ಸಾರಾಂಶ
ಕೋಲ್ಕತ್ತಾ ವೈದ್ಯಕೀಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಮತ್ತು ಕೊಲೆಯ ವಿರುದ್ಧ ಈಗಾಗಲೇ ಜನರು ಬೀದಿಗಿಳಿದಿದ್ದಾರೆ.
ಕನ್ನಡಪ್ರಭ ವಾರ್ತೆ ಮೈಸೂರು
ಆರ್.ಜಿ. ಕರ್ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ, ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಮೈಸೂರು ವಕೀಲರ ಸಂಘದವರು ನ್ಯಾಯಾಲಯದ ಮುಂಭಾಗದ ಗಾಂಧಿ ಪುತ್ಥಳಿ ಬಳಿ ಗುರುವಾರ ಪ್ರತಿಭಟಿಸಿದರು.ಕೋಲ್ಕತ್ತಾ ವೈದ್ಯಕೀಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಮತ್ತು ಕೊಲೆಯ ವಿರುದ್ಧ ಈಗಾಗಲೇ ಜನರು ಬೀದಿಗಿಳಿದಿದ್ದಾರೆ. ಹೀಗಾಗಿ, ಆರ್.ಜಿ. ಕರ್ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರನ್ನು ಕೆಲಸದಿಂದ ವಜಾ ಮಾಡಿ ವಿಚಾರಣೆಗೆ ಒಳಪಡಿಸಬೇಕು ಎಂದು ಅವರು ಒತ್ತಾಯಿಸಿದರು. ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿಗಳನ್ನು ತಕ್ಷಣ ಬಂಧಿಸಿ, ಅವರಿಗೆ ಕಠಿಣ ಶಿಕ್ಷೆ ವಿಧಿಸುವ ಕ್ರಮ ಜಾರಿಯಾಗಬೇಕು. ಬಿಹಾರದ ಮುಜಾಫರ್ ಪುರ ಜಿಲ್ಲೆಯಲ್ಲಿ ದಲಿತ ಬಾಲಕಿ ಅಪಹರಿಸಿ, ಸಾಮೂಹಿಕ ಅತ್ಯಾಚಾರ ಮಾಡಿದ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಎಂದು ಅವರು ಆಗ್ರಹಿಸಿದರು. ಮೈಸೂರು ವಕೀಲರ ಸಂಘದ ಅಧ್ಯಕ್ಷ ಲೋಕೇಶ್, ವಕೀಲರಾದ ಉಮೇಶ್, ಶಿವಣ್ಣ ಮೊದಲಾದವರು ಇದ್ದರು.