್ಪ ವಡ್ರಕಲ್ ತಿಳಿಸಿದ್ದಾರೆ.

ಗ್ರಾಮೀಣ ಪ್ರದೇಶದಲ್ಲಿ ಕಡ್ಡಾಯವಾಗಿ ಒಂದು ವರ್ಷ ಸೇವೆ ಸಲ್ಲಿಸಬೇಕೆಂಬ ನಿಯಮದ ಅನುಸಾರ ಎಂಬಿಬಿಎಸ್ ವೈದ್ಯಾಧಿಕಾರಿಗಳು ವಾರದಲ್ಲಿ ಮೂರು ದಿನ ನವಲಿ ಮತ್ತು ಮುಸ್ಲಾಪುರದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ತಜ್ಞ ವೈದ್ಯರು ಗ್ರಾಮೀಣ ಪ್ರದೇಶಕ್ಕೆ ಬಂದು ಸೇವೆ ಮಾಡುವುದಕ್ಕೆ ಮುಂದಾಗುತ್ತಿಲ್ಲ. ಕಾರಣ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದಕ್ಕೆ ಕೊಪ್ಪಳ ಡಿಎಚ್ಒ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತರಲಾಗಿದೆ ಎಂದು ನವಲಿ ಪ್ರಭಾರಿ ಆಡಳಿತ ವೈದ್ಯಾಧಿಕಾರಿ ಶರಣಪ್ಪ ತಿಳಿಸಿದ್ದಾರೆ.