ಸಾರಾಂಶ
ನಗರದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ತೊಂದರೆಗೀಡಾಗಿರುವ ಪ್ರದೇಶಗಳಿಗೆ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕನ್ನಡಪ್ರಭ ವಾರ್ತೆ ಬೆಂಗಳೂರು
ನಗರದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ತೊಂದರೆಗೀಡಾಗಿರುವ ಪ್ರದೇಶಗಳಿಗೆ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಸೋಮವಾರ ಸಿಲ್ಕ್ ಬೋರ್ಡ್ ಸೇರಿ ಇತರೆ ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸಿದರು. ಒಳಚರಂಡಿ, ರಸ್ತೆ ಗುಂಡಿಯಲ್ಲಿ ಮತ್ತು ಕೆಳಸೇತುವೆಯಲ್ಲಿ ನಿಂತಿರುವ ನೀರು ಸೇರಿ ಇತರೆ ಅವ್ಯವಸ್ಥೆಗಳ ವೀಕ್ಷಿಸಿ, ಜನರು ಎದುರಿಸುತ್ತಿರುವ ಸಮಸ್ಯೆ ಬಗೆಹರಿಸದ ಸರ್ಕಾರದ ನಿರ್ಲಕ್ಷ್ಯತನ ವಿರುದ್ಧ ಕಿಡಿಕಾರಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, 16 ತಿಂಗಳ ಕಾಂಗ್ರೆಸ್ ಸರ್ಕಾರದ ಪಾಪದ ಫಲವನ್ನು ಬೆಂಗಳೂರಿನ ಜನರು ಅನುಭವಿಸಬೇಕಾಗಿದೆ. ರಾಜಕಾಲುವೆಯ ಹೂಳು ತೆಗೆದು ಸ್ವಚ್ಛ ಮಾಡುವ ಕೆಲಸವನ್ನು ಸರ್ಕಾರ ಮಾಡಿಲ್ಲ. ಇದರಿಂದಾಗಿ ತೇಲುತ್ತಿರುವ ಬೆಂಗಳೂರು ಎಂಬ ಅಪಖ್ಯಾತಿ ನಗರಕ್ಕೆ ಬಂದಿದೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಸಚಿವರು ಒಂದೂವರೆ ವರ್ಷದಲ್ಲಿ ಎಷ್ಟು ಒತ್ತುವರಿ ತೆರವು ಮಾಡಿದ್ದಾರೆ. ಎಷ್ಟು ಹೂಳು ತೆಗೆಸಿದ್ದಾರೆ ಎಂಬುದನ್ನು ತಿಳಿಸಬೇಕು ಎಂದು ತಿಳಿಸಿದರು.ಬೆಂಗಳೂರಿನಲ್ಲಿ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ಖಜಾನೆ ಖಾಲಿಯಾಗಿದೆ ಎಂಬುದು ನಮಗೂ ಗೊತ್ತಿದೆ. ಆದ್ದರಿಂದ ಕನಿಷ್ಠ 500 ಕೋಟಿ ರು. ಆದರೂ ಬಿಡುಗಡೆ ಮಾಡಬೇಕು. ಇಲ್ಲವೆಂದರೆ ಗುತ್ತಿಗೆದಾರರು ಮುಂದೆ ಬರುವುದಿಲ್ಲ. ಇದರ ಜೊತೆಗೆ ಕಸದ ಸಮಸ್ಯೆಯೂ ಸೃಷ್ಟಿಯಾಗಿದೆ. ಸಿಲ್ಕ್ ಬೋರ್ಡ್‌ನಲ್ಲಿ ಪ್ರತಿ ದಿನವೂ ಪ್ರವಾಹ ಉಂಟಾಗುತ್ತಿದೆ. ಪ್ರತಿ 15 ದಿನಕ್ಕೊಮ್ಮೆ ಪರಿಶೀಲನೆ ಮಾಡುತ್ತೇನೆ ಎಂಬುದಾಗಿ ಮುಖ್ಯಮಂತ್ರಿ ಹೇಳಿದ್ದರು. ಆದರೆ 6 ತಿಂಗಳಾದರೂ ಏನೂ ಮಾಡಿಲ್ಲ ಎಂದು ಆರೋಪಿಸಿದರು. ಈ ವೇಳೆ ಶಾಸಕ ಸತೀಶ್‌ರೆಡ್ಡಿ ಸೇರಿದಂತೆ ಅನೇಕ ಮುಖಂಡರು ಇದ್ದರು.