ಸಾರಾಂಶ
ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಮುಂಬರುವ ಜನವರಿ 12ರಂದು ನಗರದ ಫ್ರೀಡಂ ಪಾರ್ಕ್ ಆವರಣದಲ್ಲಿ ಯುವನಿಧಿ ಸರ್ಕಾರದ 5ನೇ ಮಹತ್ವಾಕಾಂಕ್ಷಿ ಯೋಜನೆ ಅನುಷ್ಠಾನ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿ, ಚುನಾವಣಾ ಪೂರ್ವದಲ್ಲಿ ಕೊಟ್ಟ ಮಾತಿನಂತೆ ಅನ್ನಭಾಗ್ಯ, ಶಕ್ತಿ, ಗೃಹಜ್ಯೋತಿ ಮತ್ತು ಗೃಹಲಕ್ಷ್ಮೀ ಯೋಜನೆಗಳು ಈಗಾಗಲೇ ಅನುಷ್ಠಾನಗೊಳಿಸಲಾಗಿದ್ದು, 5ನೇ ಗ್ಯಾರಂಟಿ ಯೋಜನೆಯನ್ನು ಜ.12ರಂದು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.
ಯುವನಿಧಿ ಯೋಜನೆ ರಾಜ್ಯಮಟ್ಟದ ಅನುಷ್ಠಾನ ಕಾರ್ಯಕ್ರಮಕ್ಕೆ ಶಿವಮೊಗ್ಗ ಹಾಗೂ ನೆರೆಯ ಜಿಲ್ಲೆಗಳಿಂದ ಸುಮಾರು ಒಂದು ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯ ಜನರು ಸೇರುವ ನಿರೀಕ್ಷೆ ಇದೆ. ಇದರ ವ್ಯವಸ್ಥಿತ ಅನುಷ್ಠಾನ, ವೇದಿಕೆ ನಿರ್ಮಾಣ ಮತ್ತು ವಾಹನ ಸಂಚಾರ ದಟ್ಟಣ ನಿಯಂತ್ರಣಕ್ಕೆ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳುವಂತೆ ಸಚಿವರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಸೂಚಿಸಿದರು.ಶಕ್ತಿ ಯೋಜನೆಯಡಿ ಜಿಲ್ಲೆಯ ಅನೇಕ ಕಡೆಗಳಿಂದ ಹೆಚ್ಚುವರಿ ಬಸ್‍ಗಳಿಗಾಗಿ ಬೇಡಿಕೆ ಇದ್ದು, ಸುಮಾರು 250ಕ್ಕೂ ಹೆಚ್ಚಿನ ಅರ್ಜಿಗಳು ಸಲ್ಲಿಕೆಯಾಗಿವೆ. ಇವುಗಳನ್ನು ಹಂತಹಂತವಾಗಿ ಒದಗಿಸುವಲ್ಲಿ ವೈಯಕ್ತಿಕವಾಗಿ ಗಮನಹರಿಸಲಾಗುವುದು. ಅಗತ್ಯವಿರುವ ಬಸ್‍ಗಳಿಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸಾರಿಗೆ ನಿಗಮದ ಜಿಲ್ಲಾ ಅಧಿಕಾರಿಗಳಿಗೆ ಸೂಚಿಸಿದರು.ಯುವನಿಧಿ ಯೋಜನೆಯಡಿ ಸೌಲಭ್ಯ ಪಡೆದುಕೊಳ್ಳಬಯಸುವ ನಿರುದ್ಯೋಗಿ ಯುವಕರು ತಮ್ಮ ಪ್ರಸ್ತಾವನೆಯನ್ನು ಇಂದಿನಿಂದಲೇ ಆನ್‍ಲೈನ್ ಮೂಲಕ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಹೆಚ್ಚು ಸಂಖ್ಯೆಯ ಅಭ್ಯರ್ಥಿಗಳು ಈ ಯೋಜನೆಯ ಲಾಭ ಪಡೆದುಕೊಳ್ಳುವಂತೆ ಅವರು ಸಲಹೆ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‍ಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ, ಅಪರ ಜಿಲ್ಲಾಧಿಕಾರಿ ಸಿದ್ಧಲಿಂಗರೆಡ್ಡಿ ಅವರು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.- - - ಬಾಕ್ಸ್ ಸಚಿವರ ಸೂಚನೆಗಳೇನು? - ಯುವನಿಧಿ ಯೋಜನೆಗೆ ಚಾಲನೆ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಯಾವುದೇ ಅಡಚಣೆ ಆಗಬಾರದು
- ವಾಹನ ನಿಲುಗಡೆಗೆ ಪ್ರತ್ಯೇಕ ವ್ಯವಸ್ಥೆ ಮತ್ತಿತರ ವಿಷಯಗಳ ಕುರಿತು ಸೂಕ್ಷ್ಮವಾಗಿ ಗಮನಿಸಬೇಕು- ಅನ್ನಭಾಗ್ಯ, ಗೃಹಲಕ್ಷ್ಮೀ ಜಾರಿ ಸಂಬಂಧಿಸಿದಂತೆ ತಾಂತ್ರಿಕ ಕಾರಣಗಳ ದೂರುಗಳು ಬಾರದಂತೆ ಜಾಗೃತಿ ವಹಿಸಬೇಕು
- ಯುವನಿಧಿ ಯೋಜನೆಯಡಿ ಸೌಲಭ್ಯ ಪಡೆಯದೇ ಬಾಕಿ ಉಳಿದಿರುವ ಅರ್ಹರನ್ನು ಗುರುತಿಸಬೇಕು- ಅರ್ಹರು ಯೋಜನೆ ವ್ಯಾಪ್ತಿಗೆ ಒಳಪಡಿಸುವಲ್ಲಿ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವುದು
- - --28ಎಸ್‌ಎಂಜಿಕೆಪಿ07:
ಶಿವಮೊಗ್ಗದ ಡಿಸಿ ಕಚೇರಿ ಸಭಾಂಗಣದಲ್ಲಿ ಬುಧವಾರ ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮಾತನಾಡಿದರು.