ಸಾರಾಂಶ
ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ (ಪಪೂ) ಹಾಗೂ ಉಡುಪಿ ಪೂರ್ಣಪ್ರಜ್ಞ ಪಪೂ ಕಾಲೇಜಿನ ಆಶ್ರಯದಲ್ಲಿ ಉಡುಪಿ ಜಿಲ್ಲಾಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ - ಬಾಲಕಿಯರ ಕರಾಟೆ ಪಂದ್ಯಾಟವನ್ನು ಪ.ಪೂ. ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ ಉದ್ಘಾಟಿಸಿದರು.
ಕನ್ನಡಪ್ರಭ ವಾರ್ತೆ ಉಡುಪಿ
ಶಿಕ್ಷಣದೊಂದಿಗೆ ಕ್ರೀಡಾಚಟುವಟಿಕೆಗಳು ಕೂಡ ಅಗತ್ಯ. ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಕ್ಷಮತೆಗೆ ಕ್ರೀಡೆ ಸಹಕಾರಿಯಾಗಿದೆ. ಕರಾಟೆ ಸಮರ ಕಲೆಯಾದರೂ ಒಂದು ಕ್ರೀಡೆಯಾಗಿ ಅದು ಆತ್ಮರಕ್ಷಣೆಗೆ ಸಹಾಯಕವಾಗಿದೆ ಎಂದು ಪ.ಪೂ. ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ ಹೇಳಿದರು.ಅವರು ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ (ಪಪೂ) ಹಾಗೂ ಉಡುಪಿ ಪೂರ್ಣಪ್ರಜ್ಞ ಪಪೂ ಕಾಲೇಜಿನ ಆಶ್ರಯದಲ್ಲಿ ಉಡುಪಿ ಜಿಲ್ಲಾಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ - ಬಾಲಕಿಯರ ಕರಾಟೆ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ಪ್ರಾಚಾರ್ಯರಾದ ಸಂತೋಷ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಆಡಳಿತ ಮಂಡಳಿಯ ಗೌರವ ಕಾರ್ಯದರ್ಶಿ ಡಾ.ಶ್ರೀರಮಣ ಐತಾಳ್, ಜಿಲ್ಲಾ ಕರಾಟೆ ಅಸೋಸಿಯೇಶನ್ ಪ್ರಧಾನ ಕಾರ್ಯದರ್ಶಿ ವಾಮನ್ ಪಾಲನ್, ಅಧ್ಯಕ್ಷ ರೋಹಿತಾಕ್ಷ ಉದ್ಯಾವರ, ರಾಜ್ಯ ಕರಾಟೆ ಅಸೋಸಿಯೇಶನ್ ಪ್ರಧಾನ ಕಾರ್ಯದರ್ಶಿ ರವಿ ಸಾಲ್ಯಾನ್, ಜಿಲ್ಲಾ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷ ಸತೀಶ್ ಹೆಗ್ಡೆ, ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಕ್ರೀಡಾ ಸಂಯೋಜಕ ದಿನೇಶ್ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಇದೇ ಸಂದರ್ಭದಲ್ಲಿ ಕರಾಟೆ ತರಬೇತುದಾರ, ಕರಾಟೆ ಅಸೋಸಿಯೇಶನ್‌ನ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿ ಸಾಲ್ಯಾನ್ ಅವರನ್ನು ಕಾಲೇಜು ವತಿಯಿಂದ ಸನ್ಮಾನಿಸಲಾಯಿತು.ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಮಂಜುನಾಥ ಜೋಗಿ ಕಾರ್ಯಕ್ರಮವನ್ನು ಸಂಯೋಜಿಸಿ ಸ್ವಾಗತಿಸಿದರು. ದೈಹಿಕ ಶಿಕ್ಷಣ ಉಪನ್ಯಾಸಕಿ ಧನುಶ್ರೀ ಗೌಡ ವಂದಿಸಿದರು. ಕನ್ನಡ ಉಪನ್ಯಾಸಕ ರಮಾನಂದ ರಾವ್ ನಿರೂಪಿಸಿದರು. ಪ್ರಾಂಜಲಿ ಮತ್ತು ಶ್ರಾವಣಿ ಪ್ರಾರ್ಥಿಸಿದರು.