ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ವಿವಿಧ ವಾರ್ಡ್‌ಗಳಲ್ಲಿ ಮಹಾನಗರ ಪಾಲಿಕೆಯ ಸಾಮಾನ್ಯ ನಿಧಿಯಡಿ ಒಟ್ಟು ₹1.17 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಿರುವ ರಸ್ತೆ, ಉದ್ಯಾನವನ, ಚರಂಡಿ ಹಾಗೂ ಇತರ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಸಮರ್ಥ್ ಶಾಮನೂರು ಸೋಮವಾರ ಭೂಮಿಪೂಜೆ ನೆರವೇರಿಸಿದ್ದಾರೆ.

- 4 ವಾರ್ಡ್‌ಗಳಲ್ಲಿ ರಸ್ತೆ, ಪಾರ್ಕ್‌, ಚರಂಡಿ ಅಭಿವೃದ್ಧಿಗೆ ಶಾಸಕ ಭೂಮಿಪೂಜೆ

- - -

ಕನ್ನಡಪ್ರಭ ವಾರ್ತೆ ದಾವಣಗೆರೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ವಿವಿಧ ವಾರ್ಡ್‌ಗಳಲ್ಲಿ ಮಹಾನಗರ ಪಾಲಿಕೆಯ ಸಾಮಾನ್ಯ ನಿಧಿಯಡಿ ಒಟ್ಟು ₹1.17 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಿರುವ ರಸ್ತೆ, ಉದ್ಯಾನವನ, ಚರಂಡಿ ಹಾಗೂ ಇತರ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಸಮರ್ಥ್ ಶಾಮನೂರು ಸೋಮವಾರ ಭೂಮಿಪೂಜೆ ನೆರವೇರಿಸಿದರು.

ಕ್ಷೇತ್ರದ ವಾರ್ಡ್ ಸಂಖ್ಯೆ 1, 7, 21 ಹಾಗೂ 25 ರಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕರು, ಸ್ಥಳೀಯ ನಿವಾಸಿಗಳ ಸಮಸ್ಯೆಗಳನ್ನು ಆಲಿಸಿದರು. ಸಾರ್ವಜನಿಕರ ಅಗತ್ಯಗಳಿಗೆ ಅನುಗುಣವಾಗಿ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವುದರ ಜೊತೆಗೆ ಕಾಮಗಾರಿಗಳನ್ನು ಗುಣಮಟ್ಟದಿಂದ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ರಸ್ತೆ ಅಭಿವೃದ್ಧಿಗೆ ₹24.46 ಲಕ್ಷ:

ಮಹಾನಗರ ಪಾಲಿಕೆಯ 7ನೇ ವಾರ್ಡ್‌ನಲ್ಲಿ 2026–27ನೇ ಸಾಲಿನ ಸಾಮಾನ್ಯ ನಿಧಿಯಡಿ ₹14.96 ಲಕ್ಷ ವೆಚ್ಚದ ರಸ್ತೆ ಅಭಿವೃದ್ಧಿ ಹಾಗೂ ₹9.50 ಲಕ್ಷ ವೆಚ್ಚದ ಪೇವರ್ಸ್ ಅಳವಡಿಕೆ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು. ಈ ಕಾಮಗಾರಿಗಳಿಂದ ಸ್ಥಳೀಯ ನಿವಾಸಿಗಳಿಗೆ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ಉದ್ದೇಶ ಹೊಂದಲಾಗಿದೆ.

ಉದ್ಯಾನಗಳ ಅಭಿವೃದ್ಧಿ:

1ನೇ ವಾರ್ಡ್ ಗಾಂಧಿನಗರ ಸರ್ಕಲ್ ಹಾಗೂ ಚೌಡೇಶ್ವರಿ ನಗರದ ಉದ್ಯಾನವನಗಳ ಅಭಿವೃದ್ಧಿಗೆ 2025–26ನೇ ಸಾಲಿನ ಸಾಮಾನ್ಯ ನಿಧಿಯಡಿ ₹25 ಲಕ್ಷ ವೆಚ್ಚದ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಯಿತು. ಮಕ್ಕಳಿಗೆ ಆಟವಾಡಲು, ಹಿರಿಯ ನಾಗರಿಕರಿಗೆ ವಾಯುವಿಹಾರ ಹಾಗೂ ಸಾರ್ವಜನಿಕರಿಗೆ ವಿಶ್ರಾಂತಿ ಪಡೆಯಲು ಅನುಕೂಲ ಆಗುವಂತೆ ಉದ್ಯಾನಗಳನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ.

