ರೆಂಜಾಳದಲ್ಲಿ ಭೂ ಕುಸಿತ: ಉಸ್ತುವಾರಿ ಸಚಿವ ಖಾದರ್ ಪರಿಶೀಲನೆ
ಕಾರ್ಕಳ: ತಾಲೂಕಿನ ರೆಂಜಾಳ ಗ್ರಾಮದ ಹೇಡ್ಮೆ ಪ್ರದೇಶದಲ್ಲಿ ಹರಿಪ್ರಸಾದ್ ಹಾಗೂ ಸುಮಿತ್ರ ಅವರ ಮನೆ ಸಮೀಪ ಭೂ ಕುಸಿತ ಸಂಭವಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಶನಿವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಭೂಕುಸಿತದಿಂದ ಉಂಟಾಗಿರುವ ಪರಿಸ್ಥಿತಿ ಹಾಗೂ ಸ್ಥಳೀಯರ ಸುರಕ್ಷತೆ ಕುರಿತು ಅಧಿಕಾರಿಗಳಿಂದ ಸಚಿವರು ಮಾಹಿತಿ ಪಡೆದುಕೊಂಡರು. ಈ ಸಂದರ್ಭ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಚರ್ಚಿಸಿದರು.ಸ್ಥಳಕ್ಕೆ ಇತ್ತೀಚೆಗೆ ಜಿಎಸ್‌ಐ, ಬೆಂಗಳೂರು ತಂಡವೂ ಭೇಟಿ ನೀಡಿ ಭೂ ಕುಸಿತ ಪ್ರದೇಶದ ಪರಿಶೀಲನೆ ನಡೆಸಿತ್ತು. ಈ ಹಿನ್ನೆಲೆಯಲ್ಲಿ ತಾಂತ್ರಿಕ ವರದಿ ಹಾಗೂ ಸ್ಥಳದ ಸ್ಥಿತಿಗತಿಗಳ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು.
ಸ್ಥಳದಲ್ಲಿ ಕಾರ್ಕಳ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಜಿತ್ ಹೆಗ್ಡೆ, ತಹಸೀಲ್ದಾರ್ ಪ್ರದೀಪ್ ಕುರ್ಡೆಕರ್, ಬಿಜೆಪಿ ಅಧ್ಯಕ್ಷ ನವೀನ್ ನಾಯಕ್ ಸೇರಿದಂತೆ ಕಂದಾಯ ಅಧಿಕಾರಿಗಳು ಉಪಸ್ಥಿತರಿದ್ದರು. ಕಾರ್ಕಳ ಕಂದಾಯ ನಿರೀಕ್ಷಕರು ಹಾಗೂ ಗ್ರಾಮ ಆಡಳಿತ ಅಧಿಕಾರಿ ಸ್ಥಳದಲ್ಲಿದ್ದರು.ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಹಾಗೂ ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಕುಮಾರ್ ಶೆಟ್ಟಿ ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ಅಧಿಕಾರಿಗಳು ಭೂ ಕುಸಿತ ಪರಿಸ್ಥಿತಿ ಕುರಿತು ಮಾಹಿತಿ ಪಡೆದಿದ್ದಾರೆ.