ಕನ್ನಡಪ್ರಭ ವಾರ್ತೆ ಬೆಂಗಳೂರು

ಕನ್ನಡೇತರರಿಗೆ ಕನ್ನಡ ಕಲಿಸುವ ಕಾರ್ಯ ಶ್ಲಾಘನೀಯವಾಗಿದೆ. ಅಧಿಕಾರಿಗಳು ಹಾಗೂ ನೌಕರರು ಸ್ಥಳೀಯ ಭಾಷೆಯನ್ನು ಕಲಿತರೆ ಆಡಳಿತ ನಡೆಸಲು ಸುಲಭವಾಗುವುದರ ಜೊತೆಗೆ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಲು ಸಾಧ್ಯವಾಗುತ್ತದೆ ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್.ಪ್ರಭುಶಂಕರ್ ಅಭಿಪ್ರಾಯಪಟ್ಟರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕೇಂದ್ರೀಯ ಸದನ ಕನ್ನಡ ಸಂಘದ ಸಂಯುಕ್ತ ಆಶ್ರಯದಲ್ಲಿ ಕೋರಮಂಗಲದ ಕೇಂದ್ರೀಯ ಸದನದಲ್ಲಿ ಆಯೋಜಿಸಲಾಗಿದ್ದ ‘ಕನ್ನಡ ಬಾರದವರಿಗೆ ಕನ್ನಡ ಕಲಿಕೆ ತರಗತಿಗಳು’ 14ನೇ ತಂಡದ ಸಮಾರೋಪ ಹಾಗೂ ಪ್ರಮಾಣಪತ್ರ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಸ್ಥಳೀಯ ಭಾಷೆಗೆ ಆದ್ಯತೆ ನೀಡಿದಾಗ ಸಮಾಜದ ಅಭಿವೃದ್ಧಿಯೊಂದಿಗೆ ಸಾಮರಸ್ಯವನ್ನು ಸಹ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಆದ್ದರಿಂದ ಅಧಿಕಾರಿಗಳು ಮತ್ತು ನೌಕರರು ಸ್ಥಳೀಯ ಭಾಷೆ ಕಲಿಕೆಗೆ ಆದ್ಯತೆ ನೀಡಬೇಕು. ರಾಜ್ಯಪಾಲರಾದ ಥಾವರ್‌ಚಂದ್ ಗೆಹಲೋಥ್‌ ಅವರು ರಾಜ್ಯಕ್ಕೆ ಆಗಮಿಸಿದ ದಿನದಿಂದಲೇ ಕನ್ನಡ ಕಲಿಯಲು ವಿಶೇಷ ಪ್ರಯತ್ನ ನಡೆಸಿದ್ದರು. ಅದರ ಫಲವಾಗಿ ಇಂದು ಕನ್ನಡವನ್ನು ಸ್ಪಷ್ಟವಾಗಿ ಅರ್ಥೈಸಿಕೊಳ್ಳುವ ಮಟ್ಟಕ್ಕೆ ಬಂದಿರುವುದು ಎಲ್ಲರಿಗೂ ಮಾದರಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕನ್ನಡ ಕಲಿಕಾ ತರಗತಿಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಕಲಿಕಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಲಾಯಿತು. ಸಂಪನ್ಮೂಲ ವ್ಯಕ್ತಿ ಡಾ.ಶಿವರಾಜ್ ಜಿ.ಹೊಸಹಳ್ಳ ಅವರನ್ನು ಇದೇ ಸಂದರ್ಭದಲ್ಲಿ ಅಭಿನಂದಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ವಹಿಸಿದ್ದರು. ಕಾರ್ಯದರ್ಶಿ ಡಾ.ಸಂತೋಷ್ ಹಾನಗಲ್, ಸಂಘದ ಅಧ್ಯಕ್ಷ ಮ.ಚಂದ್ರಶೇಖರ್ ಮತ್ತಿತರರು ಉಪಸ್ಥಿತರಿದ್ದರು.