21ನೇ ವಾರ್ಡ್‌ನ ಹಳೆ ಚಿಕ್ಕನಹಳ್ಳಿ ಸಮೀಪ 2026–27ನೇ ಸಾಲಿನ ಸಾಮಾನ್ಯ ನಿಧಿಯಡಿ ₹52.27 ಲಕ್ಷ ವೆಚ್ಚದಲ್ಲಿ ಕಾಂಪೌಂಡ್ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಯಿತು. ಈ ಕಾಮಗಾರಿ ಮೂಲಕ ಸ್ಥಳೀಯ ಮೂಲಸೌಕರ್ಯಗಳನ್ನು ಬಲಪಡಿಸಲು ಉದ್ದೇಶಿಸಲಾಗಿದೆ. ಅದೇ ರೀತಿ, 25ನೇ ವಾರ್ಡ್‌ನ ಡಿ.ಸಿ.ಎಂ. ಟೌನ್‌ಶಿಪ್‌ನ ಶಿವರಾಮ ಕಾರಂತ ಉದ್ಯಾನವನದ ಒಳಭಾಗದಲ್ಲಿ ₹15 ಲಕ್ಷ ವೆಚ್ಚದಲ್ಲಿ ಪೈಪ್ ಚರಂಡಿ ನಿರ್ಮಾಣ ಹಾಗೂ ಇತರ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಯಿತು. ಉದ್ಯಾನವನದಲ್ಲಿ ಮಳೆನೀರು ಸರಾಗವಾಗಿ ಹರಿದುಹೋಗಲು ವ್ಯವಸ್ಥೆ ಕಲ್ಪಿಸುವುದರ ಜೊತೆಗೆ ಸಾರ್ವಜನಿಕ ಸೌಲಭ್ಯಗಳನ್ನು ಸುಧಾರಿಸಲು ಯೋಜಿಸಲಾಗಿದೆ.

ಗುಣಮಟ್ಟಕ್ಕೆ ಆದ್ಯತೆ:

ಈ ಸಂದರ್ಭ ಶಾಸಕ ಸಮರ್ಥ್ ಮಾತನಾಡಿ, ಕ್ಷೇತ್ರದ ಪ್ರತಿಯೊಂದು ವಾರ್ಡ್‌ನಲ್ಲಿಯೂ ಜನರಿಗೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಕಲ್ಪಿಸುವುದು ನಮ್ಮ ಆದ್ಯತೆಯಾಗಿದೆ. ರಸ್ತೆ, ಚರಂಡಿ, ಉದ್ಯಾನವನ ಸೇರಿದಂತೆ ಸಾರ್ವಜನಿಕರ ದೈನಂದಿನ ಬದುಕಿಗೆ ಸಂಬಂಧಿಸಿದ ಸೌಲಭ್ಯಗಳ ಅಭಿವೃದ್ಧಿಗೆ ಹಂತ ಹಂತವಾಗಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ನಗರದ ಸೌಂದರ್ಯ ಹೆಚ್ಚಿಸುವುದರ ಜೊತೆಗೆ ಮಕ್ಕಳಿಗೆ ಆಟದ ಮೈದಾನ, ಹಿರಿಯರಿಗೆ ವಾಯುವಿಹಾರಕ್ಕೆ ಅನುಕೂಲಕರ ವಾತಾವರಣ ಹಾಗೂ ಸಾರ್ವಜನಿಕರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕಿದೆ. ಮಳೆಗಾಲದಲ್ಲಿ ನೀರು ನಿಲ್ಲದಂತೆ ಚರಂಡಿ ವ್ಯವಸ್ಥೆ ಸುಧಾರಣೆಗೂ ಒತ್ತು ನೀಡಲಾಗುತ್ತಿದೆ. ಬೇಡಿಕೆಗಳಿಗೆ ಅನುಗುಣವಾಗಿ ಮೂಲಸೌಕರ್ಯಗಳನ್ನು ಕಲ್ಪಿಸುವ ಮೂಲಕ ಸ್ವಚ್ಛ, ಸುಂದರ ಹಾಗೂ ಸುಸಜ್ಜಿತ ದಾವಣಗೆರೆ ನಿರ್ಮಾಣಕ್ಕೆ ಶ್ರಮಿಸಲಾಗುವುದು ಎಂದು ಹೇಳಿದರು.

ಪಾಲಿಕೆಯ ಆಯುಕ್ತ ಡಾ. ಎನ್.ಮಹಾಂತೇಶ್, ಸ್ಥಳೀಯ ಜನಪ್ರತಿನಿಧಿಗಳು, ಪಾಲಿಕೆಯ ಅಧಿಕಾರಿಗಳು, ಎಂಜಿನಿಯರ್‌ಗಳು, ವಿವಿಧ ವಾರ್ಡ್ ಗಳ ಮುಖಂಡರು, ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

- - -

-23ಕೆಡಿವಿಜಿ40: ದಾವಣಗೆರೆಯಲ್ಲಿ ಶಾಸಕ ಸಮರ್ಥ ಶಾಮನೂರು ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು.