ಅಂತರ್-ಕಾಲೇಜು ಮಹಿಳಾ ಥ್ರೋಬಾಲ್ ಪಂದ್ಯಾವಳಿಯಲ್ಲಿ ಅತಿಥೇಯ ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯ ತಂಡ ಪ್ರಶಸ್ತಿ ಗೆದ್ದುಕೊಂಡಿದೆ. ಮಂಗಳೂರಿನ ಎಸ್.ಡಿ.ಎಂ. ಕಾನೂನು ಕಾಲೇಜು ದ್ವಿತೀಯ ಸ್ಥಾನ ಪಡೆಯಿತು.
ಕನ್ನಡಪ್ರಭ ವಾರ್ತೆ ಉಡುಪಿಇಲ್ಲಿನ ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದಲ್ಲಿ ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತರ್-ಕಾಲೇಜು ಮಹಿಳಾ ಥ್ರೋಬಾಲ್ ಪಂದ್ಯಾವಳಿಯಲ್ಲಿ ಅತಿಥೇಯ ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯ ತಂಡ ಪ್ರಶಸ್ತಿ ಗೆದ್ದುಕೊಂಡಿದೆ. ಮಂಗಳೂರಿನ ಎಸ್.ಡಿ.ಎಂ. ಕಾನೂನು ಕಾಲೇಜು ದ್ವಿತೀಯ ಸ್ಥಾನ ಪಡೆಯಿತು.ಸಂಜೆ ನಡೆದ ಬಹುಮಾನ ವಿತರಣಾ ಸಮಾರಂಭದಲ್ಲಿ ಕನ್ನರ್‌ಪಾಡಿ ಶ್ರೀ ಜಯದುರ್ಗಪರಮೇಶ್ವರಿ ದೇವಸ್ಥಾನದ ನಿಕಟಪೂರ್ವ ಅಧ್ಯಕ್ಷ ಕೃಷ್ಣಮೂರ್ತಿ ಆಚಾರ್ಯ ಅವರು ಮುಖ್ಯ ಅತಿಥಿಯಾಗಿದ್ದು, ಕಾನೂನು ವಿದ್ಯಾರ್ಥಿಗಳು ತಮ್ಮ ಮುಂದಿನ ವೃತ್ತಿ ಜೀವನದಲ್ಲಿ ನ್ಯಾಯಪರವಾಗಿ ಹೋರಾಟ ಮಾಡುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.ಕಾರ್ಯಕ್ರಮದ ಗೌರವ ಅತಿಥಿಗಳಾಗಿ ಆಗಮಿಸಿದ ನೋಟರಿ ವಕೀಲ ಆತ್ರಾಡಿ ಪೃಥ್ವಿರಾಜ್ ಹೆಗ್ಡೆ ಅವರು ಮಾತನಾಡಿ, ವಿದ್ಯಾರ್ಥಿಗಳು ಒಳ್ಳೆಯದನ್ನು ಮಾತನಾಡುವ ಮತ್ತು ಒಳ್ಳೆಯದನ್ನು ಆಲೋಚಿಸುವ ವಿಶಾಲವಾದ ಮನೋಭಾವವನ್ನು ರೂಢಿಸಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ರಘುನಾಥ್ ಕೆ.ಎಸ್. ವಹಿಸಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ನಿರ್ದೇಶಕಿ ಪ್ರೊ. ನಿರ್ಮಲಾ ಕುಮಾರಿ ಕೆ., ವಿದ್ಯಾರ್ಥಿ ಕ್ಷೇಮಾಧಿಕಾರಿ ಸುರೇಖಾ ಕೆ., ದೈಹಿಕ ಶಿಕ್ಷಣ ನಿರ್ದೇಶಕ ಪ್ರಕಾಶ್ ರಾವ್ ಡಿ., ವಿದ್ಯಾರ್ಥಿ ಕ್ರೀಡಾ ಕಾರ್ಯದರ್ಶಿಗಳಾದ ಆದಿತ್ಯ ಮತ್ತು ಲಕ್ಷ್ಮಿಕಾಂತ ಉಪಸ್ಥಿತರಿದ್ದರು.