ತಣ್ಣೀರುಹಳ್ಳ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳಿಗೆ ಚಾಲನೆ

| Published : Jun 20 2024, 01:00 AM IST

ತಣ್ಣೀರುಹಳ್ಳ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳಿಗೆ ಚಾಲನೆ
Share this Article
  • FB
  • TW
  • Linkdin
  • Email

ಸಾರಾಂಶ

ಸೋಮವಾರಪೇಟೆ ಸಮೀಪದ ತಣ್ಣೀರುಹಳ್ಳ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಆಂಗ್ಲ ಮಾಧ್ಯಮದಲ್ಲಿ ಎಲ್‍ಕೆಜಿ ಮತ್ತು ಯುಕೆಜಿ ತರಗತಿಗಳಿಗೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಬುಧವಾರ ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ಸೋಮವಾರಪೇಟೆ

ವಿದ್ಯಾರ್ಥಿಗಳೊಂದಿಗೆ ಶಿಕ್ಷಕರು ಸ್ನೇಹಮಯವಾಗಿ ಕೆಲಸ ಮಾಡಿದಲ್ಲಿ ಮಾತ್ರ, ಮಕ್ಕಳು ಉತ್ತಮ ಶಿಕ್ಷಣ ಪಡೆಯಲು ಸಾಧ್ಯ. ಯಾರಿಂದಲೂ ಕದಿಯಲಾಗದ ಆಸ್ತಿ ಶಿಕ್ಷಣ ಪಡೆದಲ್ಲಿ ನಮ್ಮ ಬದುಕು ಬದಲಾವಣೆ ಮಾಡಿಕೊಳ್ಳಬಹುದು ಎಂದು ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಹೇಳಿದ್ದಾರೆ.

ಇಲ್ಲಿಗೆ ಸಮೀಪದ ತಣ್ಣೀರುಹಳ್ಳ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಆಂಗ್ಲ ಮಾಧ್ಯಮದಲ್ಲಿ ಎಲ್‍ಕೆಜಿ ಮತ್ತು ಯುಕೆಜಿ ತರಗತಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಶಾಲೆಗಳಲ್ಲಿ ಒಳ್ಳೆಯ ಶಿಕ್ಷಣ ನೀಡುವುದರೊಂದಿಗೆ ಖಾಸಗಿ ವಿದ್ಯಾಸಂಸ್ಥೆಗಳಿಗೆ ಪೈಪೋಟಿ ನೀಡುವಂತೆ ಶಿಕ್ಷಕರು ಕೆಲಸ ಮಾಡಬೇಕೆಂದು ಅವರು ಕರೆ ನೀಡಿದರು.

ಬಿಇಒ ಭಾಗ್ಯಮ್ಮ ಮಾತನಾಡಿ, ಇಂದು ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಎಲ್ಲರ ಮೇಲಿದೆ. ಸರ್ಕಾರಿ ಶಾಲೆಗಳಲ್ಲಿ ಆಂಗ್ಲಮಾಧ್ಯಮ ಪ್ರಾರಂಭದ ಅನಿವಾರ್ಯತೆಯಿಂದ ದಾನಿಗಳು ಹಾಗೂ ಶಾಲಾಭಿವೃದ್ಧಿ ಸಹಕಾರದೊಂದಿಗೆ ತಾಲೂಕಿನ 8 ಶಾಲೆಗಳಲ್ಲಿ ಎಲ್‍ಕೆಜಿ ಮತ್ತು ಯುಕೆಜಿಯನ್ನು ಪ್ರಾರಂಭಿಸಲಾಗುತ್ತಿದೆ. ಈ ಯೋಜನೆಯನ್ನು ಯಶಸ್ವಿಗೊಳಿಸಲು ಪೋಷಕರು ತಮ್ಮ ಮಕ್ಕಳನ್ನು ತರಗತಿಗೆ ಸೇರಿಸುವ ಮೂಲಕ ಪ್ರೋತ್ಸಾಹಿಸಬೇಕು ಎಂದು ಹೇಳಿದರು.

ಕೊಡಗು ಜಿಲ್ಲೆ ಎಸ್‍ಎಸ್‍ಎಲ್‍ಸಿಯಲ್ಲಿ ಮೂರನೇ ಸ್ಥಾನ ಪಡೆದಿದ್ದು, ಸೋಮವಾರಪೇಟೆ ತಾಲೂಕು ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದಿದೆ. ಸರ್ಕಾರಿ ಶಾಲೆಗಳಲ್ಲೂ ಉತ್ತಮ ಶಿಕ್ಷಣ ನೀಡುತ್ತಿರುವುದಕ್ಕೆ ಇದು ಸಾಕ್ಷಿಯಾಗಿದ್ದು, ಸರ್ಕಾರಿ ಶಾಲೆಗಳ ಬಗ್ಗೆ ಅಸಡ್ಡೆ ತೋರದೆ, ಶಾಲೆಗಳನ್ನು ಉಳಿಸಿ ಬೆಳೆಸುವ ಕೆಲಸವನ್ನು ಎಲ್ಲರೂ ಮಾಡಬೇಕೆಂದರು.

ನೇರುಗಳಲೆ ಗ್ರಾಮ ಪಂಚಾಯಿತಿ ಅಧ್ಯಕ್ಷ ವಿನೋದ್, ಉಪಾಧ್ಯಕ್ಷೆ ಉಷಾ, ಎಸ್‍ಡಿಎಂಸಿ ಅಧ್ಯಕ್ಷ ತಿಮ್ಮಪ್ಪ, ಶಾಲಾ ಮುಖ್ಯ ಶಿಕ್ಷಕ ಹೇಮಂತ್‍ಕುಮಾರ್, ಪ್ರಮುಖರಾದ ಕೆ.ಎಂ. ಲೋಕೇಶ್, ಬಿ.ಬಿ. ಸತೀಶ್, ಎಸ್.ಎಂ. ಡಿಸಿಲ್ವ, ಶಿಕ್ಷಣ ಇಲಾಖೆಯ ಸಂಪನ್ಮೂಲ ವ್ಯಕ್ತಿ ಆಶಾ ಇದ್ದರು.